

ಬೀದರ್: ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ (ಕೆಎಸ್ಐಐಡಿಸಿ) ಅಧ್ಯಕ್ಷ ಡಾ. ಶೈಲೇಂದ್ರ ಬೆಲ್ದಾಳೆ ಅವರಿಗೆ ರಾಜ್ಯ ಸಚಿವ ಸಂಪುಟದ ಸ್ಥಾನಮಾನ ನೀಡಿ ಸರ್ಕಾರ ಆದೇಶ ಹೊರಡಿಸಿದೆ.
ಬಿಜೆಪಿ ಜಿಲ್ಲಾ ಮಾಜಿ ಅಧ್ಯಕ್ಷರಾದ ಯುವ ಮುಖಂಡ ಡಾ. ಬೆಲ್ದಾಳೆ ಅವರನ್ನು ಸರ್ಕಾರ ನಾಲ್ಕು ತಿಂಗಳ ಹಿಂದೆ ಕೆಎಸ್ಐಐಡಿಸಿಗೆ ಅಧ್ಯಕ್ಷರನ್ನಾಗಿ ನೇಮಿಸಿತ್ತು. ಈಗ ಸರ್ಕಾರ ಸಂಪುಟ ದರ್ಜೆಯ ಸ್ಥಾನಮಾನ ನೀಡಿದೆ. ಈ ಕುರಿತು ಸಿಬ್ಬಂದಿ ಹಾಗೂ ಆಡಳಿತ ಸುಧಾರಣೆ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ರಾಜೇಶ ಶಂಕ್ರೆಪ್ಪ ಸೂಳಿಕೇರಿ ಆದೇಶ ಹೊರಡಿಸಿದ್ದಾರೆ. ರಾಜ್ಯ ಸಂಪುಟ ದರ್ಜೆಯ ಸ್ಥಾನಮಾನ ನೀಡಿದ ಹಿನ್ನೆಲೆಯಲ್ಲಿ ಬೆಲ್ದಾಳೆ ಅವರಿಗೆ ಸರ್ಕಾರದಿಂದ ಹೆಚ್ಚುವರಿ ಸೌಲಭ್ಯಗಳು ಸಿಗಲಿವೆ.
ಬಿಎಸ್ಸೆಸ್ಕೆಗೆ ಚೇತರಿಕೆ ಯತ್ನ: ಬೀದರ್ ಸಹಕಾರ ಸಕ್ಕರೆ ಕಾರ್ಖಾನೆ (ಬಿಎಸ್ಸೆಸ್ಕೆ)ಗೆ ಪುನಶ್ಚೇತನ ನೀಡುವ ನಿಟ್ಟಿನಲ್ಲಿ ಎಲ್ಲ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಡಾ. ಶೈಲೇಂದ್ರ ಬೆಲ್ದಾಳೆ ಹೇಳಿದ್ದಾರೆ.
ಇತ್ತೀಚೆಗೆ ಜರುಗಿದ ಕಾರ್ಖಾನೆ ಆಡಳಿತ ಮಂಡಳಿ ಚುನಾವಣೆಯಲ್ಲಿ ಮಾಜಿ ಶಾಸಕ ಸುಭಾಷ ಕಲ್ಲೂರ್ ಹಾಗೂ ನನ್ನ ನೇತೃತ್ವದ ಪೆನಾಲ್ ಗೆ ಭರ್ಜರಿ ಜಯ ಸಿಕ್ಕಿದೆ. ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಕಾರ್ಖಾನೆ ಪುನರಾರಂಭಕ್ಕೆ ಕ್ರಮ ಕೈಗೊಳ್ಳಲಾಗುವುದು. ಸಂಜಯ ಖೇಣಿ ಪೆನಾಲ್ ಗೆ ಮತದಾರರು ತಿರಸ್ಕರಿಸುವ ಮೂಲಕ ಸೂಕ್ತ ನಿರ್ಣಯ ಕೈಗೊಂಡಿದ್ದಾರೆ ಎಂದಿದ್ದಾರೆ.