ಚಾಮರಾಜನಗರ: ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಂವಿಧಾನ ಬದಲಾವಣೆ ಹೇಳಿಕೆ ನೀಡಿದ್ದು, ಕೂಡಲೇ ಅವರು ರಾಜೀನಾಮೆ ನೀಡಿಬೇಕೆಂದು ಆಗ್ರಹಿಸಿ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ಶನಿವಾರ ಪ್ರತಿಭಟನೆ ನಡೆಸಲಾಯಿತು.
ನಗರದ ಶ್ರೀಚಾಮರಾಜೇಶ್ವರಸ್ವಾಮಿ ದೇವಸ್ಥಾನದ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು ಅಲ್ಲಿಂದ ಮೆರವಣಿಗೆ ಮೂಲಕ ಸಾಗಿ ಶ್ರೀಭುವನೇಶ್ವರಿ ವೃತ್ತದಲ್ಲಿ ಕೆಲಕಾಲ ಪ್ರತಿಭಟನೆ ನಡೆಸಿದರು. ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್ ಮಾತನಾಡಿ, ಬಿಜೆಪಿ ಮುಸ್ಲಿಂರ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದಾರೆ ಎಂಬ ತಪ್ಪು ಗ್ರಹಿಕೆಯನ್ನು ಹುಟ್ಟುಹಾಕಲಾಗಿದೆ. ಆದರೆ ಧರ್ಮದ ಆಧಾರದಲ್ಲಿ ಮೀಸಲಾತಿ ನೀಡುವ ಮೂಲಕ ಸಂವಿಧಾನದ ವಿರುದ್ಧವಾಗಿ ನಡೆದುಕೊಂಡಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ನಾವು ಪ್ರತಿಭಟನೆ ನಡೆಸುತ್ತಿದ್ದೇವೆ ಎಂಬುದನ್ನು ಮನಗಾಣಬೇಕು. ಡಾ.ಬಿ.ಆರ್.ಅಂಬೇಡ್ಕರ್ ಅವರೇ ಸಂವಿಧಾನದಲ್ಲಿ ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡಲು ಸಾಧ್ಯವಿಲ್ಲ ಎಂಬುದನ್ನು ಹೇಳಿದ್ದಾರೆ. ಕಾಂಗ್ರೆಸ್ ಸರ್ಕಾರ ಮುಸ್ಲಿಂರಿಗೆ ಗುತ್ತಿಗೆಯಲ್ಲಿ ಮೀಸಲಾತಿ ನೀಡುವ ಮೂಲಕ ಸಂವಿಧಾನವನ್ನು ತಿರುಚುವ ಕೆಲಸವನ್ನು ಮಾಡುತ್ತಿದೆ ಎಂದು ಆರೋಪಿಸಿದರು.
ಸಂವಿಧಾನದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿರುವ ಜಾತಿಗಳಿಗೆ ಮಾತ್ರ ಮೀಸಲಾತಿ ನೀಡಿದ್ದು, ಹಿಂದುಳಿದ ವರ್ಗಗಳಿಗೆ ನೀಡಿರುವ ಮೀಸಲಾತಿಯಲ್ಲಿ ಮುಸ್ಲಿಂ ಜಾತಿಗಳು ಸೇರಿದೆ. ಆದರೆ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಧರ್ಮದ ಆಧಾರದಲ್ಲಿ ಮುಸ್ಲಿಂರಿಗೆ ಮೀಸಲಾತಿ ನೀಡಲು ಮುಂದಾಗಿದ್ದಾರೆ. ಇದರ ವಿರುದ್ಧ ವಿರೋಧ ಪಕ್ಷಗಳು ಸದನದಲ್ಲಿ ಪ್ರತಿಭಟನೆ ಮಾಡಿದರೇ ಬಿಜೆಪಿ ಶಾಸಕರನ್ನು ಅಮಾನತ್ತು ಮಾಡಲಾಗಿದೆ. ಮತ್ತೊಂದು ಕಡೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮುಸ್ಲಿಂರಿಗೆ ಶೇ.4 ರಷ್ಟು ಮೀಸಲಾತಿ ನೀಡಲು ಸಂವಿಧಾನ ಬದಲಾವಣೆಗೂ ಅವಕಾಶವಿದೆ ಎಂದು ಹೇಳಿಕೆ ನೀಡುವ ಮೂಲಕ ಸಂವಿಧಾನ ವಿರೋಧಿ ಹೇಳಿಕೆಯನ್ನು ನೀಡಿದ್ದಾರೆ. ಕೂಡಲೇ ಅವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರು, ಕಾಡಾ ಮಾಜಿ ಅಧ್ಯಕ್ಷ ನಿಜಗುಣರಾಜು, ಬಿಜೆಪಿ ಜಿಲ್ಲಾ ಪ್ರಧಾನದರ್ಶಿ ಪಿ.ವೃಷಬೇಂದ್ರಪ್ಪ, ಹೂನ್ನೂರು ಮಹಾದೇವಸ್ವಾಮಿ, ನಗರಸಭೆಅಧ್ಯಕ್ಷ ಸುರೇಶ್, ಆರ್.ಸುಂದರ್, ಯುಮೋರ್ಚಾ ರಾಜ್ಯ ಸಂಚಾಲಕ ಪ್ರಣಯ್, ಮಂಡಲ ಅಧ್ಯಕ್ಷರಾದ ಶಿವರಾಜು, ಮಲ್ಲೇಶ್ ನಾಯಕ್, ಅರಕಲವಾಡಿ ಮಹೇಶ್, ವೃಷಬೇಂದ್ರಸ್ವಾಮಿ, ಅರಕಲವಾಡಿ ನಾಗೇಂದ್ರ, ಟಗರಪುರ ರೇವಣ್ಣ, ಎಸ್.ಸಿ.ಮೋರ್ಚಾ ಜಿಲ್ಲಾಧ್ಯಕ್ಷ ಮೂಡಳ್ಳಿ ಮೂರ್ತಿ, ಎಸ್ಟಿ ಮೋರ್ಚಾ ಜಿಲ್ಲಾಧ್ಯಕ್ಷ ಚಂದ್ರಶೇಖರ್, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸೂರ್ಯಕುಮಾರ್, ಪ್ರಧಾನ ಕಾರ್ಯದರ್ಶಿ ಆನಂದ್ ಭಗೀರಥ, ನವೀನ್ ಮೌರ್ಯ, ಹೊಗನೂರು ಮಹದೇವಸ್ವಾಮಿ, ರಾಜಶೇಖರ್, ಮಾಧ್ಯಮ ಪ್ರಮುಖ್ ಮಂಜುನಾಥ್, ಪ್ರಗತಿಪರ ಸಂಘಟನೆಯ ಒಕ್ಕೂಟದ ಜಿಲ್ಲಾಧ್ಯಕ್ಷ ಸಿ.ಎಂ.ಕೃಷ್ಣಮೂರ್ತಿ, ಕೂಡ್ಲೂರು ಶ್ರೀಧರಮೂರ್ತಿ ಹಾಗೂ ಇತರರು ಭಾಗವಹಿಸಿದ್ದರು.