

ಮಂಗಳೂರು: ರಾಷ್ಟ್ರೀಯ ಲೋಕ ಅದಾಲತ್ ಹಿನ್ನೆಲೆಯಲ್ಲಿ ಜೂ.25ರಂದು ದ.ಕ. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಜಿಲ್ಲಾ ಮಟ್ಟದ ಲೋಕ ಅದಾಲತ್ ಆಯೋಜಿಸಲಾಗಿದೆ. ಈ ವೇಳೆ ಕಾನೂನು ಅರಿವು, ನೆರವು ಮತ್ತು ರಾಜಿ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗುವುದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ರವೀಂದ್ರ ಎಂ.ಜೋಶಿ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಒಟ್ಟು 52,238 ಪ್ರಕರಣಗಳು ಬಾಕಿ ಉಳಿದಿದ್ದು, ಮೇ 26ರವರೆಗೆ 4,040 ಪ್ರಕರಣಗಳನ್ನು ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ರಾಜಿಗಾಗಿ ಗುರುತಿಸಲಾಗಿದೆ. ಜೂ.25ರವರೆಗೂ ಇಂತಹ ಪ್ರಕರಣಗಳನ್ನು ಗುರುತಿಸುವುದರಿಂದ ಪ್ರಕರಣಗಳ ಸಂಖ್ಯೆ ಹೆಚ್ಚಾಗಲಿದೆ. ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ಶುಲ್ಕವನ್ನು ಮರುಪಾವತಿಸಲಾಗುವುದು ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ರಾಜಿಯಾಗಬಲ್ಲ ಕ್ರಿಮಿನಲ್ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಕಾರ್ಮಿಕ ವೇತನ, ಗ್ರಾಹಕರ ವೇದಿಕೆ, ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಿಸಿದ, ಚೆಕ್ ಅಮಾನ್ಯ, ಮೋಟಾರು ವಾಹನ ಅಪಘಾತ ಪ್ರಕರಣ, ಕಾರ್ಮಿಕ ವಿವಾದ, ವಿದ್ಯುತ್-ನೀರಿನ ಶುಲ್ಕ, ಭೂಸ್ವಾಧೀನ, ವಿಚ್ಛೇದನೆ ಹೊರತುಪಡಿಸಿ, ವೈವಾಹಿಕ/ ಕುಟುಂಬ ನ್ಯಾಯಾಲಯದ ಪ್ರಕರಣಗಳು ಮೊದಲಾದವುಗಳನ್ನು ರಾಜಿ ಸಂಧಾನ ಮೂಲಕ ಇತ್ಯರ್ಥಪಡಿಸಿಕೊಳ್ಳಲಾಗುತ್ತದೆ. ನ್ಯಾಯಾಲಯ ಪೂರ್ವ ವ್ಯಾಜ್ಯ(ಪ್ರೀ ಲಿಟಿಗೇಶನ್ ಕೇಸ್)ಗಳನ್ನೂ ಕೈಗೆತ್ತಿಕೊಳ್ಳಲಾಗುತ್ತದೆ ಎಂದು ತಿಳಿಸಿದರು.
ಪೋಕ್ಸೋ-1ರ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಧೀಶ ಪೃಥ್ವಿರಾಜ್ ವರ್ಣೇಕರ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ರಭಾರ ಸದಸ್ಯ ಕಾರ್ಯದರ್ಶಿ ಮಧುಕರ್ ಭಾಗವತ್ ಉಪಸ್ಥಿತರಿದ್ದರು.