

ಚಿತ್ರದುರ್ಗ: ಅಡುಗೆ ಅನಿಲ, ಪೆಟ್ರೋಲ್ ಹಾಗೂ ಡಿಸೇಲ್ ದರ ಹೆಚ್ಚಳ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ಪ್ರವಾಸಿ ಮಂದಿರದಿಂದ ವೀರ ವನಿತೆ ಒನಕೆ ಓಬವ್ವ ವೃತ್ತದವರೆಗೆ ಭಿತ್ತಿ ಪತ್ರ ಹಿಡಿದು ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕಾರೇಹಳ್ಳಿಉಲ್ಲಾಸ ಮಾತನಾಡಿ, ಇಂಧನದ ಅಬಕಾರಿ ಸುಂಕ 2 ರೂ. ಹೆಚ್ಚಿಸುವ ಮೂಲಕ ಕೇಂದ್ರ ಸರ್ಕಾರ ಬಡವರ ಬದುಕಿಗೆ ಕೊಳ್ಳಿ ಇಟ್ಟಿದೆ ಎಂದು ದೂರಿದರು. ದರ ಏರಿಕೆಯಿಂದ ಹಣದುಬ್ಬರ ಹಾಗೂ ನಿರುದ್ಯೋಗ ಹೆಚ್ಚಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.
ಅಡುಗೆ ಅನಿಲದ ದರ ಹೆಚ್ಚಳ ಖಂಡಿಸಿದ ಅವರು, ತಕ್ಷಣ ದರ ಕಡಿತಕ್ಕೆ ಕ್ರಮ ಕೈಗೊಳ್ಳುವಂತೆ ಕೇಂದ್ರವನ್ನು ಒತ್ತಾಯಿಸಿದರು. ಎನ್.ಡಿ. ಕುಮಾರ್, ದಾದಾಪೀರ್, ರೋಹನ್, ಕುಮಾರ್, ಮಹಾಂತೇಶ್, ಚಂದನ್, ಮಧು, ಶ್ರೀನಿವಾಸ್, ವೀರೇಶ್, ರೇವಣ್ಣ ಮತ್ತಿತರರು ಪ್ರತಿಭಟನೆಯಲ್ಲಿ ಬಾಗವಹಿಸಿದ್ದರು.