ಡಬಲ್ ಇಂಜಿನ್ ಸರ್ಕಾರದಿಂದ ಲಾಭವಿಲ್ಲ

Published on

ಬೆಳಗಾವಿ: ರಾಜ್ಯದಲ್ಲಿ ನದಿಗಳ ಪ್ರವಾಹ, ಅತಿವೃಷ್ಟಿ ಉಂಟಾಗಿರುವ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಬರಲಿಲ್ಲ. ಇದೀಗ ಚುನಾವಣೆ ಹತ್ತಿರ ಬಂದಿರುವ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಬರುತ್ತಿದ್ದಾರೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆ ಪರಿಹರಿಸಲು ಬಿಜೆಪಿ ಸರ್ಕಾರದಿಂದ ಸಾಧ್ಯವಾಗಿಲ್ಲ. ರಾಜ್ಯಕ್ಕೆ ಡಬಲ್ ಇಂಜಿನ್ ಸರ್ಕಾರದಿಂದ ಏನೂ ಲಾಭವಿಲ್ಲ. ನಮ್ಮ ಪಕ್ಷದಲ್ಲಿ ಒಗ್ಗಟ್ಟು ಇದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂಬಂಧ ಹಳಸಿದೆ ಎಂದು ಆರೋಪಿಸಿದರು. ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ನನ್ನ ಒಳ್ಳೆಯ ಗೆಳೆಯ. ಅವರು ನಮ್ಮೊಂದಿಗೆ ಬೆಳೆದು ಇದೀಗ ಜೆಡಿಎಸ್‌ನಲ್ಲಿದ್ದಾರೆ. ನಮ್ಮ ಪಕ್ಷದಲ್ಲಿದ್ದಾಗ ಅವರಿಗೆ ಒಳ್ಳೆಯ ಸ್ಥಾನಮಾನ ನೀಡಲಾಗಿತ್ತು. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅವರು ಭದ್ರಾವತಿ ಕ್ಷೇತ್ರದಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸುವುದು ಸೂಕ್ತ. ಜರ್ನಾದನ ರೆಡ್ಡಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಮಾತುಕತೆ ನಡೆದಿಲ್ಲ. ಆ ಬಗ್ಗೆ ಹೆಚ್ಚಿನ ಪ್ರತಿಕ್ರಿಯೆ ಬೇಡ ಎಂದು ಹೇಳಿದರು.

ದೇಶದಲ್ಲಿ ಕೊಲೆ ಆರೋಪಗಳನ್ನು ಎದುರಿಸುತ್ತಿರುವ ಸಂಸದರು, ಶಾಸಕರು ಸಾಕಷ್ಟು ಜನರಿದ್ದಾರೆ. ಆದರೆ, ಕೊಲೆ ಆರೋಪಗಳು ಸಾಬೀತಾಗಿಲ್ಲ. ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಕೂಡ ಕೊಲೆ ಆರೋಪದ ಮೇಲೆ ಗುಜರಾತನಿಂದ ಗಡಿಪಾರು ಆಗಿರಲಿಲ್ಲವೇ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಮಾಜಿ ಸಚಿವ ಎಂ.ಬಿ. ಪಾಟೀಲ, ಶಾಸಕಿ ಡಾ.ಅಂಜಲಿ ನಿಂಬಾಳ್ಕರ್ ಇತರರಿದ್ದರು.

ಬಿಜೆಪಿಯಿಂದ ದ್ವೇಷದ ರಾಜಕಾರಣ: ದೇಶ ಮತ್ತು ರಾಜ್ಯಗಳಲ್ಲಿ ರಾಜಕೀಯವಾಗಿ ಬೆಳೆಯುವವರನ್ನು, ಬಲಿಷ್ಠವಾಗಿರುವವರನ್ನು ಆರೋಪಿಗಳನ್ನಾಗಿ ಮಾಡುವ ಕೆಲಸ ಬಿಜೆಪಿ ಮಾಡುತ್ತಿದೆ. ಸೋನಿಯಾ ಗಾಂಧಿ, ರಾಹುಲ ಗಾಂಧಿ ಸೇರಿ ಎಲ್ಲರ ಮೇಲೂ ಸುಳ್ಳು ಕ್ರಿಮಿನಲ್ ಕೇಸ್‌ಗಳನ್ನು ದಾಖಲಿಸಿ ಕಿರುಕುಳ ನೀಡುವ ಕೆಲಸ ಮಾಡುತ್ತಿದೆ. ರಾಜಕೀಯ ಉದ್ದೇಶದಿಂದಲೇ ವಿನಯ ಕುಲಕರ್ಣಿ ಮೇಲೆ ಕೊಲೆ ಕೇಸ್ ದಾಖಲಿಸಿ ಕಿರುಕುಳ ನೀಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಆರೋಪಿಸಿದರು. ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು ಅವರ ಜನ್ಮದಿನ ಆಚರಣೆ ಮಾಡುತ್ತಿದ್ದಾರೆ. ಹಾಗಾಗಿ ವಿನಯ ಕುಲಕರ್ಣಿ ಅವರಿಗೆ ಕಾಂಗ್ರೆಸ್‌ನ ಬೆಳಗಾವಿ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ನೀಡಲಾಗಿದೆ. ಧಾರವಾಡಕ್ಕೆ ಹೋಗಬಾರದಂತೆ ನ್ಯಾಯಾಲಯ ಆದೇಶ ಹಿನ್ನೆಲೆಯಲ್ಲಿ ಕಿತ್ತೂರಿನಲ್ಲಿ ಜನ್ಮದಿನದ ಕಾರ್ಯಕ್ರಮ ಆಯೋಜಿಸಿದ್ದಾರೆ. ನಾವೆಲ್ಲ ಅವರಿಗೆ ಶುಭಾಶಯ ಕೋರಲು ಬಂದಿದ್ದೇವೆ ಎಂದು ಡಿ.ಕೆ.ಶಿವಕುಮಾರ ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net