ದಸಂಸ ವತಿಯಿಂದ ಅರೆಬೆತ್ತಲೆ ಪ್ರತಿಭಟನೆ

06rajesh1
Published on

ಚಾಮರಾಜನಗರ: ಕೇಂದ್ರ ಸರ್ಕಾರ ಸಾಂವಿಧಾನಿಕ ಸಂಸ್ಥೆಗಳಾದ ಇಡಿ, ಐಟಿ, ಸಿಬಿಐ ಹಾಗೂ ರಾಜ ಭವನಗಳನ್ನು ರಾಜಕೀಯ ಲಾಭಕ್ಕಾಗಿ ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿ ರಾಜ್ಯ ದಲಿತ ಸಂಘರ್ಷ ಸಮಿತಿ (ಡಾ.ಡಿ.ಜಿ.ಸಾಗರ್ ಬಣ) ವತಿಯಿಂದ ಅರೆಬೆತ್ತಲೆ ಪ್ರತಿಭಟನೆ ನಡೆಸಲಾಯಿತು.

ನಗರದ ಜಿಲ್ಲಾಡಳಿತ ಭವನದ ಮುಂಭಾಗ ಬುಧವಾರ ಜಮಾಯಿಸಿದ ಪ್ರತಿಭಟನಾಕಾರರು, ಅರೆಬೆತ್ತಲಾಗಿ ಕೆಲಕಾಲ ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರದ ವಿರುದ್ಧ ೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ದಸಂಸ ಜಿಲ್ಲಾ ಸಮಿತಿ ಸಂಚಾಲಕ ಸಿ.ಎಂ.ಶಿವಣ್ಣ ಮಾತನಾಡಿ, ಲೋಕಾಯುಕ್ತ ಪೊಲೀಸರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಎಫ್‌ಐಆರ್ ದಾಖಲಿಸಿರುವ ಹಿನ್ನೆಲೆಯಲ್ಲಿ ರಾಜೀನಾಮೆ ನೀಡುವಂತೆ ಬಿಜೆಪಿ ನಾಯಕರು ಹೋರಾಟ ಪ್ರಾರಂಭಿಸಿದ್ದಾರೆ. ಕೇಂದ್ರ ಬಿಜೆಪಿ ಸರ್ಕಾರ ಸಾಂವಿಧಾನಿಕ ಸಂಸ್ಥೆಗಳ ದುರುಪಯೋಗ ಪಡಿಸಿಕೊಂಡು ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವನ್ನು ದುರ್ಬಲಗೊಳಿಸಲು ಷಡ್ಯಂತ್ರ ನಡೆಸುತ್ತಿದೆ ಎಂದು ದೂರಿದರು.

ಎಫ್‌ಐಆರ್ ದಾಖಲಾಗಿರುವ ಕಾರಣಕ್ಕೆ ರಾಜೀನಾಮೆ ನೀಡಬೇಕೆಂಬ ಮಾನದಂಡವನ್ನು ನಿಗದಿಪಡಿಸಿದರೆ, ಕೇಂದ್ರ ಸರ್ಕಾರದ ಸಂಪುಟದಲ್ಲಿರುವ ಸುಮಾರು 23-24 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ. ಬಿಜೆಪಿ ಮತ್ತು ಜೆಡಿಎಸ್ ನಾಯಕರಿಗೆ ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆ ಕೇಳುವ ನೈತಿಕ ಹಕ್ಕಿಲ್ಲ. ಯಾವುದೇ ಕಾರಣಕ್ಕೂ ಮುಖ್ಯಮಂತ್ರಿಗಳು ರಾಜೀನಾಮೆ ನೀಡಬಾರದು ಎಂದರು.

ಪ್ರತಿಭಟನೆಯಲ್ಲಿ ಆಟೋ ಉಮೇಶ್, ಗೀಜರ್ ಮಂಜೇಶ್, ಕೊತ್ತಲವಾಡಿ ಶಿವಸ್ವಾಮಿ, ನಾರಾಯಣ್, ರವಿಕುಮಾರ್ ಹಾಗೂ ಇತರರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net