ಜೆಜೆಎಂ ಕಾಮಗಾರಿ ಪೂರ್ಣಗೊಳಿಸಿ

7Manju4Web
ಬೆಳಗಾವಿ ಜಿಪಂ ಸಭಾಂಗಣದಲ್ಲಿ ಏರ್ಪಡಿಸಿದ್ದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಮಾತನಾಡಿದರು. ಸಂಸದೆ ಮಂಗಲ ಅಂಗಡಿ, ಸಿಇಒ ದರ್ಶನ ಎಚ್.ವಿ. ಇತರರಿದ್ದರು.
Published on

ಬೆಳಗಾವಿ: ಸಾಕಷ್ಟು ಅನುದಾನ ಲಭ್ಯವಿದ್ದರೂ ಜಲಜೀವನ ಮಿಷನ್ (ಜೆಜೆಎಂ) ಯೋಜನೆ ಕಾಮಗಾರಿಗಳು ಆಮೆಗತಿಯಲ್ಲಿ ಸಾಗುತ್ತಿವೆ. ಅವಧಿ ಮುಗಿದರೂ ಕಾಮಗಾರಿ ಪೂರ್ಣಗೊಂಡಿಲ್ಲ ಎಂದು ಸಂಸದ ಅಣ್ಣಾಸಾಹೇಬ ಜೊಲ್ಲೆ ಆಕ್ರೋಶ ವ್ಯಕ್ತಪಡಿಸಿದರು.

ನಗರದ ಜಿಪಂ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮನೆ ಮನೆಗೆ ಶುದ್ಧ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲು ಸರ್ಕಾರವು ಜೆಜೆಎಂ ಯೋಜನೆ ಅನುಷ್ಠಾನಗೊಳಿಸಿ ಎರಡು ವರ್ಷ ಕಳೆದಿದೆ. ಆದರೂ ಕೆಲವೆಡೆ ಇನ್ನೂ ಕಾಮಗಾರಿ ಆರಂಭವಾಗಿಲ್ಲ. ಕಾಮಗಾರಿ ಪೂರ್ಣಗೊಂಡರೂ ಸಮರ್ಪಕವಾಗಿ ಬಳಕೆಗೆ ಸಾಧ್ಯವಾಗುತ್ತಿಲ್ಲ ಎಂದು ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡರು.

2020-21 ಮತ್ತು 2021-22ನೇ ಸಾಲಿನ ಅವಧಿಯಲ್ಲಿ ಕೈಗೊಂಡಿರುವ ಜೆಜೆಎಂ ಎಲ್ಲ ಕಾಮಗಾರಿಗಳು ನಿಗದಿತ ಸಮಯದಲ್ಲಿಯೇ ಪೂರ್ಣಗೊಳಿಸಬೇಕು. ಆಯಾ ಗ್ರಾಮಗಳ ಜನಸಂಖ್ಯೆಗೆ ಅನುಗುಣವಾಗಿ 50 ರಿಂದ 1 ಲಕ್ಷ ಲೀಟರ್ ಸಾಮರ್ಥ್ಯದ ನೀರಿನ ಟ್ಯಾಂಕರ್ ನಿರ್ಮಿಸಲಾಗಿದೆ. ಆದರೆ, ಕೆಲ ಕಡೆ ನಿರ್ಮಿಸುತ್ತಿಲ್ಲ ಎಂಬ ಮಾಹಿತಿ ಬಂದಿದೆ. ಬೇಡಿಕೆಗೆ ಅನುಗುಣವಾಗಿ ಕಾಮಗಾರಿ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸಂಸದೆ ಮಂಗಲ ಅಂಗಡಿ ಮಾತನಾಡಿ, ಜೆಜೆಎಂ ಯೋಜನೆ ಅಡಿಯಲ್ಲಿ ಕೊಳವೆ ಬಾವಿ, ತೆರೆದ ಬಾವಿ, ನದಿ ನೀರು ಸೇರಿ ಕುಡಿಯುವ ನೀರಿನ ಮೂಲಗಳನ್ನು ಖಚಿತಪಡಿಸಿಕೊಳ್ಳಿ. ಕೆಲವೆಡೆ ಜೆಜೆಎಂ ಗುತ್ತಿಗೆದಾರರು ನೀರಿನ ಟ್ಯಾಂಕರ್‌ಗಳನ್ನು ನಿರ್ಮಾಣ ಮಾಡದಿರುವ ಮಾಹಿತಿ ಬಂದಿದೆ. ಇಂತಹ ಸಮಸ್ಯೆಗಳು ಮರುಕಳಿಸದಂತೆ ಎಚ್ಚರ ವಹಿಸಬೇಕು. ಪ್ರತಿಯೊಂದು ಮನೆಗೆ ನಳ ಸಂಪರ್ಕ ಕಲ್ಪಿಸಬೇಕು ಎಂದು ಸೂಚನೆ ನೀಡಿದರು.

ಡಯಾಲಿಸಿಸ್ ಕೇಂದ್ರ ಸ್ಥಾಪಿಸಿ: ಗ್ರಾಮೀಣ ಪ್ರದೇಶಗಳಲ್ಲಿ ಕಿಡ್ನಿ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ತಾಲೂಕು ಅಥವಾ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ರಕ್ತ ಶುದ್ಧೀಕರಣ (ಡಯಾಲಿಸಿಸ್) ಘಟಕಗಳನ್ನು ಆರಂಭಿಸುವುದು ಅತ್ಯಗತ್ಯವಾಗಿದೆ. ತಾಲೂಕು ಮಟ್ಟದಲ್ಲಿಯೂ ಡಯಾಲಿಸಿಸ್ ಕೇಂದ್ರ ಇಲ್ಲದಿರುವ ಕಾರಣ ಗ್ರಾಮೀಣ ಭಾಗದ ಜನರು ದೂರದ ನಗರ ಪ್ರದೇಶಗಳಿಗೆ ಡಯಾಲಿಸ್‌ಗಾಗಿ ಹೋಗಬೇಕಾಗಿದೆ. ಈ ಕುರಿತು ಆರೋಗ್ಯ ಇಲಾಖೆ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಸಂಸದರು ಸೂಚಿಸಿದರು.

ಅದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾ ವೈದ್ಯಾಧಿಕಾರಿ ಡಾ.ಎಸ್.ವಿ.ಮುನ್ಯಾಳ, ಜಿಲ್ಲೆಯಲ್ಲಿ ಡಯಾಲಿಸಿಸ್ ಕೇಂದ್ರಗಳನ್ನು ಆರಂಭಿಸಬಹುದು. ಆದರೆ, ಅವುಗಳ ನಿರ್ವಹಣೆಗೆ ನುರಿತ ತಾಂತ್ರಿಕ ಸಿಬ್ಬಂದಿ ಕೊರತೆ ಇದೆ. ಒಂದು ಡಯಾಲಿಸಿಸ್ ಕೇಂದ್ರ ಆರಂಭಿಸಲು 3 ರಿಂದ 4 ಲಕ್ಷ ರೂ. ವರೆಗೆ ವೆಚ್ಚವಾಗುತ್ತದೆ. ಆದರೆ, ತಾಂತ್ರಿಕ ಸಿಬ್ಬಂದಿ ಇಲ್ಲದಿರುವ ಕಾರಣ ಆರಂಭಿಸಲು ಸಾಧ್ಯವಾಗಿಲ್ಲ ಎಂದರು. ಸಂಸದ ಅಣ್ಣಾಸಾಹೇಬ ಜೊಲ್ಲೆ ಪ್ರತಿಕ್ರಿಯಿಸಿ, ಜಿಲ್ಲೆಯಲ್ಲಿ ಎಲ್ಲೆಲ್ಲಿ ಡಯಾಲಿಸಿಸ್ ಕೇಂದ್ರಗಳ ಅವಶ್ಯಕತೆ ಇದೆ ಮತ್ತು ಸಿಬ್ಬಂದಿ ಕೊರತೆ ಬಗ್ಗೆ ಪಟ್ಟಿ ಸಲ್ಲಿಸಿ. ಸಂಸದರ ಅನುದಾನದಲ್ಲಿ ಡಯಾಲಿಸಿಸ್ ಕೇಂದ್ರಗಳನ್ನು ಸ್ಥಾಪಿಸಲು ಯೋಜನೆ ರೂಪಿಸಬೇಕು. ಕೇಂದ್ರ ಸರ್ಕಾರದ ಯೋಜನೆಗಳಲ್ಲಿ ಕಡ್ಡಾಯವಾಗಿ ಪ್ರಧಾನಿ ನರೇಂದ್ರ ಮೋದಿ ಭಾವಚಿತ್ರ ಅಳವಡಿಸಬೇಕು. ಅಲ್ಲದೆ, ಪ್ರತಿಯೊಂದು ಯೋಜನೆ ಅನುಷ್ಠಾನದ ಮಾಹಿತಿಯನ್ನು ಸಂಸದರ ಗಮನಕ್ಕೆ ತರಬೇಕು. ಫಲಾನುಭವಿಗಳಿಗೆ ನಿಗದಿತ ಸಮಯದಲ್ಲಿಯೇ ಸೌಲಭ್ಯ ಕಲ್ಪಿಸಬೇಕು ಎಂದು ಸೂಚನೆ ನೀಡಿದರು. ಜಿಪಂ ಸಿಇಒ ದರ್ಶನ ಎಚ್.ವಿ., ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ, ತಾಪಂ ಇಒಗಳು ಸೇರಿ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net