

ವಿಜಯವಾಣಿ ಸುದ್ದಿಜಾಲ ಅರಕಲಗೂಡು
ತಾಲೂಕಿನಲ್ಲಿ ಮಳೆ ಅಭಾವದಿಂದಾಗಿ ಬರಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಅಲೂಗಡ್ಡೆ ಬೆಳೆ ಪರಿಸ್ಥಿತಿಯನ್ನು ವೀಕ್ಷಿಸಿದರು.
ತಾಲೂಕಿನ ನೈಗೆರೆ, ಕಾಶೀಪುರ, ಬರಗೂರು ಗ್ರಾಮಗಳ ರೈತರ ಬೆಳೆ ಜಮೀನಿಗೆ ಸೋಮವಾರ ಭೇಟಿ ನೀಡಿ ಆಲೂಗಡ್ಡೆ ಬೆಳೆ ಪರಿಶೀಲನೆ ನಡೆಸಲಾಯಿತು. ತಾಲೂಕಿನಲ್ಲಿ ಪ್ರತಿವರ್ಷ 1500 ಹೆಕ್ಟೇರ್ ಪ್ರದೇಶದಲ್ಲಿ ಆಲೂಗಡ್ಡೆ ಬೆಳೆಯಲಾಗುತ್ತಿತ್ತು. ಆದರೆ ಈ ಬಾರಿ ಮಳೆ ಕೊರತೆ ಕಾರಣ 670 ಹೆಕ್ಟೇರ್ ಪ್ರದೇಶದಲ್ಲಿ ಮಾತ್ರ ಬಿತ್ತನೆಯಾಗಿತ್ತು. ಈಗ ಅದರಲ್ಲೂ 370 ಹೆಕ್ಟೇರ್ ಪ್ರದೇಶದಲ್ಲಿ ನೀರಿನ ಕೊರತೆಯಿಂದ ಶೇ.33ಕ್ಕಿಂತ ಹೆಚ್ಚಿನ ಹಾನಿ ಸಂಭವಿಸಿದೆ.
ಜಿಲ್ಲೆಯಲ್ಲಿ ಅರಕಲಗೂಡು, ಹೊಳೇನರಸೀಪುರ ಮತ್ತು ಸಕಲೇಶಪುರ ತಾಲೂಕುಗಳಲ್ಲಿ ಕ್ಷೇತ್ರ ಮಟ್ಟದಲ್ಲಿ ವಾಸ್ತವಾಂಶ ಅವಲೋಕನಕ್ಕೆ ಆಯ್ಕೆ ಮಾಡಲಾಗಿದೆ. ತಾಲೂಕಿನ 30 ಆಯ್ದ ಗ್ರಾಮಗಳಲ್ಲಿ ಮೊಬೈಲ್ ಆ್ಯಪ್ ಮೂಲಕ ದತ್ತಾಂಶ ಸಂಗ್ರಹಿಸಿ ಸರ್ಕಾರಕ್ಕೆ ವರದಿ ನೀಡುವುದಾಗಿ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕಿ ಕೆ. ಮಂಗಳಾ ತಿಳಿಸಿದರು.
ತಾಲೂಕು ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಡಿ. ರಾಜೇಶ್ ಮಾತನಾಡಿ, ತಾಲೂಕಿನಲ್ಲಿ ಆಗಸ್ಟ್ ತಿಂಗಳಿನಲ್ಲಿ ಶೇ. 76 ರಷ್ಟು ಮಳೆ ಕೊರತೆಯಾದ ಕಾರಣ ಏಕ ವಾರ್ಷಿಕ ಬೆಳೆಗಳ ಮೇಲೆ ತೀವ್ರ ಪರಿಣಾಮ ಉಂಟಾಗಿದೆ ಎಂದು ತಿಳಿಸಿದರು. ಸಹಾಯಕ ತೋಟಗಾರಿಕೆ ಅಧಿಕಾರಿಗಳಾದ ಶಶಿಕುಮಾರ್, ಪಲ್ಲವಿ ಇದ್ದರು.