ಜೆಡಿಎಸ್‌ನಿಂದ ಅಭಿವೃದ್ಧಿಯಿಲ್ಲ, ಬಿಜೆಪಿ ಆಡಳಿತದಲ್ಲಿ ಶಿಸ್ತಿಲ್ಲ

18_01_Mdy_02(Cong Meeting)
Published on

ಮಂಡ್ಯ: ಏಳು ಕ್ಷೇತ್ರ ಗೆದ್ದರೂ ಜೆಡಿಎಸ್‌ನಿಂದ ಜಿಲ್ಲೆಯ ಅಭಿವೃದ್ಧಿಯಾಗಲಿಲ್ಲ. ಇತ್ತ ಭ್ರಷ್ಟಾಚಾರದಲ್ಲಿ ಮುಳುಗಿರುವ ಬಿಜೆಪಿಯ ಆಡಳಿತದಲ್ಲಿ ಶಿಸ್ತಿಲ್ಲ ಎಂದು ಮಾಜಿ ಸಚಿವರೂ ಆದ ಕೆಪಿಸಿಸಿ ಉಪಾಧ್ಯಕ್ಷ ಎನ್.ಚಲುವರಾಯಸ್ವಾಮಿ ವಾಗ್ದಾಳಿ ನಡೆಸಿದರು.


ನಗರದ ಕರ್ನಾಟಕ ಸಂಘದ ಕೆ.ವಿ.ಶಂಕರಗೌಡ ಶತಮಾನೋತ್ಸವ ಭವನದಲ್ಲಿ ಮಂಗಳವಾರ ಸಂಜೆ ಜಿಲ್ಲಾ ಕಾಂಗ್ರೆಸ್‌ನಿಂದ ಏರ್ಪಡಿಸಿದ್ದ ಪ್ರಜಾಧ್ವನಿ ಯಾತ್ರೆಯ ಪೂರ್ವಭಾವಿ ಸಭೆ ಉದ್ಘಾಟಿಸಿ ಮಾತನಾಡಿದರು. ಜಿಲ್ಲೆಯ ಅಭಿವೃದ್ಧಿ ನಿಂತ ನೀರಾಗಿದೆ. ನಮ್ಮ ಹಿರಿಯರ ಆಡಳಿತದ ನಂತರ ಜಿಲ್ಲೆಯ ಅಭಿವೃದ್ಧಿಯನ್ನು ಇತರ ಜಿಲ್ಲೆಗಳಿಗೆ ಹೋಲಿಸಿ ನೋಡಿದರೆ ತಲೆ ತಗ್ಗಿಸುವಂತಾಗುತ್ತದೆ ಎಂದರು.
ಪಕ್ಕದ ಜಿಲ್ಲೆಗಳಾದ ಮೈಸೂರು, ಹಾಸನ, ತುಮಕೂರಿನ ಅಭಿವೃದ್ಧಿ ನೋಡಿದರೆ ಮಂಡ್ಯ ಅಭಿವೃದ್ಧಿಯಲ್ಲಿ ಸಾಕಷ್ಟು ಹಿನ್ನಡೆ ಕಂಡಿದೆ. ಏಳಕ್ಕೆ ಏಳೂ ಕ್ಷೇತ್ರಗಳಲ್ಲಿ ಜೆಡಿಎಸ್ ಗೆದ್ದರೂ ಅಭಿವೃದ್ಧಿ ಆಗದಿರುವುದು ತಲೆತಗ್ಗಿಸಬೇಕಾದ ವಿಚಾರ. ಇನ್ನು ಬಿಜೆಪಿ ಸರ್ಕಾರದ ಅವಧಿಯಲ್ಲಿ ಭ್ರಷ್ಟಾಚಾರ ವಿಪರೀತವಾಗಿದೆ. ಜನರಿಗೆ ಆರ್ಥಿಕ ಭದ್ರತೆ ಇಲ್ಲದಂತಾಗಿದೆ. ಬೆಲೆಯೇರಿಕೆಯಿಂದ ಜನರು ತತ್ತರಿಸುತ್ತಿದ್ದಾರೆ. ಆದರೆ, ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ನೀಡಿದ್ದ 165 ಭರವಸೆಗಳನ್ನು ಪೂರೈಸಿದೆ. ಬಿಜೆಪಿ ಮತ್ತು ಜೆಡಿಎಸ್ ಆಡಳಿತದಲ್ಲಿ ರಾಜ್ಯ ಮತ್ತು ಜಿಲ್ಲೆ ತೀವ್ರ ಹಿನ್ನಡೆ ಹೊಂದಿವೆ ಎಂದು ಟೀಕಿಸಿದರು.


ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಉತ್ತಮ ವಾತಾವರಣವಿದೆ. 2013ರಲ್ಲಿ ಸಿದ್ದರಾಮಯ್ಯ ಅವರು ನೀಡಿದ ಅಭಿವೃದ್ಧಿ ಕಾರ್ಯಕ್ರಮಗಳನ್ನು ಈಗಲೂ ಜನರು ನೆನಪಿಸಿಕೊಳ್ಳುತ್ತಿದ್ದಾರೆ. ಆದ್ದರಿಂದ, ನಮ್ಮಲ್ಲಿ ಏನೇ ಭಿನಾಭಿಪ್ರಾಯಗಳಿದ್ದರೂ ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಎಲ್ಲರೂ ಒಂದಾಗಿ ಒಗ್ಗಟ್ಟು ಪ್ರದರ್ಶಿಸಬೇಕಿದೆ. ಜ.27ರಂದು ಮಂಡ್ಯದಲ್ಲಿ ನಡೆಯಲಿರುವ ಪ್ರಜಾಧ್ವನಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಲು ಎಲ್ಲ ಮುಖಂಡರು ಒಂದಾಗಿ ಶ್ರಮಿಸಬೇಕಿದೆ. ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆ ಯಶಸ್ವಿಯಾಗಿತ್ತು. ಮೇಕೆದಾಟು ಯಾತ್ರೆ ರಾಜ್ಯದ ಗಮನ ಸೆಳೆದಿತ್ತು ಎಂದರು.


ಮಾಜಿ ಸಚಿವರೂ ಆದ ಕೆಪಿಸಿಸಿ ಉಪಾಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ ಮಾತನಾಡಿ, ಜ.27ರಂದು ಮಂಡ್ಯದಲ್ಲಿ ನಡೆಯಲಿರುವ ಪ್ರಜಾಧ್ವನಿ ಸಮಾವೇಶ ಕಾಂಗ್ರೆಸ್ ಗೆಲುವಿಗೆ ಮುನ್ನುಡಿ ಬರೆಯಬೇಕು. ರಾಜ್ಯದ ಅಭಿವೃದ್ಧಿಗೆ ಕಾಂಗ್ರೆಸ್ ಅನಿವಾರ್ಯವಾಗಿದ್ದು, ಎಲ್ಲರೂ ಒಂದಾಗಿ ಪಕ್ಷವನ್ನು ಅಧಿಕಾರಕ್ಕೆ ತರೋಣ. ಪ್ರಜಾಧ್ವನಿ ಸಮಾವೇಶ ಮುಂಬರುವ ವಿಧಾನಸಭಾ ಚುನಾವಣೆಯ ದಿಕ್ಸೂಚಿಯಾಗಬೇಕು. ಎಲ್ಲ ಬ್ಲಾಕ್‌ಗಳಿಂದ ಕಾರ್ಯಕರ್ತರನ್ನು ಹುರಿದುಂಬಿಸಿ ಸ್ವಯಂ ಪ್ರೇರಿತರಾಗಿ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಜನರನ್ನು ಕರೆತರುವ ಕೆಲಸ ಮಾಡಬೇಕು. ಕಾಂಗ್ರೆಸ್ ಈ ಬಾರಿ ಅಧಿಕಾರ ಹಿಡಿಯುವ ಸಾಧ್ಯತೆಗಳು ದಟ್ಟವಾಗಿದೆ ಎಂದರು.


ಸಹಕಾರ ಸಂಘ ಹಾಗೂ ವಿಧಾನ ಪರಿಷತ್ ಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಅಂತೆಯೆ, ವಿಧಾನಸಭೆ ಚುನಾವಣೆಯಲ್ಲಿ ಏಳೂ ಕ್ಷೇತ್ರಗಳ ಗೆಲುವಿಗೆ ಮುನ್ನುಡಿ ಬರೆಯುವ ಸಮಾವೇಶವಾಗಬೇಕು ಎಂದರು.
ಮಾಜಿ ಸಚಿವ ಎಂ.ಎಸ್.ಆತ್ಮಾನಂದ, ಮಾಜಿ ಶಾಸಕರಾದ ಕೆ.ಬಿ.ಚಂದ್ರಶೇಖರ್, ರಮೇಶ ಬಂಡಿಸಿದ್ದೇಗೌಡ, ಬಿ.ಪ್ರಕಾಶ್, ಎಚ್.ಬಿ.ರಾಮು, ವಿಧಾನ ಪರಿಷತ್ ಸದಸ್ಯ ಮಧು ಜಿ.ಮಾದೇಗೌಡ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾಧರ, ಮುಖಂಡರಾದ ಗಣಿಗ ರವಿಕುಮಾರ್, ಸಿದ್ಧಾರೂಢ ಸತೀಶ್‌ಗೌಡ, ಚಿದಂಬರ್, ಡಾ.ಕೃಷ್ಣ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net