ತಂಬಾಕು ಕುರಿತು ಜಾಗೃತಿ ಮೂಡಿಸಿ

01 YERRISWAMY 01
Published on

ಬಳ್ಳಾರಿ : ತಂಬಾಕು ಸೇವನೆಯಿಂದ ಯುವ ಸಮುದಾಯ ಮತ್ತು ಸಾರ್ವಜನಿಕರ ಆರೋಗ್ಯಕ್ಕೆ ಮೇಲೆ ದುಷ್ಪರಿಣಾಮ ಬೀರುತ್ತಿದ್ದು, ಈ ಕುರಿತು ಅರಿವು ಮೂಡಿಸಬೇಕು ಎಂದು ಎಡಿಸಿ ಮಹಮ್ಮದ್ ಎನ್ ಝುಬೇರ್ ಹೇಳಿದರು.
ನಗರದ ನೂತನ ಡಿಸಿ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಮಟ್ಟದ ಸಮನ್ವಯ ಸಭೆಯಲ್ಲಿ ಮಾತನಾಡಿದರು. ತಂಬಾಕು ಸೇವನೆ ಹಾಗೂ ಧೂಮಪಾನ ಆರೋಗ್ಯಕ್ಕೆ ಹಾನಿಕಾರಕವಾಗಿದ್ದು, ಇದರ ಕುರಿತು ಸಾರ್ವಜನಿಕ ಸ್ಥಳಗಳಲ್ಲಿ ಪೋಸ್ಟರ್ ಅಂಟಿಸುವ ಮೂಲಕ ವ್ಯಾಪಕ ಪ್ರಚಾರ ಕೈಗೊಂಡು ಜಾಗೃತಿ ಮೂಡಿಸುವ ಅವಶ್ಯಕತೆಯಿದೆ.
ಶಾಲಾ ಕಾಲೇಜು, ಅಂಗಡಿಗಳು, ರೆಸ್ಟೋರೆಂಟ್, ಚಿತ್ರ ಮಂದಿರ, ಸಾರ್ವಜನಿಕ ಸ್ಥಳ ಸೇರಿದಂತೆ ವಿವಿಧೆಡೆ ಅನೀರಿಕ್ಷಿತ ಭೇಟಿ ನಡೆಸಬೇಕು. ಧೂಮಪಾನ ವಲಯಗಳಲ್ಲಿ ಪೋಸ್ಟರ್ ಅಳವಡಿಸದೇ ಇರುವ ಹಾಗೂ ತಂಬಾಕು ನಿಯಂತ್ರಣ ಕೋಶದ ನಿಯಾಮವಳಿಗಳನ್ನು ಪಾಲಿಸದೇ ಇದ್ದಲ್ಲಿ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು ಎಂದರು. ಜಿಲ್ಲಾದ್ಯಂತ ಏಕ ಕಾಲದಲ್ಲಿ ಶಾಲಾ-ಕಾಲೇಜು, ವಿಶ್ವವಿದ್ಯಾಲಯ ಸೇರಿದಂತೆ ಶೈಕ್ಷಣಿಕ ಸಂಸ್ಥೆಗಳಲ್ಲಿ ತಂಬಾಕು ಸೇವನೆ ಮತ್ತು ಧೂಮಪಾನದ ದುಷ್ಪರಿಣಾಮ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲು ವಿನೂತನ ಪ್ರಯೋಗ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು. ಬಳಿಕ ತಂಬಾಕು ನಿಯಂತ್ರಣ ಕುರಿತ ಪೋಸ್ಟರ್‌ಗಳನ್ನು ಪ್ರದರ್ಶಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net