

ಮಡಿಕೇರಿ :
ಡಾ.ಕಸ್ತೂರಿ ರಂಗನ್ ವರದಿಗೆ ವಿರೋಧ ವ್ಯಕ್ತಪಡಿಸಿ ನಿರ್ಣಯ ಕೈಗೊಂಡಿರುವ ಗಾಳಿಬೀಡು ಗ್ರಾಮಸ್ಥರು, ಪಶ್ಚಿಮಘಟ್ಟದ ಜನರಿಗೆ ನ್ಯಾಯ ದೊರೆಯದಿದ್ದಲ್ಲಿ ದೊಡ್ಡ ಮಟ್ಟದ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.
ಗಾಳಿಬೀಡು ಸ್ನೇಹಿತರ ಯುವಕ ಸಂಘದ ವತಿಯಿಂದ ಗ್ರಾಮದ ಅಡ್ಕದಬಾಣೆಯ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಸ್ವಾತಂತ್ರೃದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಗ್ರಾಮಸ್ಥರೆಲ್ಲರು ಒಗ್ಗೂಡಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ವಿವಿಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು.
ಸಂಘದ ಸದಸ್ಯ ಹಾಗೂ ವಕೀಲ ಕೊಂಬಾರನ ರೋಶನ್ ಗಣಪತಿ ಮಾತನಾಡಿ, ಕಸ್ತೂರಿ ರಂಗನ್ ವರದಿಯ ಸಾಧಕ-ಬಾಧಕಗಳನ್ನು ವಿವರಿಸಿದರು. ಈ ವರದಿ ಜಾರಿಯಿಂದ ಪಶ್ಚಿಮಘಟ್ಟ ವ್ಯಾಪ್ತಿಯ ಜನ ಸಮಸ್ಯೆ ಎದುರಿಸಬೇಕಾಗುತ್ತದೆ. ಇದರ ಬಗ್ಗೆ ಜನ ಜಾಗೃತರಾಗಬೇಕು. ದೇಶ ಸ್ವಾತಂತ್ರ್ಯ ಅಮೃತ ಮಹೋತ್ಸವದ ಕಾಲಘಟದಲ್ಲಿದ್ದರೂ ಗ್ರಾಮೀಣ ಪ್ರದೇಶದ ಜನರು ಇನ್ನೂ ಸಂಕಷ್ಟದಲ್ಲಿ ಇದ್ದಾರೆ ಎಂದರು.
ಪಶ್ಚಿಮಘಟ್ಟ ವ್ಯಾಪ್ತಿಯಲ್ಲಿ ಹೇರಲಾಗಿರುವ ಕಾನೂನುಗಳನ್ನು ಸಡಿಲಗೊಳಿಸಿ ಸೂಕ್ಷ್ಮ ಪರಿಸರ ತಾಣದ ಘೋಷಣೆಯನ್ನು ಹಿಂಪಡೆಯದಿದ್ದಲ್ಲಿ ಮುಂದಿನ ಸ್ವಾತಂತ್ರ್ಯವನ್ನು ಆಚರಿಸಬೇಕೇ ಅಥವಾ ಬೇಡವೇ ಎಂಬ ಪ್ರಶ್ನೆ ಮೂಡುತ್ತದೆ. ಗ್ರಾಮಸ್ಥರೆಲ್ಲರು ಒಕ್ಕೊರಲಿನಿಂದ ಈ ವರದಿಯನ್ನು ವಿರೋಧಿಸಬೇಕು ಎಂದು ತಿಳಿಸಿದರು.
ಕಸ್ತೂರಿ ರಂಗನ್ ವರದಿ ವಿರೋಧಿ ಸಮಿತಿಯೊಂದನ್ನು ಗ್ರಾಮ ಮಟ್ಟದಲ್ಲಿ ರಚಿಸಲಾಗುವುದು. ಆ ಮೂಲಕ ಪಶ್ಚಿಮ ಘಟ್ಟದ ಎಲ್ಲ ಗ್ರಾಮಗಳಿಗೆ ತೆರಳಿ ಜನರಿಗೆ ಮಾಹಿತಿ ನೀಡಲಾಗುವುದು ಎಂದು ರೋಶನ್ ಗಣಪತಿ ತಿಳಿಸಿದರು.
ಸಾಹಿತಿ ನಾಗೇಶ್ ಕಾಲೂರು ಮಾತನಾಡಿ, ಸ್ವಾತಂತ್ರ್ಯ, ತ್ಯಾಗ ಬಲಿದಾನದ ಪ್ರತೀಕ, ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸುವುದು ಇಂದಿನ ಯುವ ಪೀಳಿಗೆಯ ಕರ್ತವ್ಯವಾಗಬೇಕು. ಪ್ರಸ್ತುತ ಕಾಡುತ್ತಿರುವ ಸಮಸ್ಯೆಗಳ ಬಗ್ಗೆ ನಾಡಿನ ಜನ ಚಿಂತನೆ ನಡೆಸಬೇಕು ಎಂದರು.
ಗಾಳಿಬೀಡು ಗ್ರಾಪಂ ಅಭಿವೃದ್ಧಿ ಅಧಿಕಾರಿ ಶಶಿಕಿರಣ್ ಮಾತನಾಡಿ, ಗ್ರಾಮದ ಅಭಿವೃದ್ಧಿಗೆ ಎಲ್ಲರ ಸಹಕಾರ ಅಗತ್ಯ. ಸರ್ಕಾರದ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುವುದಾಗಿ ಭರವಸೆ ನೀಡಿದರು. ಸ್ನೇಹಿತರ ಯುವಕ ಸಂಘದ ಕಾರ್ಯವೈಖರಿ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು.
ಸ್ನೇಹಿತರ ಯುವಕ ಸಂಘದ ಅಧ್ಯಕ್ಷ ಕೋಳುಮುಡಿಯನ ಎ.ಮೋಹನ್‌ರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ರಾ.ಪಂ ಉಪಾಧ್ಯಕ್ಷ ಉಡುದೋಳಿರ ಎಸ್.ಗಿರೀಶ್, ಗಾಳಿಬೀಡು ಪ್ರಾಥಮಿಕ ಆರೋಗ್ಯ ಸುರಕ್ಷಾ ಅಧಿಕಾರಿ ಉಷಾ, ಸ್ನೇಹಿತರ ಯುವಕರ ಸಂಘದ ಸ್ಥಾಪಕ ಅಧ್ಯಕ್ಷ ಕೆ.ಆರ್.ಅನಂತಕುಮಾರ್, ಗಾಳಿಬೀಡು ದವಸ ಭಂಡಾರದ ಉಪಾಧ್ಯಕ್ಷೆ ಕೋಳುಮುಡಿಯನ ಧರ್ಮಾವತಿ, ಗಾಳಿಬೀಡು ಸಮುದಾಯ ಆರೋಗ್ಯ ಕೇಂದ್ರದ ಅಧಿಕಾರಿ ರಮ್ಯ, ಅರಣ್ಯ ಸಮಿತಿ ಅಧ್ಯಕ್ಷ ಕೆ.ಪಿ.ಗಣಪತಿ, ತ್ರೀವೇಣಿ ಸ್ವ-ಸಹಾಯ ಸಂಘ, ಶ್ರೀನಿಧಿ ಸ್ವ-ಸಹಾಯ ಸಂಘದ ಅಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು.
ಸಭಾ ಕಾರ್ಯಕ್ರಮಕ್ಕೂ ಮೊದಲು ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಯುಕ್ತ ವಾಹನ ಜಾಥ ನಡೆಯಿತು. ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಶಶಿಕಿರಣ್ ಧ್ವಜಾರೋಹಣ ನೆರವೇರಿಸಿದರು. ನೂರಾರು ಗ್ರಾಮಸ್ಥರು ಪಾಲ್ಗೊಂಡಿದ್ದರು.