ಜೆಜೆಎಂ ಕಾಮಗಾರಿಗಳ ಪರಿವೀಕ್ಷಿಸಿ ವರದಿ ಸಲ್ಲಿಸಿ

06rajesh2
Published on

ಚಾಮರಾಜನಗರ: ಜಲಜೀವನ್ ಮಿಷನ್ ಯೋಜನೆಯಡಿ ಅನುಷ್ಠಾನಗೊಂಡಿರುವ ಕಾಮಗಾರಿಗಳನ್ನು ಗ್ರಾಮ ಪಂಚಾಯಿತಿಗಳಿಗೆ ಹಸ್ತಾಂತರ ಮಾಡಲಾಗಿದ್ದು, ಈ ಸಂಬಂಧ ಕಾಮಗಾರಿಗಳನ್ನು ಪರಿವೀಕ್ಷಣೆ ಮಾಡಿ ವರದಿ ಸಲ್ಲಿಸುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಸೂಚಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಜಲಜೀವನ್ ಮಿಷನ್ ಯೋಜನೆ ಅನುಷ್ಠಾನ ಹಾಗೂ ಕುಡಿಯುವ ನೀರಿನ ಸಮಸ್ಯೆ ಕುರಿತು ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಶನಿವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯ ಕೊಳ್ಳೇಗಾಲ ಹಾಗೂ ಹನೂರು ತಾಲೂಕಿಗೆ ಸಂಬಂಧಿಸಿದಂತೆ ಜಲಜೀವನ್ ಮಿಷನ್ ಯೋಜನೆ ಅನುಷ್ಠಾನ ಸಂಬಂಧ ಪರಿಶೀಲನೆ ಸಂದರ್ಭದಲ್ಲಿ ಹಾಗೂ ಸಭೆಗಳಲ್ಲಿ ಸಾರ್ವಜನಿಕರಿಂದ ದೂರುಗಳು ದಾಖಲಾಗುತ್ತಿದೆ. ಗ್ರಾಮ ಪಂಚಾಯಿತಿಗಳಿಗೆ ಈಗಾಗಲೇ ಹಸ್ತಾಂತರ ಮಾಡಲಾಗಿರುವ ಕಾಮಗಾರಿಗಳನ್ನು ಆಯಾ ತಾಲೂಕಿನ ಸಹಾಯಕ ಕಾರ್ಯಪಾಲಕ ಇಂಜಿನಿಯರ್‌ಗಳು ಪರಿಶೀಲಿಸಿ ವರದಿ ನೀಡುವಂತೆ ನಿರ್ದೇಶನ ನೀಡಿದರು.

ಹನೂರಿನ ಮಾರ್ಟಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ ಬರುವ ಜನವಸತಿ ಪ್ರದೇಶಗಳಾದ ಕಡಬೂರು, ಕೊಂಬೆನಗರ, ಬಿದರಳ್ಳಿ, ಬಿದರಳ್ಳಿ, ಅಣ್ಣತೆರೆಸ್ ನಗರ, ವಡ್ಡರದೊಡ್ಡಿ, ಶಿಲುಬೆನಗರ ಹಾಗೂ ಕೌದಳ್ಳಿ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿರುವ ಬಗ್ಗೆ ದೂರುಗಳು ಕೇಳಿಬಂದಿವೆ. ಈ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಲು ಕ್ರಮವಹಿಸಬೇಕು ಎಂದರು.

ದೊಡ್ಡಾಲಾತ್ತೂರು ಗ್ರಾ.ಪಂ ಕೆಂಪಯ್ಯನಹಟ್ಟಿ, ಶೆಟ್ಟಳ್ಳಿ ಗ್ರಾ.ಪಂ ಭದ್ರಯ್ಯನಹಳ್ಳಿ ಜನವಸತಿ ಗ್ರಾಮಗಳಿಗೆ ಕುಡಿಯುವ ನೀರಿನ ಸಮಸ್ಯೆ ಇದೆ. ಸದರಿ ಗ್ರಾಮಗಳಲ್ಲಿ ಕುಡಿಯುವ ನೀರಿಗೆ ತೊಂದರೆ ಆಗದಂತೆ ಸಾರ್ವಜನಿಕರಿಂದ ದೂರು ಬರುವ ಮುನ್ನವೇ ಖಾಸಗೀ ಬೋರ್‌ವೆಲ್‌ಗಳಿಂದ ಹಾಗೂ ಇತರೆ ಮೂಲಗಳಿಂದ ಕುಡಿಯುವ ನೀರನ್ನು ಪೂರೈಸಲು ಕ್ರಮ ವಹಿಸಬೇಕು ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಡಿ.ಸಿ.ಶೃತಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಇಂಜಿಯರ್‌ಗಳಾದ ಎಸ್. ಜಗದೀಶ್, ಚಂದ್ರಶೇಖರ್, ಸುದನ್ವನಾಗ್, ಯಳಂದೂರು ಇಓ ಉಮೇಶ್ ಹಾಗೂ ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net