ಮೈಸೂರು: ಉಪ ಲೋಕಾಯುಕ್ತರಾದ ಕೆ.ಎನ್.ಫಣೀಂದ್ರ ಅವರು ಜಿಲ್ಲಾ ಪ್ರವಾಸ ಕೈಗೊಂಡು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ.
ಜೂ.17 ಹಾಗೂ ಜೂ.19ರಂದು ಬೆಳಗ್ಗೆ 10 ರಿಂದ 1.30 ರವರೆಗೆ ಮತ್ತು 2.30 ರಿಂದ 5 ರವರೆಗೆ ಮೈಸೂರಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕಾರ ಮತ್ತು ವಿಚಾರಣೆಯನ್ನು ಹಮ್ಮಿಕೊಂಡಿದ್ದಾರೆ.
ಜಿಲ್ಲೆಯಲ್ಲಿ ಯಾರಿಗಾದರೂ ಸರ್ಕಾರಿ ಅಧಿಕಾರಿ ಅಥವಾ ನೌಕರರಿಂದ ತಮಗೆ ಕಾನೂನು ರೀತಿಯಲ್ಲಿ ಆಗಬೇಕಾದ ಕೆಲಸದಲ್ಲಿ ವಿಳಂಬವೇನಾದರೂ ಆಗಿದ್ದರೆ ಅಥವಾ ಅಧಿಕಾರಿ, ನೌಕರರು ನ್ಯಾಯಯುತವಾಗಿ ಮಾಡಿಕೊಡಬೇಕಾದ ಕೆಲಸಗಳಲ್ಲಿ ವೃಥಾ ತೊಂದರೆ ಕೊಡುವುದು ಅಥವಾ ಇನ್ಯಾವುದೇ ತರಹದ ದುರಾಡಳಿತದಲ್ಲಿ ತೊಡಗಿದ್ದರೆ ಅದರಿಂದ ತೊಂದರೆಗೊಳಗಾದ ಸಾರ್ವಜನಿಕರು ಉಪ ಲೋಕಾಯುಕ್ತರ ಮುಂದೆ ತಮ್ಮ ಅಹವಾಲುಗಳನ್ನು ಲಿಖಿತ ರೂಪದಲ್ಲಿ ಸಲ್ಲಿಸಬಹುದಾಗಿದೆ ಎಂದು ಮೈಸೂರು ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಸ್.ಸುರೇಶ್‌ಬಾಬು ಹೇಳಿಕೆಯಲ್ಲಿ ತಿಳಿಸಿದ್ದಾರೆ.