

ಹಾಸನ: ಜಿಲ್ಲೆ ಮತ್ತು ರಾಜ್ಯದಲ್ಲಿ ಮಳೆಇಲ್ಲದೆ ಬರಗಾಲ ಸ್ಥಿತಿ ನಿರ್ಮಾಣವಾಗಿದ್ದು, ಸರ್ಕಾರ ರಾಜ್ಯದ ರೈತರ ಹಿತ ಕಾಯದೆ ತಮಿಳುನಾಡಿಗೆ ನೀರು ಹರಿಸುತ್ತಿರುವ ಕ್ರಮವನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣ ಗೌಡ ಬಣ)ವತಿಯಿಂದ ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.
ಸರ್ಕಾರ ಗುರುವಾರ ರಾಜ್ಯದ 195 ತಾಲೂಕುಗಳನ್ನ ಬರಬೇಡಿ ತಾಲೂಕು ಎಂದು ಘೋಷಣೆ ಮಾಡಿದೆ. ಅಲ್ಲದೆ ಕಾವೇರಿ ಕಣಿವೆ ಭಾಗದಲ್ಲಿ ತೀವ್ರ ಸ್ವರೂಪದ ಬರ ನಿರ್ಮಾಣವಾಗಿದ್ದರೂ ಕೂಡ, ಸರ್ಕಾರ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶದಂತೆ ತಮಿಳುನಾಡಿಗೆ ನೀರು ಹರಿಸುತ್ತಿರುವುದು ನಿಜಕ್ಕೂ ಖಂಡನೆಯ ಎಂದು ಆಕ್ರೋಶ ವ್ಯಕ್ತಪಡಿಸಿ, ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತ್ತು.
ಮಳೆ ಇಲ್ಲದೆ ರಾಜ್ಯದ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ, ಅಲ್ಲದೆ ಮುಂದಿನ ದಿನಗಳಲ್ಲಿ ಮಳೆಯಾಗದಿದ್ದರೆ ಕುಡಿಯುವ ನೀರಿಗೂ ಕೂಡ ಅಭಾವ ಉಂಟಾಗಲಿದೆ. ಆದರೆ ಪ್ರಾಧಿಕಾರ ತಮಿಳುನಾಡಿಗೆ ನೀರು ಹರಿಸಲು ಆದೇಶಿಸುತ್ತಿರುವುದು ನಿಜಕ್ಕೂ ಆಶ್ಚರ್ಯ ಮತ್ತು ಆಘಾತ ತಂದಿದೆ ಎಂದರು.
ಸರ್ಕಾರ ಯಾವುದೇ ಕಾರಣಕ್ಕೂ ಪ್ರಾಧಿಕಾರದ ಆದೇಶವನ್ನು ಪಾಲಿಸದೆ, ರೈತರ ಹಿತ ಕಾಯಲು ಮುಂದಾಗಬೇಕು. ಈಗಾಗಲೇ ಸಾಕಷ್ಟು ನೀರನ್ನು ತಮಿಳುನಾಡಿಗೆ ಹರಿಸುವ ಮೂಲಕ ರಾಜ್ಯದ ಜನರಿಗೆ ಅನ್ಯಾಯ ಮಾಡಿದ್ದಾರೆ. ತಕ್ಷಣವೇ ನೀರು ಹರಿಸುವುದನ್ನು ನಿಲ್ಲಿಸಬೇಕು ಇಲ್ಲವಾದರೆ ಮುಂದಿನ ದಿನಗಳಲ್ಲಿ ಜನರೇ ದಂಗೆ ಏಳುವಂತಹ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಎಚ್ಚರಿಸಿದರು.
ರಾಜ್ಯದ ಸಂಸದರು ದೆಹಲಿಯಲ್ಲಿ ಪ್ರತಿಭಟನೆ ನಡೆಸುವ ಮೂಲಕ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಬೇಕು. ಒಂದು ವೇಳೆ ಪ್ರಾಧಿಕಾರದ ಆದೇಶವನ್ನು ಪಾಲಿಸಲು ತಮಿಳುನಾಡಿಗೆ ನೀರು ಹರಿಸಿದರೆ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣ ಗೌಡ ಬಣದ ಜಿಲ್ಲಾಧ್ಯಕ್ಷ ಸಿ.ಡಿ. ಮನುಕುಮಾರ್, ತಾಲೂಕು ಅಧ್ಯಕ್ಷ ಶಿವಣ್ಣಗೌಡ, ಉಪಾಧ್ಯಕ್ಷ ಸೀತರಾಮು, ಯುವ ಘಟಕದ ಅಧ್ಯಕ್ಷ ಅಭಿಗೌಡ, ವಿದ್ಯಾರ್ಥಿ ಘಟಕದ ಅಧ್ಯಕ್ಷ ಪ್ರೀತಮ್ ರಾಜ್, ಬೇಲೂರು ತಾಲೂಕು ಅಧ್ಯಕ್ಷ ಚಂದ್ರಶೇಖರ್, ಅರಸೀಕೆರೆ ತಾಲೂಕು ಅಧ್ಯಕ್ಷ ಹೇಮಂತ್, ಜಿಲ್ಲಾ ಕಾರ್ಯದರ್ಶಿ ರಘು ಪಾಳ್ಯ, ಮಹಿಳಾ ಜಿಲ್ಲಾಧ್ಯಕ್ಷ ರೇಖಾ ಮಂಜು, ಆಲೂರು ತಾಲೂಕು ಅಧ್ಯಕ್ಷ ನಟರಾಜು, ಮಹಿಳಾ ಉಪಾಧ್ಯಕ್ಷ ದೇವಿಕಾ ಮಧು, ಜೀವನ್ ಇತರರು ಇದ್ದರು.