

ಸೊರಬ: ರೈತರ ಸ್ವಾವಲಂಬಿ ಬದುಕಿಗೆ ಹಾಗೂ ನೀರಾವರಿ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ತಾಲೂಕಿನಲ್ಲಿ ಅನುಷ್ಠಾನಗೊಳಿಸಲಾಗಿದ್ದು ಶಾಶ್ವತ ನೀರಾವರಿ ಮತ್ತು ವಿದ್ಯುತ್‌ಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ಶಾಸಕ ಕುಮಾರ್ ಬಂಗಾರಪ್ಪ ಹೇಳಿದರು.
ಭಾನುವಾರ ತಾಲೂಕಿನ ಆನವಟ್ಟಿ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ಬಿಜೆಪಿ ರೈತ ಮೋರ್ಚಾ ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಹಮ್ಮಿಕೊಂಡ ಟ್ರ್ಯಾಕ್ಟರ್ ರ‌್ಯಾಲಿಯಲ್ಲಿ ಮಾತನಾಡಿದರು. ಕುಮಾರ್ ಬಂಗಾರಪ್ಪ ಕೆಲ ದೂರ ಟ್ರ್ಯಾಕ್ಟರ್ ಚಲಾಯಿಸುವ ಮೂಲಕ ಗಮನ ಸೆಳೆದರು.
ರೈತರಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡುವ ನಿಟ್ಟಿನಲ್ಲಿ ತಾಲೂಕಿನಲ್ಲಿ 14 ವಿದ್ಯುತ್ ಗ್ರಿಡ್‌ಗಳನ್ನು ನಿರ್ಮಿಸಲಾಗುತ್ತಿದೆ ಎಂದರು.
ಪ್ರತಿಯೊಬ್ಬ ಭಾರತೀಯರು 75ನೇ ಸ್ವಾತಂತ್ರ್ಯೋತ್ಸವದಲ್ಲಿ ಉತ್ಸಾಹದಿಂದ ಪಾಲ್ಗೊಳ್ಳುತ್ತಿದ್ದಾರೆ. ದೇಶದ ಸ್ವಾತಂತ್ರ್ಯಕ್ಕೆ ಅನೇಕ ಮಹನೀಯರು ತ್ಯಾಗ, ಬಲಿದಾನವನ್ನು ಮಾಡಿದ್ದಾರೆ. ಅವರನ್ನು ಸ್ಮರಿಸುವ ಕೆಲಸವಾಗುತ್ತಿದೆ. ಮುಂದಿನ ಪೀಳಿಗೆಗೆ ಸ್ವಾತಂತ್ರ್ಯದ ಹೋರಾಟವನ್ನು ತಲುಪಿಸುವ ನಿಟ್ಟಿನಲ್ಲಿ ಅಮೃತ ಮಹೋತ್ಸವ ನಡೆಯುತ್ತಿದೆ. ದೇಶದ ಬೆನ್ನೆಲುಬಾದ ರೈತರಿಗೂ ಗೌರವ ನೀಡುವ ನಿಟ್ಟಿನಲ್ಲಿ ರ‌್ಯಾಲಿ ಆಯೋಜಿಸಲಾಗಿದೆ ಎಂದರು.