ತಾಲೂಕು ಕಚೇರಿಗೆ ಡಿಸಿ ದಿಢೀರ್ ಭೇಟಿ

18M.D.R.1
Published on

ಮದ್ದೂರು: ಜಿಡ್ಡುಗಟ್ಟಿದ ತಾಲೂಕು ಆಡಳಿತಕ್ಕೆ ಚುರುಕು ಮುಟ್ಟಿಸುವ ಉದ್ದೇಶದಿಂದ ಪಟ್ಟಣದ ತಾಲೂಕು ಕಚೇರಿಗೆ ಜಿಲ್ಲಾಧಿಕಾರಿ ಕುಮಾರ್ ಮಂಗಳವಾರ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.
ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್ ನಾಗರಾಜ್ ಅವರೊಂದಿಗೆ ಬೆಳಗ್ಗೆ 10 ಗಂಟೆಗೆ ಆಗಮಿಸಿದ ಜಿಲ್ಲಾಧಿಕಾರಿ, ಖಜಾನೆ ಶಾಖೆ, ನಾಡ ಕಚೇರಿ, ಆಧಾರ್ ಕೇಂದ್ರ, ಆಡಳಿತ ಶಾಖೆ ಸೇರಿದಂತೆ ಕೆಲ ವಿಭಾಗಗಳನ್ನು ಖುದ್ದಾಗಿ ಪರಿಶೀಲನೆ ನಡೆಸಿದರು. ಈ ಸಂದರ್ಭ ಅವರು ಸಿಬ್ಬಂದಿಯಿಂದ ಮಾಹಿತಿ ಪಡೆದು ಸಮಸ್ಯೆಗಳ ಪರಿಹಾರಕ್ಕೆ ಸೂಚನೆ ನೀಡಿದರು.
ತಾಲೂಕು ಕಚೇರಿಯ ಆಧಾರ್ ಕೇಂದ್ರದ ಬಳಿ ಸಾಲುಗಟ್ಟಿ ನಿಂತಿದ್ದ ಸಾರ್ವಜನಿಕರ ಅಹವಾಲುಗಳನ್ನು ಡಿಸಿ ಸ್ವೀಕರಿಸಿದರು. 10.15 ಗಂಟೆಯಾದರೂ ಕೇಂದ್ರಕ್ಕೆ ಆಗಮಿಸದ ಸಿಬ್ಬಂದಿ ವಿರುದ್ಧ ಕಿಡಿಕಾರಿದರು. ತಡವಾಗಿ ಬರುವ ಸಿಬ್ಬಂದಿಗೆ ನೋಟಿಸ್ ಜಾರಿ ಮಾಡುವಂತೆ ಸ್ಥಳದಲ್ಲಿದ್ದ ತಹಸೀಲ್ದಾರ್ ನರಸಿಂಹಮೂರ್ತಿಗೆ ಸೂಚನೆ ನೀಡಿದರು.
ಇದೇ ಸಂದರ್ಭ ತಾಲೂಕು ಕಚೇರಿಯಲ್ಲಿನ ಭ್ರಷ್ಟಾಚಾರ, ಕಡತ ವಿಲೇವಾರಿ ಮಾಡಲು ವಿಳಂಬ, ರೈತರ ಹಾಗೂ ಸಾರ್ವಜನಿಕರ ಕೆಲಸ ಮಾಡಿಕೊಡಲು ಅನಗತ್ಯ ವಿಳಂಬ ಮಾಡುವ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಜಿಲ್ಲಾಧಿಕಾರಿ ಬಳಿ ದೂರು ಹೇಳಿಕೊಂಡರು.
ಸಮಸ್ಯೆಗಳನ್ನು ಆಲಿಸಿದ ಜಿಲ್ಲಾಧಿಕಾರಿ ಕುಮಾರ್, ನಿರ್ಲಕ್ಷೃ ತೋರುವ ಅಧಿಕಾರಿಗಳ ವಿರುದ್ದ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದರು.
ತಾಲೂಕು ಕಚೇರಿಯಲ್ಲಿ ಸಿಬ್ಬಂದಿ ಕೊರತೆ ಇದೆ. ಲಭ್ಯವಿರುವ ಸಿಬ್ಬಂದಿಯಿಂದ ಕರ್ತವ್ಯ ನಿರ್ವಹಿಸಲಾಗುತ್ತಿದೆ. ಕೂಡಲೇ ಸರ್ಕಾರಕ್ಕೆ ಪ್ರಸ್ತಾವನೆ ರವಾನಿಸಿ ಸಿಬ್ಬಂದಿಯ ಸಮಸ್ಯೆ ಬಗೆಹರಿಸುವುದಾಗಿ ಡಿಸಿ ಭರವಸೆ ನೀಡಿದರು.
ಹೊಸ ಪಡಿತರ ಚೀಟಿ, ತಿದ್ದುಪಡಿ ಮಾಡಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಈ ಸಮಸ್ಯೆ ರಾಜ್ಯವ್ಯಾಪಿ ಇದೆ. ಸರ್ಕಾರ ಇನ್ನು ಕೆಲ ದಿನಗಳಲ್ಲಿಯೇ ಈ ಸಮಸ್ಯೆ ಬಗೆಹರಿಸಿ ಪಡಿತರ ಚೀಟಿ ವಿತರಣೆಗೆ ಮುಂದಾಗಲಿದೆ ಎಂದು ತಿಳಿಸಿದರು.
ಸರ್ಕಾರಿ ಆಸ್ಪತ್ರೆ ಪರಿಶೀಲನೆ: ನಂತರ ಡಿಸಿ ಪಟ್ಟಣದ ಗುರುಶಾಂತಪ್ಪ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಇಲ್ಲಿಯ ವ್ಯವಸ್ಥೆಯ ಬಗ್ಗೆ ಪರಿಶೀಲಿಸಿ, ರೋಗಿಗಳಿಂದ ಮಾಹಿತಿ ಪಡೆದುಕೊಂಡರು. ತಹಸೀಲ್ದಾರ್ ನರಸಿಂಹಮೂರ್ತಿ, ತಾಲೂಕು ವೈದ್ಯಾಧಿಕಾರಿ ಡಾ.ರವೀಂದ್ರ, ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಬಾಲಕೃಷ್ಣ ಇತರರು ಇದ್ದರು.

.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net