ದಲಿತರ ಮೇಲಿನ ದೌರ್ಜನ್ಯಕ್ಕೆ ಖಂಡನೆ

12-GPT-1
Published on

ಗುಂಡ್ಲುಪೇಟೆ: ತಾಲೂಕಿನಲ್ಲಿ ದಲಿತರ ಮೇಲೆ ದೌರ್ಜನ್ಯ ನಡೆಯುತ್ತಿದ್ದರೂ ತಡೆಗಟ್ಟಲು ವಿಫಲವಾದ ತಾಲೂಕು ಆಡಳಿತದ ವಿರುದ್ಧ ದಲಿತ ಸಂಘರ್ಷ ಸಮಿತಿಯ ಸದಸ್ಯರು ಮಂಗಳವಾರ ಪಟ್ಟಣದ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ತಾಲೂಕಿನ ಬಾಚಹಳ್ಳಿ ಗ್ರಾಮದಲ್ಲಿ ದಲಿತರ ಮೇಲೆ ದೌರ್ಜನ್ಯ ಎಸಗಿದವರ ಬಂಧನಕ್ಕೆ ಒತ್ತಾಯಿಸಿ ಘೋಷಣೆ ಕೂಗಿದರು. ಪ್ರಕರಣ ದಾಖಲಾಗಿದ್ದರೂ ಪೊಲೀಸರು ಆರೋಪಿಗಳನ್ನು ಬಂಧಿಸಿಲ್ಲ. ಸ್ಥಳಕ್ಕೆ ತಹಸೀಲ್ದಾರ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಭೇಟಿ ನೀಡದೆ ದಲಿತ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ತಾಲೂಕಿನಲ್ಲಿ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆಗಟ್ಟಬೇಕು ಎಂಬ ಮನವಿ ಪತ್ರವನ್ನು ಕಂದಾಯಾಧಿಕಾರಿಗಳಿಗೆ ಸಲ್ಲಿಸಿ ಪ್ರತಿಭಟನೆ ಕೈಬಿಟ್ಟರು. ಈ ಸಂದರ್ಭದಲ್ಲಿ ದಸಂಸ ಜಿಲ್ಲಾ ಸಂಚಾಲಕ ರಾಜಣ್ಣ, ಸಂಘಟನಾ ಸಂಚಾಲಕ ನಂಜುಂಡಸ್ವಾಮಿ, ತಾಲೂಕು ಸಂಚಾಲಕ ರಂಗಸ್ವಾಮಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net