

ಕಲಬುರಗಿ: ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ಅಕ್ಟೋಬರ್ ೧೬ ರಂದು ರಾಜ್ಯದ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಲಾಗುವುದು ಎಂದು ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಹನುಮಂತಪ್ಪ ಬಳ್ಳಾರಿ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸುಪ್ರೀಂ ಕೋರ್ಟ್ ಪರಿಶಿಷ್ಟ ಜಾತಿಗೆ ಒಳ ಮೀಸಲು ಅನುಷ್ಠಾನಗೊಳಿಸುವಂತೆ ಸೂಚನೆ ನೀಡಿದೆ. ಹಲವಾರು ರಾಜ್ಯ ಸರ್ಕಾರಗಳು ಅನುಷ್ಠಾನಗೊಳಿಸುತ್ತಿವೆ. ಆದರೆ, ರಾಜ್ಯ ಸರ್ಕಾರ ಹಿಂದೇಟು ಹಾಕುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ದಲಿತ ಪರ ಸರ್ಕಾರ ಎಂದು ಹೇಳುತ್ತಿರುವ ಸಿಎಂ ಸಿದ್ದರಾಮಯ್ಯ ಅವರು ಸುಪ್ರೀಂಕೋರ್ಟ್ ಆದೇಶ ಹೊರಡಿಸಿ ಎರಡು ತಿಂಗಳಾದರೂ ಒಳ ಮೀಸಲು ಅನುಷ್ಠಾನಗೊಳಿಸುತ್ತಿಲ್ಲ. ಒಳ ಮೀಸಲು ಸಾಧಕ-ಬಾಧಕ ಕುರಿತು ಉಪ ಸಮಿತಿ ರಚನೆ ಮಾಡಲಾಗುವುದು ಎಂದಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ಖಂಡಿಸಿದರು.
ಸರ್ವೋಚ್ಚ ನ್ಯಾಯಾಲಯದ ಆದೇಶ ಉಲ್ಲಂಘನೆ ಮಾಡಿರುವ ರಾಜ್ಯ ಸರ್ಕಾರಕ್ಕೆ ಅಕ್ಟೋಬರ್ ೧೬ರವರೆಗೆ ಗಡವು ನೀಡಲಾಗಿದೆ. ಆ ದಿನದಂದು ಎಲ್ಲ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿ ಹಾಕಿ ಸರ್ಕಾರದ ಗಮನ ಸೆಳೆಯಲಾಗುವುದು ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ದೇವಿಂದ್ರ ನಾದ, ಈಶ್ವರಪ್ಪ, ವಿಜಯಕುಮಾರ್ ಅಡಕಿ ಇತರರಿದ್ದರು.