ತಮಿಳುನಾಡಿಗೆ ಬಿಡುತ್ತಿರುವ ನೀರು ನಿಲ್ಲಿಸುವಂತೆ ಆಗ್ರಹಿಸಿ ಮೈಸೂರಿನಲ್ಲಿ ಪ್ರತಿಭಟನೆ

15
Published on

ಮೈಸೂರು: ತಮಿಳುನಾಡಿಗೆ ಬಿಡುತ್ತಿರುವ ನೀರನ್ನು ತಕ್ಷಣವೇ ನಿಲ್ಲಿಸುವಂತೆ ಆಗ್ರಹಿಸಿ ಕರ್ನಾಟಕ ಸೇನಾಪಡೆಯಿಂದ ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಯಿತು.
ಜಿಲ್ಲಾ ಪಂಚಾಯಿತಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು, ಮುಂಗಾರು ಮಳೆ ಕೈಕೊಟ್ಟಿರುವುದರಿಂದ ಕರ್ನಾಟಕದ ಜಲಾಶಯಗಳಲ್ಲಿ ನೀರಿಲ್ಲ. ಕೆರೆಕಟ್ಟೆಗಳು ಬತ್ತಿ ಹೋಗಿವೆ. ಈ ವರ್ಷ ಸರಿಯಾಗಿ ಮಳೆಯಾಗದಿರುವುದರಿಂದ ಜೀವನಾಡಿಯಾಗಿರುವ ಕೆಆರ್‌ಎಸ್, ಕಬಿನಿ, ಹಾರಂಗಿಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ನೀರಿಲ್ಲ ಎಂದರು.
ಪರಿಸ್ಥಿತಿ ಹೀಗಿದ್ದರೂ ರಾಜ್ಯದ ಕೆರೆಕಟ್ಟೆಗಳಿಗೆ ನೀರು ತುಂಬಿಸಿ ರಾಜ್ಯದ ರೈತರ ಬೆಳೆ ಬೆಳೆಯಲು ನೀರು ಬಿಡದ ರಾಜ್ಯ ಸರ್ಕಾರ, ಒತ್ತಡಕ್ಕೆ ಮಣಿದು ತಮಿಳುನಾಡಿಗೆ ನೀರು ಹರಿಸುತ್ತಿದೆ. ಕಾವೇರಿ ನೀರು ನಿರ್ವಹಣಾ ಮಂಡಳಿ ಪ್ರತಿ ಬಾರಿಯೂ ನಮ್ಮ ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ. ನಮ್ಮ ಜಲಾಶಯಗಳಲ್ಲಿ ನೀರಿಲ್ಲದಿದ್ದರೂ ನೀರು ಬಿಡುವಂತೆ ಹೇಳುತ್ತಿರುವುದು ವಿಪರ್ಯಾಸ ಎಂದು ಆಕ್ರೋಶ ವ್ಯಕ್ತಪಡಿಸಿದರು.
ತಮಿಳುನಾಡಿನ ಮುಖ್ಯಮಂತ್ರಿ ಸ್ಟಾಲಿನ್ ತನ್ನ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳಲು ಪದೇಪದೆ ಕರ್ನಾಟಕದ ಮೇಲೆ ಕ್ಯಾತೆ ತೆಗೆದು ತಮಿಳುನಾಡಿಗೆ ನೀರು ಬಿಡಿ ಎಂದು ಒತ್ತಾಯ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚುನಾವಣೆಗೂ ಮೊದಲು ಮೇಕೆದಾಟು ವಿಚಾರದಲ್ಲಿ ಪಾದಯಾತ್ರೆ ಮಾಡಿ ರಾಜ್ಯದ ನೀರು, ರೈತರ ಹಿತರಕ್ಷಣೆ ಕಾಪಾಡುತ್ತೇವೆ ಎಂದಿದ್ದರು. ಆದರೆ ಈಗ ಒತ್ತಡಕ್ಕೆ ಮಣಿದು ನೀರು ಬಿಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕರ್ನಾಟಕ ಸೇನಾಪಡೆ ಜಿಲ್ಲಾಧ್ಯಕ್ಷ ತೇಜೇಶ್ ಲೋಕೇಶ್‌ಗೌಡ, ಮುಖಂಡರಾದ ವಿಜಯೇಂದ್ರ, ಪ್ರಭುಶಂಕರ್, ಕೃಷ್ಣಪ್ಪ, ಪ್ರಜೀಶ್, ನರಸಿಂಹೇಗೌಡ, ಶಾಂತರಾಜೇಅರಸ್, ಅಂಬಾಅರಸ್, ನೇಹಾ, ಜ್ಯೋತಿ, ನರಸಿಂಹಮೂರ್ತಿ ಇತರರು ಪ್ರತಿಭಟನೆಯಲ್ಲಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net