ದಿಡಗ ಸೊಸೈಟಿಗೆ ಶಿವಶಂಕರ್ ಅಧ್ಯಕ್ಷ

13 CRP 01
Published on

ಚನ್ನರಾಯಪಟ್ಟಣ: ತಾಲೂಕಿನ ದಿಡಗ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಹೊಸಹಳ್ಳಿಪುರ ಗ್ರಾಮದ ಪಿ.ಕೆ. ಶಿವಶಂಕರ್ ಮಂಗಳವಾರ ಅವಿರೋಧವಾಗಿ ಆಯ್ಕೆಯಾದರು.


ಎಚ್.ಕೆ.ಯೋಗೇಶ್ ನೀಡಿದ ರಾಜಿನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಮಂಗಳವಾರ ಚುನಾವಣೆ ಪ್ರಕ್ರಿಯೆ ನಡೆಯಿತು. ಪಿ.ಕೆ.ಶಿವಶಂಕರ್ ಹೊರತುಪಡಿಸಿ ಬೇರಾರು ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಅವರನ್ನೇ ಅವಿರೋಧವಾಗಿ ಆಯ್ಕೆ ಮಾಡಲಾಯಿತು.


ಸಂಘವು ನಾಮಿನಿ ಸೇರಿದಂತೆ 13 ನಿರ್ದೇಶಕರ ಬಲ ಹೊಂದಿದ್ದು, 10 ಮಂದಿ ಚುನಾವಣೆ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದರು. ಸಹಕಾರಿ ಅಭಿವೃದ್ಧಿ ಅಧಿಕಾರಿ ದೇವರಾಜ್ ಚುನಾವಣಾ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು.

ಅಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾದ ಪಿ.ಕೆ. ಶಿವಶಂಕರ್ ಅವರನ್ನು ಪ್ರಮುಖ ನಾಯಕರು, ಕಾರ್ಯಕರ್ತರು, ಅಭಿಮಾನಿಗಳು ಹಾಗೂ ವಿವಿಧ ಕ್ಷೇತ್ರಗಳ ಗಣ್ಯರು ಅಭಿನಂದಿಸಿದರು. ಸಿಹಿ ಹಂಚಿ ಸಂಭ್ರಮಿಸಿದರು.


ನೂತನ ಅಧ್ಯಕ್ಷ ಪಿ.ಕೆ. ಶಿವಶಂಕರ್ ಮಾತನಾಡಿ, ಶಾಸಕ ಸಿ.ಎನ್. ಬಾಲಕೃಷ್ಣ ಅವರ ಮಾರ್ಗದರ್ಶನದಲ್ಲಿ ಸಂಘದ ನಿರ್ದೇಶಕರ ಸಹಕಾರದೊಂದಿಗೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ಷೇರುದಾರ ಸದಸ್ಯರಿಗೆ ಹೆಚ್ಚಿನ ಅನುಕೂಲಗಳನ್ನು ಕಲ್ಪಿಸಲಾಗುವುದು ಎಂದರು.


ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಚ್.ಜಿ. ರಾಮಕೃಷ್ಣ, ತಾಲೂಕು ಪಂಚಾಯಿತಿ ಮಾಜಿ ಸದಸ್ಯರಾದ ಎಂ.ಆರ್. ವಾಸು, ಪುಟ್ಟರಾಜು, ಎಪಿಎಂಸಿ ಮಾಜಿ ಅಧ್ಯಕ್ಷ ರಘುರಾಮ್, ಗ್ರಾಪಂ ಮಾಜಿ ಸದಸ್ಯ ಕೆ.ಚಂದ್ರು, ಸಂಘದ ಉಪಾಧ್ಯಕ್ಷ ಮಂಜು ನಾಯಕ್, ಮಾಜಿ ಅಧ್ಯಕ್ಷರಾದ ಎಚ್.ಕೆ. ಯೋಗೇಶ್, ಎಸ್. ಕುಮಾರ್, ಶ್ರೀಕಂಠಪ್ಪ, ನಿಂಗೇಗೌಡ, ಎನ್.ಎನ್. ನಾಗರಾಜ್, ನಿರ್ದೇಶಕರು, ಕಾರ್ಯದರ್ಶಿ ನಿಂಗಮ್ಮ, ಸಿಬ್ಬಂದಿ ವರ್ಗ ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net