ತಟಸ್ಥ ಸಂಸ್ಥೆಗಳಿಗೆ ಗೇಟ್‌ಪಾಸ್

CTD SHURADA....
Published on

ಚಿತ್ರದುರ್ಗ: ಸಹಕಾರಿ ಕಾಯ್ದೆಯಡಿ ನೋಂದಾಯಿತ 101 ಸೌಹಾರ್ದ ಸಹಕಾರ ಸಂಘಗಳ ಪೈಕಿ ತಟಸ್ಥವಾಗಿರುವ ಸಂಘಗಳನ್ನು ಕ್ರಿಯಾಶೀಲಗೊಳಿಸಲು ಅಗತ್ಯ ಸಲಹೆ, ಮಾರ್ಗದರ್ಶನ ನೀಡಲು ಸಿದ್ಧ ಎಂದು ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ ಅಧ್ಯಕ್ಷ ಜಿ.ನಂಜನಗೌಡ ಹೇಳಿದರು.
ನಗರದ ಖಾಸಗಿ ಹೋಟೆಲ್‌ನಲ್ಲಿ ಜಿಲ್ಲೆ ಸೌಹಾರ್ದ ಸಹಕಾರಿ ಸಂಸ್ಥೆಗಳ ಅಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು ಹಾಗೂ ಮುಖ್ಯಕಾರ್ಯ ನಿರ್ವಾಹಣಾಧಿಕಾರಿಗಳಿಗೆ ಗುರುವಾರ ಏರ್ಪಡಿಸಿದ್ದ ವಿಶೇಷ ತರಬೇತಿ ಉದ್ಘಾಟಿಸಿ ಮಾತನಾಡಿದರು.
ಕ್ರಿಯಾಶೀಲವಲ್ಲದ ಸಂಸ್ಥೆಗಳನ್ನು ನೋಂದಣಿ ಪುಸ್ತಕದಲ್ಲಿ ಉಳಿಸಿಕೊಳ್ಳುವ ಅಗತ್ಯವಿಲ್ಲವೆಂದು ತೀರ್ಮಾನಿಸಿದ್ದೇವೆ. ಆದ್ದರಿಂದ ಎಲ್ಲ ಸಂಸ್ಥೆಗಳು ಕ್ರಿಯಾಶೀಲವಾಗಿರಬೇಕು ಎಂದು ಸೂಚಿಸಿದರು.
ಸರ್ಕಾರದ ಇತ್ತೀಚಿನ ಸಹಕಾರ ಕಾಯ್ದೆಗೆ ತಿದ್ದುಪಡಿಯಲ್ಲಿರುವ ಕೆಲವು ಅಂಶಗಳು ಸಂಸ್ಥೆಗಳಿಗೆ ಮಾರಕವಾಗಿದ್ದು, ಇವನ್ನು ವಿರೋಧಿಸಿ ಹೈಕೋರ್ಟ್‌ನಲ್ಲಿ ತಡೆಯಾಜ್ಞೆ ತರಲಾಗಿದೆ. ಸಹಕಾರಿ ಸಚಿವರ ಗಮನಕ್ಕೆ ತಂದು ಮಾರಕ ಅಂಶಗಳನ್ನು ಕೈಬಿಡುವಂತೆ ಮನವಿ ಮಾಡಲಾಗಿದೆ ಎಂದರು.
ಉಪಾಧ್ಯಕ್ಷ ಎ.ಆರ್.ಪ್ರಸನ್ನಕುಮಾರ್ ಮಾತನಾಡಿ, ಸೌಹಾರ್ದ ಸಹಕಾರಿ ಚಳವಳಿಗೆ 25 ವರ್ಷವಾಗಿರುವ ಹಿನ್ನೆಲೆಯಲ್ಲಿ 2025ರ ಜನವರಿ 1ರಿಂದ ವರ್ಷಪೂರ್ಣ ಕಾರ್ಯಕ್ರಮ ಆಯೋಜಿಸಲು ಚಿಂತಿಸಲಾಗಿದೆ ಎಂದು ತಿಳಿಸಿದರು.
ನಿರ್ದೇಶಕ ಬಿ.ಎಚ್.ಕೃಷ್ಣಾರೆಡ್ಡಿ ಮಾತನಾಡಿ, ದೇಶದಲ್ಲಿ 8.5 ಲಕ್ಷ ಸಹಕಾರ ಸಂಸ್ಥೆಗಳು, 32 ಕೋಟಿ ಸದಸ್ಯರಿದ್ದಾರೆ ಎಂದು ಮಾಹಿತಿ ನೀಡಿದರು.
ಜಿಲ್ಲಾ ಸೌಹಾರ್ದ ಸಹಕಾರಿ ಒಕ್ಕೂಟದ ಅಧ್ಯಕ್ಷ ಸಿ.ವೀರಭದ್ರಬಾಬು, ಉಪಾಧ್ಯಕ್ಷ ತಿಪ್ಪೇಸ್ವಾಮಿ ಹಾಗೂ ಅಧ್ಯಕ್ಷತೆ ವಹಿಸಿದ್ದ ಮರ್ಚೆಂಟ್ಸ್ ಬ್ಯಾಂಕ್ ನಿರ್ದೇಶಕ ರಘುರಾಮರೆಡ್ಡಿ, ಸೌಹಾರ್ದ ಪ್ರಾಂತೀಯ ವ್ಯವಸ್ಥಾಪಕ ಶ್ರೀಧರ್ ಮಾತನಾಡಿದರು.
ಮರ್ಚೆಂಟ್ಸ್ ಬ್ಯಾಂಕ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಕೆ.ಆರ್.ಮಲ್ಲಿಕಾರ್ಜುನ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net