

ಮೈಸೂರು: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ರಾಷ್ಟ್ರೀಯ ಮೆಗಾ ಲೋಕ ಅದಾಲತ್‌ಅನ್ನು ಜುಲೈ 12ರಂದು ಆಯೋಜಿಸಲಾಗಿದ್ದು, ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳಲ್ಲಿ ತಕ್ಷಣ ಪರಿಹಾರ ಪಡೆದುಕೊಳ್ಳಲು ಸುವರ್ಣಾವಕಾಶವಾಗಿದೆ.
ಅದಾಲತ್‌ನಲ್ಲಿ ರಾಜಿಯಾಗಬಲ್ಲ, ಅಪರಾಧಿಕ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಮರು ಸ್ಥಾಪಿಸಲ್ಪಡುವ ಪ್ರಕರಣಗಳು, ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು, ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಕಾಯಂ ಜನತಾ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು, ಚೆಕ್ ಅಮಾನ್ಯದ ಪ್ರಕರಣಗಳು, ಮೋಟಾರ್ ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು,
ಕಾರ್ಮಿಕ ವಿವಾದಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಭೂ ಸ್ವಾಧೀನ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪಿಂಚಣಿ ಪ್ರಕರಣಗಳು, ಸಾರ್ವಜನಿಕ ಉಪಯುಕ್ತತೆ ಸೇವೆಗಳ ಸಂಬಂಧಿಸಿದ ಪ್ರಕರಣಗಳು, ರಾಜಿಯಾಗಬಲ್ಲ ಸಿವಿಲ್ ಮತ್ತು ಇತರ ಪ್ರಕರಣಗಳು, ವೈವಾಹಿಕ, ಕುಟುಂಬ ನ್ಯಾಯಾಲಯದ ಪ್ರಕರಣಗಳನ್ನು (ವಿಚ್ಛೇದನ ಹೊರತುಪಡಿಸಿ) ರಾಜಿ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ.
ನ್ಯಾಯಾಲಯಗಳಲ್ಲಿ ಉಭಯ ಪಕ್ಷಕಾರರು ರಾಜಿ ಮಾಡಿಕೊಳ್ಳಲು ಸೂಕ್ತ ಮಾರ್ಗದರ್ಶನ ನೀಡಲಾಗುತ್ತದೆ.
ಇಬ್ಬರಿಗೂ ಒಪ್ಪಿಗೆಯಾಗುವಂತೆ ಪ್ರಕರಣವು ತೀರ್ಮಾನವಾಗುವುದರಿಂದ ಬಾಂಧವ್ಯವು ಉಳಿದು ವಿವಾದವು ತೀರ್ಮಾನವಾಗುತ್ತದೆ.
ನ್ಯಾಯಾಲಯದಲ್ಲಿ ದಾಖಲಾಗದೆ ಇರುವ ಪ್ರಕರಣಗಳನ್ನು ಸಹ ರಾಜಿ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗುವುದು. ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ನ್ಯಾಯಾಲಯ ಶುಲ್ಕವನ್ನು ಪೂರ್ಣವಾಗಿ ಮರುಪಾವತಿಸಲಾಗುವುದು.
ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆಯಾದಲ್ಲಿ ಮಾತ್ರ ರಾಜಿ ಮಾಡಿಕೊಳ್ಳಬಹುದು. ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಇದೊಂದು ವಿಶೇಷ ಅವಕಾಶವಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಾಹಿತಿಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಸಹಾಯವಾಣಿ 1800-425-0131, 15100 ಹಾಗೂ ತಾಲೂಕುಗಳಿಗೆ ಸಂಬಂಧಿಸಿದಂತೆ ತಾಲೂಕು ಕಾನೂನು ಸೇವಾ ಸಮಿತಿಗಳನ್ನು ನೇರವಾಗಿ ಸಂಪರ್ಕಿಸಬಹುದು.