ದಲಿತರ ಮೇಲೆ ನಿರಂತರ ದೌರ್ಜನ್ಯ

23M.D.R.6
Published on

ಮದ್ದೂರು: ದಲಿತರ ಮೇಲೆ ನಿರಂತರವಾಗಿ ದೌರ್ಜನ್ಯ, ದಬ್ಬಾಳಿಕೆಗಳು ನಡೆಯುತ್ತಿವೆ. ಜನಾಂಗದವರಿಗೆ ರಕ್ಷಣೆ ನೀಡುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಜಿಲ್ಲಾಧ್ಯಕ್ಷ ಎಂ.ಪುಟ್ಟಮಾದು ಆರೋಪಿಸಿದರು.

ಪಟ್ಟಣದ ಖಾಸಗಿ ಪಾರ್ಟಿ ಹಾಲ್‌ನಲ್ಲಿ ಭಾನುವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ದಲಿತರ ಸಮಾವೇಶದಲ್ಲಿ ಮಾತನಾಡಿದರು. ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡ ಸಮುದಾಯದ ಜನರ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿವೆ. ಈ ಸಂಬಂಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿ ನ್ಯಾಯಾಲಯಕ್ಕೆ ಅಪರಾಧದ ವರದಿ ಸಲ್ಲಿಸಿದ್ದರೂ ತಪ್ಪಿತಸ್ಥರಿಗೆ ಶಿಕ್ಷೆಯಾಗಿಲ್ಲ. ಸಾವಿರಾರು ಪ್ರಕರಣಗಳು ಬಾಕಿ ಇವೆ ಎಂದು ಬೇಸರ ವ್ಯಕ್ತಪಡಿಸಿದರು.

ಹಳ್ಳಿಗಳಲ್ಲಿ 2 ಲೋಟದ ಪದ್ಧತಿ ಇನ್ನೂ ಜೀವಂತವಾಗಿದೆ. ಗ್ರಾಮೀಣ ಭಾಗದಲ್ಲಿ ಅಸ್ಪಶ್ಯತೆ ಸಂಪೂರ್ಣ ನಿವಾರಣೆಯಾಗಿಲ್ಲ. ಸರ್ಕಾರ ಹಲವು ಕಲ್ಯಾಣ ಕಾರ್ಯಕ್ರಮಗಳನ್ನು ರೂಪಿಸಿದ್ದರೂ ತಳ ಸಮುದಾಯದವರಿಗೆ ತಲುಪುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಿಪಿಐಎಂ ಪಕ್ಷದ ಜಿಲ್ಲಾ ಕಾರ್ಯದರ್ಶಿ ಟಿ.ಎಲ್.ಕೃಷ್ಣೇಗೌಡ ಮಾತನಾಡಿ, ಬಾಯಲ್ಲಿ ಭಗವದ್ಗೀತೆ ಹೇಳಿ ನಿಜ ಜೀವನದಲ್ಲಿ ದಬ್ಬಾಳಿಕೆ ಮಾಡುವ ಸಂಸ್ಕೃತಿ ನಮ್ಮಲ್ಲಿದೆ. ಭಾರತ ಸ್ವಾತಂತ್ರ್ಯ ಕಂಡು 75 ವರ್ಷ ಕಳೆದರೂ ಅಸ್ಪಶ್ಯತೆ ಮಾತ್ರ ನಿವಾರಣೆಯಾಗಿಲ್ಲ. ಜಗತ್ತಿನಲ್ಲಿ ಮತ್ತೊಮ್ಮೆ ಅಂಬೇಡ್ಕರ್, ಬಸವಣ್ಣ ಹಾಗೂ ಬುದ್ಧ ಹುಟ್ಟಬೇಕು ಎನಿಸುತ್ತದೆ ಎಂದರು.

ಕಾರ್ಯಕ್ರಮಕ್ಕೂ ಮುನ್ನ ಪಟ್ಟಣದ ಪ್ರವಾಸಿ ಮಂದಿರದಿಂದ ಪ್ರತಿಭಟನಾ ಮೆರವಣಿಗೆ ನಡೆಯಿತು. ಡಿಎಚ್‌ಎಸ್ ಜಿಲ್ಲಾ ಸಂಚಾಲಕ ಆರ್.ಕೃಷ್ಣ, ದಲಿತ ಶೋಷಣ ಮುಕ್ತಿ ಮಂಚ್ ಕೇಂದ್ರ ಸಮಿತಿ ಸದಸ್ಯ ನಾಗರಾಜು ನಂಜುಂಡಯ್ಯ, ಡಿಎಚ್‌ಎಸ್ ಜಿಲ್ಲಾ ಸಂಚಾಲಕ ಕೆ.ಎಸ್.ಶಿವಲಿಂಗಯ್ಯ, ಸಿಐಟಿಯೂ ಪ್ರಧಾನ ಕಾರ್ಯದರ್ಶಿ ಸಿ.ಕುಮಾರಿ, ತಾಲೂಕು ಪ್ರಧಾನ ಕಾರ್ಯದರ್ಶಿ ಜಿ.ಆರ್.ರಾಮು, ಮುಖಂಡರಾದ ಶೋಭಾ ರಾಜಣ್ಣ, ರಾಜವೆಂಕಟಪ್ಪ, ವೆಂಕಟೇಶ್, ವನಜಾ, ಅಂಬೂಜಿ, ವಿಜೇಂದ್ರಕುಮಾರ್, ಮಲ್ಲಿಕಾರ್ಜುನ್, ಮಂಜು, ಶಂಕರ್, ಗಣೇಶ್, ವರಲಕ್ಷ್ಮೀ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net