ಡಿಸಿಎಂ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ

09-SEP-GPT-1
Published on

ಗುಂಡ್ಲುಪೇಟೆ: ರೈತರ ಬಗ್ಗೆ ಅವಹೇಳನಕರಿಯಗಿ ಮಾತನಾಡಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಸಾಮೂಹಿಕ ನಾಯಕತ್ವದ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು, ಪದಾಧಿಕಾರಿಗಳು ಮಂಗಳವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ರಾಜೀನಾಮೆಗೆ ಒತ್ತಾಯಿಸಿದರು.

ಸಂಘಟನೆಯ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ನೇತೃತ್ವದಲ್ಲಿ ಪ್ರವಾಸಿ ಮಂದಿರದಿಂದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗಿದ ನೂರಾರು ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾರಿಗೆ ಬಸ್ ನಿಲ್ದಾಣದ ಎದುರು ಮಾನವ ಸರಪಳಿ ರಚಿಸಿ ಸ್ವಲ್ಪಹೊತ್ತು ವಾಹನಗಳ ಸಂಚಾರಕ್ಕೆ ಅಡ್ಡಿಪಡಿಸಿದರು. ಹೊನ್ನೂರು ಪ್ರಕಾಶ್ ಮಾತನಾಡಿ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಭೂಮಿಯನ್ನು ಉಳಿಸಿಕೊಳ್ಳಲು ಹೋರಾಟ ನಡೆಸುತ್ತಿರುವ ರೈತರನ್ನು ಕೆಟ್ಟದಾಗಿ ನಡೆಸಿಕೊಂಡಿದ್ದಾರೆ. ಅಧಿಕಾರ ಯಾರಿಗೂ ಶಾಶ್ವತವಲ್ಲ ಎಂಬುದನ್ನು ಮರೆತು ತಮ್ಮ ಗೂಂಡಾಗಿರಿ ಪ್ರದರ್ಶನ ಮಾಡಿದ್ದಾರೆ. ಇವರ ವಿರುದ್ಧ ರೈತರು ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದಾರೆ. ಕೂಡಲೇ ಅವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net