

ಮೈಸೂರು: ಈ ಬಾರಿ ಅದ್ದೂರಿ ದಸರಾ ನಡೆಸಲು ನಿರ್ಧರಿಸಿದ್ದು, ಹೊಸ ಆಯಾಮ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಬುಧವಾರ ಚಾಮುಂಡಿಬೆಟ್ಟದಲ್ಲಿ ಚಾಮುಂಡೇಶ್ವರಿ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಎರಡು ವರ್ಷಗಳಿಂದ ಕೋವಿಡ್‌ನಿಂದಾಗಿ ಅದ್ದೂರಿ ದಸರಾ ನಡೆಸಲಾಗಲಿಲ್ಲ. ಸಾಂಪ್ರದಾಯಿಕವಾಗಿ ದಸರಾ ಆಚರಣೆ ಮಾಡಲಾಗಿತ್ತು. ಈ ಬಾರಿಯ ದಸರಾವನ್ನು ಅದ್ದೂರಿಯಾಗಿ ಆಚರಿಸಲು ನಿನ್ನೆ ನಡೆದ ಸಭೆಯಲ್ಲಿ ನಿರ್ಧರಿಸಲಾಗಿದೆ. ಗಜಪಯಣ ಸೇರಿದಂತೆ ಎಲ್ಲ ಕಾರ್ಯಕ್ರಮಗಳನ್ನೂ ಅದ್ದೂರಿಯಾಗಿ ಆಚರಿಸುತ್ತೇವೆ. ಈ ಬಾರಿ ಹೊಸ ಆಕರ್ಷಣೆ ತರಲು ಪ್ರಯತ್ನಿಸಲಾಗುವುದು ಎಂದರು.
ದಸರಾ ಮಹೋತ್ಸವವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರ ಮಾಡಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುವಂತೆ ಮಾಡಲಾಗುವುದು. ದಸರಾ ಉದ್ಘಾಟಕರ ಆಯ್ಕೆ ಅಧಿಕಾರವನ್ನು ನನಗೆ ನೀಡಲಾಗಿದ್ದು, ಎಲ್ಲರ ಅಭಿಪ್ರಾಯ ಪಡೆದು ಸೂಕ್ತ ವ್ಯಕ್ತಿಯನ್ನು ಆಯ್ಕೆ ಮಾಡುತ್ತೇವೆ. ಇನ್ನೊಂದು ವಾರದಲ್ಲಿ ಮೈಸೂರು ಟೂರಿಸಂ ಸರ್ಕ್ಯೂಟ್ ಘೋಷಣೆ ಮಾಡಲಾಗುವುದು.
ದಸರಾ ಪ್ರಾಧಿಕಾರ ರಚನೆ ಬಗ್ಗೆ ಮುಂದಿನ ದಿನಗಳಲ್ಲಿ ತೀರ್ಮಾನ ಕೈಗೊಳ್ಳುತ್ತೇವೆ ಎಂದರು.