

ರಾಮನಗರ: ನಗರದ ಹೊರವಲಯದಲ್ಲಿ ನಿರ್ಮಾಣವಾಗುತ್ತಿರುವ 73 ಕೋಟಿ ರೂ. ವೆಚ್ಚದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಕಟ್ಟಡದ ಬಾಕಿ ಕಾಮಗಾರಿಯನ್ನು ಜೂನ್ ಒಳಗೆ ಪೂರ್ಣಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ವಿಕಾಸಸೌಧದಲ್ಲಿ ಬುಧವಾರ ನಡೆದ ಸಭೆಯಲ್ಲಿ ಮಾತನಾಡಿ, ಬೆಂಗಳೂರು-ಮೈಸೂರು ಹೆದ್ದಾರಿ ಪಕ್ಕದ ಜಾನಪದ ಲೋಕದ ಹತ್ತಿರ ನಿರ್ಮಾಣವಾಗುತ್ತಿರುವ ಕ್ಯಾಂಪಸ್ ಅನ್ನು ಅತ್ಯಾಧುನಿಕ ರೀತಿಯಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಅಗತ್ಯವಾದ ಸುಸಜ್ಜಿತ ಹಾಸ್ಟೆಲ್, ಪ್ರಯೋಗಾಲಯ, ತರಗತಿ, ಗ್ರಂಥಾಲಯ, ನೀರು ಮತ್ತು ಒಳಚರಂಡಿ ಸೌಲಭ್ಯಗಳು, ನಡಿಗೆ ಪಥಗಳು ಕಡ್ಡಾಯವಾಗಿ ಇರಬೇಕು. 2022-23ನೇ ಸಾಲಿನ ಶೈಕ್ಷಣಿಕ ತರಗತಿಗಳು ಹೊಸ ಕ್ಯಾಂಪಸ್‌ನಲ್ಲೇ ನಡೆಯುವಂತಾಗಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶಿಸಿದರು. ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಜಾಗತಿಕ ಗುಣಮಟ್ಟದ ಬೋಧನೆ ಇದ್ದು, ಸ್ಥಳೀಯ ಸಮುದಾಯಕ್ಕೆ ಇದರ ಲಾಭ ದೊರಕುವಂತಾಗಬೇಕು ಎಂದರು.
ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ. ಪ್ರದೀಪ್, ಜಿಲ್ಲಾ ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಇಂಜಿನಿಯರ್ ವಿಜಯ್ ಗೋಪಾಲ್ ಇತರ ಅಧಿಕಾರಿಗಳು ಇದ್ದರು.