ಡಿ.4ರಿಂದ ಹೈ ಪ್ಲೈಯರ್ಸ್ ಕಪ್ ಹಾಕಿ ಪಂದ್ಯಾವಳಿ

Published on

ವಿರಾಜಪೇಟೆ: ಬಿಟ್ಟಂಗಾಲ ಸಮೀಪದ ವಿ.ಬಾಡಗದ ಹೈ ಪ್ಲೈಯರ್ಸ್ ತಂಡದ ವತಿಯಿಂದ ಬಿಟ್ಟಂಗಾಲ, ಬಿ.ಶೆಟ್ಟಿಗೇರಿ ಮತ್ತು ಹಾತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಐನ್ ಮನೆ ಹೊಂದಿರುವ ಕೊಡವ ಕುಟುಂಬಗಳ ತಂಡಗಳಿಗಾಗಿ 3ನೇ ವರ್ಷದ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿ ಹೈಪ್ಲೈಯರ್ಸ್ ಕಪ್-2024 ಅನ್ನು ಡಿಸೆಂಬರ್ 4 ರಿಂದ 8ರವರೆಗೆ ಆಯೋಜಿಸಲಾಗಿದೆ ಎಂದು ಹೈಪ್ಲೈಯರ್ಸ್ ತಂಡದ ಅಧ್ಯಕ್ಷ ಅಮ್ಮಣಿಚಂಡ ರಂಜು ಪೂಣಚ್ಚ ತಿಳಿಸಿದ್ದಾರೆ.

ಕೌಟುಂಬಿಕ ಹಾಕಿ ಪಂದ್ಯಾವಳಿಯು ವಿ.ಬಾಡಗ ಗ್ರಾಮದಲ್ಲಿ 3ನೇ ಬಾರಿಗೆ ಜರುಗುತ್ತಿದೆ. ವಿ.ಬಾಡಗದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಒಟ್ಟು 5 ದಿನಗಳು ನಡೆಯುವ ಪಂದ್ಯಾವಳಿಗಾಗಿ ಈಗಾಗಲೇ ಸಿದ್ಧತೆ ಆರಂಭಗೊಂಡಿದೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಕುಟುಂಬ ತಂಡಗಳಲ್ಲಿ ಗರಿಷ್ಠ 4 ಅತಿಥಿ ಆಟಗಾರರು ಭಾಗವಹಿಸಬಹುದು. ಆದರೆ ಅತಿಥಿ ಆಟಗಾರರು ಕಡ್ಡಾಯವಾಗಿ ಕೊಡವ ಆಟಗಾರರಾಗಿರಬೇಕು. ವಿಜೇತ ತಂಡಗಳಿಗೆ ಆಕರ್ಷಕ ನಗದು ಬಹುಮಾನ ಮತ್ತು ಕೊಡವ ಸಾಂಪ್ರದಾಯಿಕ ಪಾರಿತೋಷಕಗಳನ್ನು ನೀಡಿ ಗೌರವಿಸಲಾಗುವುದು. ಕ್ರೀಡಾ ಪ್ರೇಮಿಗಳ ಆರ್ಥಿಕ ನೆರವಿನಿಂದ ಎರಡು ವರ್ಷದಿಂದ ಪಂದ್ಯಾವಳಿ ಯಶಸ್ವಿಯಾಗಿ ನಡೆದಿದೆ. ಈ ಬಾರಿಯೂ ಸಂಪೂರ್ಣವಾಗಿ ದಾನಿಗಳ ನೆರವಿನಿಂದಲೇ ಪಂದ್ಯಾವಳಿ ಜರುಗಲಿದ್ದು ಗ್ರಾಮಸ್ಥರು ಮತ್ತು ಪ್ರಾಯೋಜಕರು ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ ಎಂದು ಹೇಳಿದರು.

ಗ್ರಾಮೀಣ ಪ್ರದೇಶಗಳಲ್ಲಿ ಹಾಕಿ ಪಂದ್ಯಾವಳಿಗೆ ಒತ್ತು ನೀಡುವ ಹಿನ್ನೆಲೆಯಲ್ಲಿ ಪಂದ್ಯಾವಳಿ ಆಯೋಜಿಸಲಾಗುತ್ತಿದೆ. ಈ ಕಾರಣಕ್ಕಾಗಿ ಹೈ ಫ್ಲ್ಲೈಯರ್ಸ್ ಎಂಬ ಕ್ರೀಡಾ ಸಂಸ್ಥೆಯನ್ನು ಕಳೆದ ಎರಡು ವರ್ಷಗಳ ಹಿಂದೆ ಹುಟ್ಟು ಹಾಕಲಾಗಿದೆ. ಹಾಕಿ ಕೂರ್ಗ್ ಸಂಸ್ಥೆಯ ಅಧೀನದಲ್ಲಿ ನಡೆಯಲಿರುವ ಈ ಹಾಕಿ ಪಂದ್ಯಾವಳಿಯು ಹಾಕಿ ಕರ್ನಾಟಕ ಸಂಸ್ಥೆಯ ನಿಯಮಾವಳಿಗೆ ಬದ್ಧವಾಗಿ ನಾಕ್ ಔಟ್ ಮಾದರಿಯಲ್ಲಿ ನಡೆಯಲಿದೆ. ಆಸಕ್ತ ಕುಟುಂಬ ತಂಡಗಳು ಪಂದ್ಯಾವಳಿಗೆ ಹೆಸರು ನೋಂದಾಯಿಸಲು ನವೆಂಬರ್ 20 ಕೊನೆಯ ದಿನ. ಹೆಚ್ಚಿನ ಮಾಹಿತಿಗೆ: ಮೊ: 9481883738/ 9448306340 ಸಂಪರ್ಕಿಸಬಹುದು ಎಂದು ರಂಜು ಪೂಣಚ್ಚ ತಿಳಿಸಿದರು.

ಸಂಸ್ಥೆಯ ಕ್ರೀಡಾ ಕಾರ್ಯದರ್ಶಿ ಕುಪ್ಪಂಡ ದಿಲನ್ ಬೋಪಣ್ಣ ಮಾತನಾಡಿ, ಗ್ರಾಮಾಂತರ ಪ್ರದೇಶದಲ್ಲಿ ಹಾಕಿ ಪಂದ್ಯಾವಳಿಯನ್ನು ನಿರಂತರವಾಗಿ ಆಯೋಜಿಸುವುದರಿಂದ ಹಾಕಿ ಕ್ರೀಡೆಗೆ ಮತ್ತಷ್ಟು ಉತ್ತೇಜನ ದೊರೆತಂತಾಗುತ್ತದೆ. ಗ್ರಾಮೀಣ ಮಟ್ಟದ ಕ್ರೀಡಾಕೂಟಗಳಿಂದ ಸಾಕಷ್ಟು ಹೊಸ ಪ್ರತಿಭೆಗಳಿಗೆ ಅವಕಾಶ ಸಿಗಲಿದೆ. ಕಳೆದ ಬಾರಿ ಆಯೋಜಿಸಿದ್ದ ಕೌಟುಂಬಿಕ ಹಾಕಿ ಪಂದ್ಯಾವಳಿಯಲ್ಲಿ ಒಟ್ಟು 19 ಕುಟುಂಬ ತಂಡಗಳು ಭಾಗವಹಿಸಿದ್ದವು. ಈ ಬಾರಿ 25 ತಂಡಗಳನ್ನು ನಿರೀಕ್ಷಿಸಲಾಗಿದೆ ಎಂದು ಹೇಳಿದರು.

ಸಂಸ್ಥೆಯ ಸಲಹಾ ಸಮಿತಿ ನಿರ್ದೇಶಕ ಕೊಂಗಂಡ ಕಾಶಿ ಕಾರ್ಯಪ್ಪ, ಉಪಾಧ್ಯಕ್ಷ ಕಂಜಿತಂಡ ವಿಕ್ರಾಂತ್, ಸ್ವಾಗತ ಸಮಿತಿ ಸಂಚಾಲಕ ೀಮಿರ ಪ್ರಭು ಪೂವಯ್ಯ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net