ದಲಿತ ಮೀಸಲು ನಿಧಿ ದುರ್ಬಳಿಕೆ ವಿರೋಧಿಸಿ ಬಿಜೆಪಿ ಪ್ರತಿಭಟನೆ

25906d46-cfb8-42e0-8a40-bb12f409ed0f
Published on

ಬಾಗಲಕೋಟೆ: ಗ್ಯಾರಂಟಿಗಳಿಗೆ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಅನುದಾನ ದುರ್ಬಳಿಕೆ ಮಾಡುತ್ತಿದೆ ಎಂದು ಆರೋಪಿಸಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಜಿಲ್ಲಾ ಬಿಜೆಪಿವತಿಯಿಂದ ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಯಿತು.

ನವನಗರದ ಬಿಜೆಪಿ ಕಾರ್ಯಾಲಯದಿಂದ ಪಾದಯಾತ್ರೆ ಮೂಲಕ ಜಿಲ್ಲಾಡಳಿತ ಭವನದ ವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿದರು. ಈ ವೇಳೆ ಜಿಲ್ಲಾಡಳಿತ ಭವನಕ್ಕೆ ತೆರಳದಂತೆ ಪ್ರವೇಶದ್ವಾರದ ಬಳಿ ಬ್ಯಾರಿಕೇಡ್ ಗಳನ್ನು ಹಾಕಿ ಪ್ರತಿಭಟನಾಕಾರರನ್ನು ಪೊಲೀಸರು ತಡೆದರು. ಇದರಿಂದ ಆಕ್ರೋಶಗೊಂಡ ಬಿಜೆಪಿ ಕಾರ್ಯಕರ್ತರು ಒಳಗಡೆ ಬಿಡುವಂತೆ ಪಟ್ಟುಹಿಡಿದರು. ಬಳಿಕ ಅವರನ್ನು ಒಳಗೆ ಬಿಡಲಾಯಿತು.

ಪ್ರತಿಭಟನಾ ಮೆರವಣಿಗೆಯಲ್ಲಿ ಕಾಂಗ್ರೆಸ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಘೋಷಣೆ, ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸಿದ್ದರಾಮಯ್ಯ ರಾಜೀನಾಮೆ ಕೊಡಿ ಎನ್ನುವ pಲಕ ಪ್ರದರ್ಶಿಸಿದರು. ಬಳಿಕ ಜಿಲ್ಲಾಡಳಿತ ಭವನದ ಎದುರು ಬಹಿರಂಗ ಸಭೆ ನಡೆಸಿದರು.

ಈ ವೇಳೆ ಮಾತನಾಡಿದ ಶಾಸಕ ಸಿದ್ದು ಸವದಿ, ಪರಿಷತ್ ಸದಸ್ಯರಾದ ಪಿ.ಎಚ್.ಪೂಜಾರ, ಹನಮಂತ ನಿರಾಣಿ ಸೇರಿದಂತೆ ವಿವಿಧ ಮುಖಂಡರು, ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ದಲಿತ ಹಣ ಸರ್ಕಾರ ಗುಳಂ ಮಾಡುತ್ತಿದೆ ಎಂದು ಆರೋಪಿಸಿದರು. ಮುಂಬರುವ ಬಜೆಟ್‌ನಲ್ಲಿ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಅನುದಾನವನ್ನು ಗ್ಯಾರಂಟಿಗಳಿಗೆ ವರ್ಗಾವಣೆ ಮಾಡಲು ನಡೆಸಿರುವ ಹುನ್ನಾರ ಕೈಬಿಡಬೇಕು. ಇಲ್ಲವಾದರೆ ರಾಜ್ಯಾದ್ಯಂತ ಸರ್ಕಾರದ ವಿರುದ್ಧ ದೊಡ್ಡಮಟ್ಟದಲ್ಲಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು. ಬಳಿಕ ಉಪವಿಭಾಗಾಽಕಾರಿ ಸಂತೋಷ ಜಗಲಾಸರ್ ಅವರಿಗೆ ಮನವಿ ಸಲ್ಲಿಸಿದರು.

ಸಂಸದ ಪಿ.ಸಿ.ಗದ್ದಿಗೌಡರ, ಪರಿಷತ್ ಸದಸ್ಯ ಪಿ.ಎಚ್.ಪೂಜಾರ, ಪರಿಷತ್ ಮಾಜಿ ಸದಸ್ಯ ಅರುಣ ಶಹಪುರ, ಜಿಪಂ ಮಾಜಿ ಅಧ್ಯಕ್ಷ ಹೂವಪ್ಪ ರಾಠೋಡ, ಮುಖಂಡರಾದ ಮುತ್ತಣ್ಣ ಬೆಣ್ಣೂರ, ಶಿವಾನಂದ ಟವಳಿ, ಯಲ್ಲಪ್ಪ ಬೆಂಡಿಗೇರಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ನಾಯ್ಕರ್ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net