ತ್ಯಾಜ್ಯ ವಿಲೇವಾರಿ ಸೂಕ್ತವಾಗಿರಲಿ

09 Jaggu 7
ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ಜಿಲ್ಲಾಮಟ್ಟದ ಸಮಿತಿ ಸಭೆಯಲ್ಲಿ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ರಾಜ್ಯಮಟ್ಟದ ಸಮಿತಿ ಅಧ್ಯಕ್ಷ ಸುಭಾಷ ಆಡಿ ಮಾತನಾಡಿದರು. ಜಿಲ್ಲಾಧಿಕಾರಿ ಮೊಹಮ್ಮದ್​ ರೋಷನ್​, ರಾಹುಲ್​ ಶಿಂಧೆ ಇತರರಿದ್ದರು.
Published on

ಬೆಳಗಾವಿ: ತ್ಯಾಜ್ಯವನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡುವಲ್ಲಿ ಸ್ಥಳಿಯ ಸಂಸ್ಥೆಗಳ ಪಾತ್ರ ಅತಿ ಮಹತ್ವದ್ದಾಗಿದೆ. ಸ್ಥಳಿಯ ಸಂಸ್ಥೆಗಳ ವ್ಯಾಪ್ತಿಯ ಎಲ್ಲ ವಾರ್ಡ್​ಗಳಲ್ಲಿ ಹಸಿ&ಒಣ ಕಸ ವಿಂಗಡಣೆಗೆ ಸೂಕ್ತ ರೂಪುರೇಷೆ ಸಿದ್ಧಪಡಿಸಿಕೊಳ್ಳಬೇಕು ಎಂದು ರಾಷ್ಟ್ರೀಯ ಹಸಿರು ನ್ಯಾಯಾಧಿಕರಣದ ರಾಜ್ಯಮಟ್ಟದ ಸಮಿತಿ ಅಧ್ಯಕ್ಷ ಸುಭಾಷ ಆಡಿ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ಜಿಲ್ಲಾಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸ್ಥಳಿಯ ಸಂಸ್ಥೆಗಳ ವ್ಯಾಪ್ತಿಯ ಜನಸಂಖ್ಯೆ ಹಾಗೂ ಉತ್ಪಾದನೆಯಾಗುವ ತ್ಯಾಜ್ಯದ ಬಗ್ಗೆ ಸ್ಥಳಿಯ ಸಂಸ್ಥೆಗಳ ಮಾಹಿತಿ ಹೊಂದಿರಬೇಕು. ಪ್ರತಿ ಮನೆಯಿಂದ ಹಸಿ ಹಾಗೂ ಒಣ ಕಸ ಪ್ರತ್ಯೇಕವಾಗಿ ಸಂಗ್ರಹಿಸಬೇಕು. ಈ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದರು.

ಪ್ಲಾಸ್ಟಿಕ ಬಳಕೆ ನಿಷೇದಿಸಿದ್ದರೂ ಮಾರುಕಟ್ಟೆಯಲ್ಲಿ ಪ್ಲಾಸ್ಟಿಕ್​ ಮಾರಾಟ ಆಗುತ್ತಿದೆ. ಅಧಿಕಾರಿಗಳು ನಿರಂತರವಾಗಿ ಅಂಗಡಿಗಳಲ್ಲಿ ತಪಾಸಣೆ ಕೈಗೊಂಡು ಮಾರಾಟ ಕಂಡುಬಂದಲ್ಲಿ ಅಂತಹ ಅಂಗಡಿ&ಮುಂಗಟ್ಟುಗಳ ಪರವಾನಗಿ ರದ್ದುಗೊಳಿಸಲು ಕ್ರಮ ವಹಿಸಬೇಕು. ಪ್ಲಾಸ್ಟಿಕ್​, ಇ&ವೇಸ್ಟ್​ಗಳನ್ನು ವೈಜ್ಞಾನಿಕ ರೀತಿ ವಿಲೇವಾರಿ ಮಾಡಬೇಕು. ಕಾಲೇಜು, ಕೈಗಾರಿಕೆ, ಹೋಟೆಲ್​, ಮದುವೆ ಮಂಟಪಗಳಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದರು.

ಕಟ್ಟಡ ತ್ಯಾಜ್ಯ ವಿಲೇವಾರಿ ಮಾಡಲು ಕಟ್ಟಡ ಮಾಲೀಕರಿಗೆ ತಿಳಿವಳಿಕೆ ನೀಡಬೇಕು. ತ್ಯಾಜ್ಯ ಸಾಗಣೆಗೆ ಸಂಸ್ಥೆಗಳಿಂದಲೇ ವಾಹನ ಪೂರೈಸಬೇಕು. ವಾಹನದ ಬಾಡಿಗೆಯನ್ನು ಕಟ್ಟಡ ಮಾಲೀಕರಿಂದ ತುಂಬಿಸಬೇಕು. ಷರತ್ತು ಉಲ್ಲಂಸಿದವರಿಗೆ ದಂಡ ವಿಧಿಸಬೇಕು ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಮೊಹಮ್ಮದ್​ ರೋಷನ್​ ಮಾತನಾಡಿ, ಸ್ಥಳಿಯ ಸಂಸ್ಥೆಗಳ ಮುಖ್ಯಾಧಿಕಾರಿ ಹಾಗೂ ಸಿಬ್ಬಂದಿಗೆ ತ್ಯಾಜ್ಯ ವಿಂಗಡಣೆ ಹಾಗೂ ಸೂಕ್ತ ರೀತಿ ವಿಲೇವಾರಿಗೆ ಸಂಬಂಧಿಸಿದಂತೆ ತರಬೇತಿ ನೀಡಲಾಗುವುದು ಎಂದರು. ಜಿಪಂ ಸಿಇಒ ರಾಹುಲ ಶಿಂಧೆ, ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಲ್ಲಿಕಾರ್ಜುನ ಕಲಾದಗಿ, ಪ್ರಾದೇಶಿಕ ಪರಿಸರ ಅಧಿಕಾರಿಗಳು ಹಾಗೂ ಸ್ಥಳಿಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net