ತಂಬಾಕು ಉತ್ಪನ್ನಗಳ ಬಳಕೆ ಮಾಡಿದರೆ ದಂಡ ವಿಧಿಸಿ: ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಎಚ್ಚರಿಕೆ

4
Published on

ಮೈಸೂರು: ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳ ಬಳಕೆ ಮಾಡುತ್ತಿದ್ದರೆ ದಂಡ ವಿಧಿಸಿ ಕಾನೂನು ರೀತಿ ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಆರೋಗ್ಯಕ್ಕೆ ಹಾನಿಕರವಾಗಿರುವ ತಂಬಾಕು ಉತ್ಪನ್ನಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಬಳಕೆ ಮಾಡಬಾರದೆಂದು ಸರ್ಕಾರ ಕಾನೂನು ರೂಪಿಸಿದೆ. ಆದರೆ ಅಂಗಡಿಗಳು ಹಾಗೂ ಕಾಫಿ, ಟೀ ಶಾಪ್‌ಗಳಲ್ಲಿ ಸಿಗರೇಟ್‌ಗಳನ್ನು ಬಳಸುತ್ತಿದ್ದಾರೆ. ಇದರಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತದೆ ಎಂದು ಹೇಳಿದರು.
ಆದ್ದರಿಂದ ಈ ಬಗ್ಗೆ ಅಂಗಡಿ ಮಾಲೀಕರಿಗೆ ಅರಿವು ಮೂಡಿಸಬೇಕು. ಕಾನೂನು ಪಾಲನೆ ಮಾಡುವಂತೆ ತಿಳಿಸಬೇಕು. ಇಲ್ಲವಾದರೆ ದಂಡ ವಿಧಿಸಿ ಕಾನೂನು ರೀತಿ ಸೂಕ್ತ ಕ್ರಮ ಕೈಗೊಳ್ಳಬೇಕು. ಈ ಸಂಬಂಧ ಪ್ರತಿ ಠಾಣೆ ವ್ಯಾಪ್ತಿಯಲ್ಲಿ ಕನಿಷ್ಠ 10 ಕೇಸ್‌ಗಳನ್ನು ದಾಖಲಿಸಬೇಕು. ಇದರಿಂದ ಇತರರಲ್ಲಿಯೂ ಜಾಗೃತಿ ಮೂಡುತ್ತದೆ ಎಂದು ಹೇಳಿದರು.
ಸಿಗರೇಟ್ ಹಾಗೂ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವವರು ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಮಹಾನಗರ ಪಾಲಿಕೆಯಿಂದ ಅನುಮತಿ ಪಡೆದುಕೊಳ್ಳಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಸ್ಮೋಕಿಂಗ್ ಬಡ್ಟ್ಸ್‌ಗಳನ್ನು ಬಿಸಾಡದೆ ಡಸ್ಟ್ ಬಿನ್‌ಗಳಲ್ಲಿಯೇ ಹಾಕಬೇಕು. ಒಂದೊಮ್ಮೆ ಸಾರ್ವಜನಿಕ ಸ್ಥಳಗಳಲ್ಲಿ ಹಾಕಿದರೆ ದಂಡ ವಿಧಿಸಬೇಕು ಎಂದರು.
ಶಾಲಾ-ಕಾಲೇಜು, ಧಾರ್ಮಿಕ ಕೇಂದ್ರಗಳ 100 ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಹಾಗೂ ಸೇವನೆ ಮಾಡುವಂತಿಲ್ಲ. ತಂಬಾಕು ಉತ್ಪನ್ನಗಳ ಬಳಕೆಯಿಂದ ಆಗುವ ದುಷ್ಪರಿಣಾಮಗಳ ಕುರಿತು ಪ್ರೌಢಶಾಲೆಗಳು, ಕಾಲೇಜುಗಳಲ್ಲಿ ಶಿಕ್ಷಣ ಇಲಾಖೆಯಿಂದ ಅರಿವು ಮೂಡಿಸಬೇಕು ಎಂದು ಹೇಳಿದರು.
ತಂಬಾಕು ಮುಕ್ತ ವಲಯ ಸೂಚನಾ ಫಲಕಗಳನ್ನು ಅಳವಡಿಸಿ ಹಾಗೂ ಗೋಡೆ ಬರಹಗಳನ್ನು ಬರೆಯಬೇಕು. ಶಾಲಾ-ಕಾಲೇಜುಗಳನ್ನು ತಂಬಾಕುಮುಕ್ತ ವಲಯಗಳಾಗಿ ಮಾಡಬೇಕು. ಶಾಲಾ ಹಂತದಲ್ಲಿಯೇ ಮಕ್ಕಳು ತಂಬಾಕು ಸೇವನೆ ಮಾಡದಂತೆ ತಡೆದರೆ ಮುಂದೆ ಅವರು ತಂಬಾಕು ಉತ್ಪನ್ನಗಳ ಸೇವನೆಗೆ ಒಳಗಾಗುವುದನ್ನು ತಡೆಯಬಹುದು ಎಂದರು.
ನಗರ ಪಾಲಿಕೆಯ ಆಯುಕ್ತ ಅಶಾದ್ ಉರ್ ರೆಹಮಾನ್ ಶರೀಫ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕುಮಾರಸ್ವಾಮಿ, ನಗರಪಾಲಿಕೆ ಆರೋಗ್ಯಾಧಿಕಾರಿ ಡಾ.ನಾಗರಾಜ್, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳಾದ ಡಾ.ಮಹದೇವಸ್ವಾಮಿ ಇತರ ಅಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net