ತಮಿಳುನಾಡು ಸರ್ಕಾರದಿಂದ ಸಾಮರಸ್ಯ ಹಾಳು

11rajesh1
Published on

ಚಾಮರಾಜನಗರ: ತಮಿಳುನಾಡಿನ ಮುಖ್ಯಮಂತ್ರಿ ಸ್ಟಾಲಿನ್ ಅವರು ಮೇಕೆದಾಟು ಯೋಜನೆಗೆ ವಿರೋಧ ವ್ಯಕ್ತಪಡಿಸಿದ್ದು, ಇದರಿಂದ ಎರಡು ರಾಜ್ಯಗಳ ಸಾಮರಸ್ಯ ಹಾಳಾಗುತ್ತದೆ ಎಂದು ಕರ್ನಾಟಕ ರಾಜ್ಯ ಕಬ್ಬುಬೆಳೆಗಾರರ ಸಂಘದ ಅಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಆರೋಪಿಸಿದರು.

ತಾಲೂಕಿನ ಮರಿಯಾಲ ಗ್ರಾಮದಲ್ಲಿ ಶುಕ್ರವಾರ ಆಯೋಜಿಸಿದ್ದ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘಕ್ಕೆ ರೈತರ ಸೇರ್ಪಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಕರ್ನಾಟಕದ ಬೆಂಗಳೂರು ಮತ್ತು ಇನ್ನಿತರೆ ಜಿಲ್ಲೆಗಳಿಗೆ ಕುಡಿಯುವ ನೀರನ್ನು ಪೂರೈಕೆ ಮಾಡುವ ಉದ್ದೇಶದಿಂದ ಕರ್ನಾಟಕದ ಕಾವೇರಿ ಮತ್ತು ಕಬಿನಿ ಜಲಾಶಯಗಳಿಂದ ಹರಿಯುವ ನೀರಿಗೆ ಮೇಕೆದಾಟು ಜಲಾಶಯ ನಿರ್ಮಾಣ ಅವಶ್ಯಕವಾಗಿದೆ. ಆದರೆ ತಮಿಳುನಾಡಿನ ಸ್ಟಾಲಿನ್ ನೇತೃತ್ವದ ರಾಜಕೀಯ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಕರ್ನಾಟಕದಲ್ಲಿ ಮೇಕೆದಾಟು ಯೋಜನೆಗೆ ನಮ್ಮ ವಿರೋಧ ವ್ಯಕ್ತಪಡಿಸಿದೆ. ಇದು ಎರಡು ರಾಜ್ಯಗಳ ಸಾಮರಸ್ಯವನ್ನು ಕದಲಿದಂತಾಗುತ್ತದೆ. ಶಾಂತಿಗೆ ಭಂಗ ತಂದಂತೆ ಆಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಳೆದ ವಿಧಾನಸಭಾ ಚುನಾವಣೆಗೂ ಮುನ್ನಾ ರಾಜ್ಯದ ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿರುವ ಡಿ.ಕೆ.ಶಿವಕುಮಾರ್ ಅವರು ಬೃಹತ್ ಪಾದಯಾತ್ರೆಯನ್ನು ನಡೆಸಿ ಮೇಕೆದಾಟು ಯೋಜನೆಯನ್ನು ಜಾರಿ ಮಾಡುತ್ತೇವೆ ಎಂದು ಭರವಸೆ ನೀಡಿದ್ದರು. ಆದರೆ ಅಧಿಕಾರಕ್ಕೆ ಬಂದು ಎರಡು ವರ್ಷ ಕಳೆದರೂ ಸಹ. ಇನ್ನೂ ಇದರ ಬಗ್ಗೆ ಚಕಾರ ಎತ್ತುತ್ತಿಲ್ಲ. ಈ ನಿಟ್ಟಿನಲ್ಲಿ ಶೀಘ್ರದಲ್ಲೇ ಕ್ರಮವಹಿಸಬೇಕು ಎಂದು ಆಗ್ರಹಿಸಿದರು.

ಈ ವೇಳೆ 50ಕ್ಕೂ ಹೆಚ್ಚು ರೈತರು ಕರ್ನಾಟಕ ರಾಜ್ಯ ಕಬ್ಬುಬೆಳೆಗಾರರ ಸಂಘಕ್ಕೆ ಸೇರ್ಪಡೆಯಾದರು. ಕಾರ್ಯಕ್ರಮದಲ್ಲಿ ಸಂಘದ ಜಿಲ್ಲಾಧ್ಯಕ್ಷ ಹಾಲಿನ ನಾಗರಾಜ್, ಜಿಲ್ಲಾ ಕಾರ್ಯದರ್ಶಿ ಮಲೆಯೂರು ಮಹೇಂದ್ರ, ಪ್ರಕಾಶ್ ಗಾಂಧಿ, ವಕೀಲ ಪೃಥ್ವಿ, ಗುರುವಿನಪುರ ಚಂದ್ರು, ಬಸವರಾಜು, ಮುಕ್ಕಡಹಳ್ಳಿ ರಾಜು, ಶ್ರೀಕಂಠ, ಚಿಕ್ಕಲಿಂಗಪ್ಪ, ವೀರಭದ್ರಸ್ವಾಮಿ, ಕುಮಾರ್, ಮಹೇಂದ್ರ, ಮಾದಪ್ಪ, ನಾಗರಾಜಪ್ಪ, ಮಹದೇವಸ್ವಾಮಿ ಹಾಗೂ ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net