

ಬಳ್ಳಾರಿ : ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿಸುವಲ್ಲಿ ಯಾವುದೇ ತಾಂತ್ರಿಕ ಸಮಸ್ಯೆಗಳು ಕಂಡುಬಂದಲ್ಲಿ ಕೂಡಲೇ ಸರಿಪಡಿಸಬೇಕು ಎಂದು ಎಡಿಸಿ ಮೊಹಮ್ಮದ್ ಎನ್.ಝುಬೇರ್ ಸೂಚಿಸಿದರು.
ನಗರದ ನೂತನ ಜಿಲ್ಲಾಡಳಿತ ಭವನದ ವಿಡಿಯೋ ಸಭಾಂಗಣದಲ್ಲಿ ಶನಿವಾರ ನಡೆದ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಸಮಿತಿಯ ಅಧ್ಯಕ್ಷ ಮತ್ತು ಸದಸ್ಯರ ಸಭೆಯಲ್ಲಿ ಮಾತನಾಡಿದರು.
ಐದು ಗ್ಯಾರಂಟಿ ಯೋಜನೆಗಳಾದ ಶಕ್ತಿ ಯೋಜನೆ, ಗೃಹ ಲಕ್ಷ್ಮಿ, ಗೃಹ ಜ್ಯೋತಿ, ಅನ್ನ ಭಾಗ್ಯ ಹಾಗೂ ಯುವನಿಧಿ ಯೋಜನೆಗಳನ್ನು ಜಿಲ್ಲೆಯ ಅರ್ಹ ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಸಮಿತಿ ರಚಿಸಿದ್ದು, ಲೋಪದೋಷ ಹಾಗೂ ವಿಳಂಬ ಕಂಡುಬಂದಲ್ಲಿ ಅಧ್ಯಕ್ಷರು ಹಾಗೂ ಸದಸ್ಯರ ಗಮನಕ್ಕೆ ತರಬೇಕು ಎಂದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಜಿಲ್ಲಾಧ್ಯಕ್ಷ ಕೆ.ಇ.ಚಿದಾನಂದಪ್ಪ ಮಾತನಾಡಿ, ಸರ್ಕಾರ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಿಂದ ಜಿಲ್ಲೆಯ ಸಹಸ್ರಾರು ಕುಟುಂಬಗಳು ಏಳಿಗೆ ಕಾಣುತ್ತಿವೆ. ಅನುಷ್ಠಾನ ಸಮಿತಿಯ ಕಾರ್ಯಕರ್ತರು ಪ್ರತಿಯೊಬ್ಬರ ಮನೆ ಬಾಗಿಲಿಗೆ ತೆರಳಿ ಯೋಜನೆ ತಲುಪಿದ ಬಗ್ಗೆ ಖಾತರಿ ಪಡಿಸಿಕೊಳ್ಳಬೇಕು. ತಾಂತ್ರಿಕ ಸಮಸ್ಯೆಯಿಂದ ಯೋಜನೆಯ ಸದುಪಯೋಗ ಪಡೆಯದ ಜನರ ಅಗತ್ಯ ದಾಖಲೆಗಳನ್ನು ಪಡೆದುಕೊಂಡು ಯೋಜನೆ ಫಲಾನುಭವಿಗಳಿಗೆ ಮುಟ್ಟುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.