ಜೂ. 22ರ ಕರ್ನಾಟಕ ಬಂದ್​ಗೆ 25 ವಾಣಿಜ್ಯೋದ್ಯಮ ಸಂಸ್ಥೆಗಳ ಬೆಂಬಲ

h20-KCCI bandh
Published on

ಹುಬ್ಬಳ್ಳಿ: ವಿದ್ಯುತ್ ದರ ಏರಿಕೆ ವಿರೋಧಿಸಿ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯು ನೀಡಿರುವ ಜೂ. 22ರ ಕರ್ನಾಟಕ ಬಂದ್ ಕರೆಗೆ ರಾಜ್ಯದ ವಿವಿಧೆಡೆಯ 25 ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆಗಳು ಬೆಂಬಲ ವ್ಯಕ್ತಪಡಿಸಿವೆ ಎಂದು ಸಂಸ್ಥೆಯ ಅಧ್ಯಕ್ಷ ವಿನಯ ಜವಳಿ ತಿಳಿಸಿದರು.

ಹುಬ್ಬಳ್ಳಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಒಟ್ಟು 30 ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆಗಳಿವೆ. 5 ಜಿಲ್ಲೆಗಳ ವಾಣಿಜ್ಯೋದ್ಯಮ ಸಂಸ್ಥೆಗಳು ಬಂದ್​ಗೆ ಬೆಂಬಲ ವ್ಯಕ್ತಪಡಿಸಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ ಎಂಬ ಕಾರಣಕ್ಕೆ ನಾವು ಹೋರಾಟ (ಬಂದ್) ಮಾಡುತ್ತಿಲ್ಲ. ಜನ ಸಾಮಾನ್ಯರ, ವಾಣಿಜ್ಯೋದ್ಯಮಿಗಳ ನೋವು ಸರ್ಕಾರಕ್ಕೆ ತಿಳಿಯಲಿ ಎಂಬ ಕಾರಣಕ್ಕೆ ಬಂದ್​ಗೆ ಕರೆ ನೀಡಿದ್ದೇವೆ ಎಂದು ಸ್ಪಷ್ಟ ಪಡಿಸಿದರು.

ಜೂ. 19ರಂದು ಸಂಸ್ಥೆಯ ಕಚೇರಿಯಲ್ಲಿ ಕರೆದ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಹಾಗೂ ಉದ್ದಿಮೆದಾರರ ಸಭೆಯಲ್ಲಿ ಕರ್ನಾಟಕ ಬಂದ್​ಗೆ ಒಮ್ಮತದ ನಿರ್ಣಯ ಕೈಗೊಳ್ಳಲಾಗಿದೆ. ಬಂದ್ ಕರೆಯನ್ನು ಹಿಂದಕ್ಕೆ ಪಡೆಯಬೇಕೆಂಬ ರಾಜ್ಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತಾ ಅವರ ಮನವಿಯನ್ನು ತಿರಸ್ಕರಿಸಿದ್ದೇವೆ. ಜೂ. 22ರಂದು ಬೆಳಗ್ಗೆ 10 ಗಂಟೆಗೆ ಹುಬ್ಬಳ್ಳಿಯ ಜೆ.ಸಿ. ನಗರದಲ್ಲಿರುವ ಸಂಸ್ಥೆಯ ಕಚೇರಿಯಿಂದ ಮಿನಿ ವಿಧಾನಸೌಧದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ತಹಸೀಲ್ದಾರ ಮೂಲಕ ರಾಜ್ಯ ಸರ್ಕಾರಕ್ಕೆ, ಬಳಿಕ ಧಾರವಾಡಕ್ಕೆ ತೆರಳಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net