ಜಿಡ್ಡುಗಟ್ಟಿದ ಚಡಚಣ ತಾಲೂಕಾಡಳಿತ

Devanda Chavana
Published on

ಚಡಚಣ: ನಾಗಠಾಣ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಚಡಚಣ ತಾಲೂಕಾಡಳಿತ ವಿರುದ್ಧ ಶಾಸಕ ದೇವಾನಂದ ಚವ್ಹಾಣ್ ತೀವ್ರ ಗರಂ ಆಗಿದ್ದಾರೆ. ಚಡಚಣ ತಾಲೂಕಾಡಳಿತ ಸಂಪೂರ್ಣ ಜಿಡ್ಡುಗಟ್ಟಿದ್ದು, ಕೂಡಲೇ ಅಧಿಕಾರಿಗಳು ತಮ್ಮ ಕಾರ್ಯವೈಖರಿ ಬದಲಿಸಿಕೊಳ್ಳದಿದ್ದರೆ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಚಡಚಣ ತಾಲೂಕುಮಟ್ಟದ ವಿವಿಧ ತ್ರೈಮಾಸಿಕ ಪ್ರಗತಿ ಪರಿಶೀಲನೆ ಸಭೆಗೂ ಮುನ್ನ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಕಂದಾಯ, ಪೊಲೀಸ್ ಹಾಗೂ ಕೃಷಿ ಇಲಾಖೆ ಅಧಿಕಾರಿಗಳು ಸಾರ್ವಜನಿಕರಿಗೆ ಕಿರುಕುಳ ನೀಡುತ್ತಿರುವುದು ಗಮನಕ್ಕೆ ಬಂದಿದೆ. ಏಜೆಂಟರ ಹಾವಳಿ ಹೆಚ್ಚಾಗಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಜನಸಾಮಾನ್ಯರಿಗೆ ನ್ಯಾಯ ದೊರಕುತ್ತಿಲ್ಲ. ಮತಕ್ಷೇತ್ರದ ಶಾಸಕನಾಗಿ ಸಂಬಂಧಿಸಿದ ಅಧಿಕಾರಿಗಳಿಗೆ ಈಗಾಗಲೇ ಎಚ್ಚರಿಕೆ ನೀಡಿದ್ದೇನೆ. ಅಧಿಕಾರಿಗಳು ತಮ್ಮ ವರ್ತನೆ ಬದಲಾಯಿಸಿಕೊಳ್ಳದಿದ್ದರೆ ಬೀದಿಗಿಳಿದು ಹೋರಾಟ ಮಾಡುವುದಾಗಿ ತಿಳಿಸಿದರು.

ತೋಟಗಾರಿಕೆ ಇಲಾಖೆಯಲ್ಲಿ ಸಾಕಷ್ಟು ಅವ್ಯವಹಾರ ನಡೆಯುತ್ತಿದ್ದು, ಅರ್ಹರಿಗೆ ಸರ್ಕಾರಿ ಸೌಲಭ್ಯಗಳು ದೊರಕುತ್ತಿಲ್ಲ. ಇದರಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳೂ ಶಾಮೀಲಾಗಿದ್ದಾರೆ ಎಂದು ಆರೋಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net