

ನಂಜನಗೂಡು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧೆಯಿಂದಾಗಿ ರಾಜ್ಯದ ಗಮನ ಸೆಳೆದಿರುವ ವರುಣ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಮಾಜಿ ಶಾಸಕ ಡಾ.ಭಾರತೀ ಶಂಕರ್ ಗುರುವಾರ ನಾಮಪತ್ರ ಸಲ್ಲಿಸಿದರು.
ತಾಲೂಕು ಪಂಚಾಯಿತಿ ಕಚೇರಿಗೆ ಅಪಾರ ಸಂಖ್ಯೆಯ ಬೆಂಬಲಿಗರ ಜತೆಗೂಡಿ ಮೆರವಣಿಗೆಯಲ್ಲಿ ಆಗಮಿಸಿದ ಡಾ.ಭಾರತೀ ಶಂಕರ್ ಅವರಿಗೆ ಜೆಡಿಎಸ್ ಜಿಲ್ಲಾಧ್ಯಕ್ಷ ಎನ್.ನರಸಿಂಹಸ್ವಾಮಿ, ಜೆಡಿಎಸ್ ವಕ್ತಾರ ತಾಯೂರು ಪ್ರಕಾಶ್ ಸೇರಿದಂತೆ ಕುಟುಂಬದ ಸದಸ್ಯರು ಸಾಥ್ ನೀಡಿದರು.
ನಾಮಪತ್ರ ಸಲ್ಲಿಕೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಾ.ಭಾರತೀ ಶಂಕರ್, ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 3 ಹೋಬಳಿಗಳು ಈ ಹಿಂದೆ ನಾನು ಶಾಸಕನಾಗಿದ್ದ ವೇಳೆ ತಿ.ನರಸೀಪುರ ಕ್ಷೇತ್ರಕ್ಕೆ ಸೇರಿದ್ದವು. ಹೀಗಾಗಿ ನಾನು ವರುಣ ಕ್ಷೇತ್ರಕ್ಕೆ ಹಳಬನಾಗಿದ್ದೇನೆ. ಸಿದ್ದರಾಮಯ್ಯನವರು ಕ್ಷೇತ್ರಕ್ಕೆ ಬರುವ ಮುನ್ನವೇ ನಾನು ಇಲ್ಲಿನ ಜನರ ವಿಶ್ವಾಸ ಗಳಿಸಿದ್ದೇನೆ. ಇನ್ನು ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಹೊರಗಿನವರಾಗಿದ್ದು ವರುಣದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಪೈಪೋಟಿಯಿದೆ ಎಂದರು.
ರಾಜ್ಯದ ಜನರು ಎರಡೂ ರಾಷ್ಟ್ರೀಯ ಪಕ್ಷಗಳಿಂದ ಬೇಸತ್ತಿದ್ದು ಪ್ರಾದೇಶಿಕ ಪಕ್ಷ ಜೆಡಿಎಸ್ ಬೆಂಬಲಿಸುವ ಮೂಲಕ ಎಚ್.ಡಿ.ಕುಮಾರಸ್ವಾಮಿ ಅವರನ್ನು ಮತ್ತೊಮ್ಮೆ ಮುಖ್ಯಮಂತ್ರಿ ಮಾಡಲು ಮತದಾರರು ತೀರ್ಮಾನಿಸಿದ್ದಾರೆ. ಹೀಗಾಗಿ ವರುಣ ಕ್ಷೇತ್ರದಲ್ಲಿಯೂ ಜೆಡಿಎಸ್ ಪಕ್ಷಕ್ಕೆ ಉತ್ತಮ ಬೆಂಬಲ ವ್ಯಕ್ತವಾಗಿದ್ದು, ಈ ಬಾರಿ ಮತದಾರರು ಗೆಲುವಿನ ದಡ ಮುಟ್ಟಿಸಲಿದ್ದಾರೆ ಎಂದು ಹೇಳಿದರು.
ಇನ್ನು ಜೆಡಿಎಸ್ ಅಭ್ಯರ್ಥಿ ಡಾ.ಭಾರತೀ ಶಂಕರ್ ನಾಮಪತ್ರ ಸಲ್ಲಿಸಿ ಹೊರ ಬರುತ್ತಿದ್ದಂತೆ ಬೆಂಬಲಿಗರು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪರ ಜಯಘೋಷಗಳನ್ನು ಕೂಗಿ ಸಂಭ್ರಮಿಸಿದರು. ಈ ಸಂದರ್ಭ ವಕೀಲ ಫಾಲಾಕ್ಷ, ರವೀಂದ್ರಕುಮಾರ್, ಅರುಣ್‌ಕುಮಾರ್, ಸುಪ್ರಿಯ ಶಂಕರ್ ಮೊದಲಾದವರು ಉಪಸ್ಥಿತರಿದ್ದರು.