

ಚಿತ್ರದುರ್ಗ: ಚಿತ್ರದುರ್ಗದ ಸಂಸದ ಎ.ನಾರಾಯಣಸ್ವಾಮಿ ಕೇಂದ್ರ ಸಚಿವರಾಗಿದ್ದರೂ, ಜಿಲ್ಲೆಯಲ್ಲಿ ಉದ್ಯಮ, ಕೈಗಾರಿಕೆ ಸ್ಥಾಪನೆಗೆ ಒತ್ತು ನೀಡುತ್ತಿಲ್ಲ. ಪ್ರಗತಿಯ ಕುರಿತು ಕಾಳಜಿ ವಹಿಸುತ್ತಿಲ್ಲ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ರಾಮಪ್ಪ ಆರೋಪಿಸಿದರು.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರದಿಂದ ನಯಾ ಪೈಸೆ ಬಿಡುಗಡೆಯಾಗಿಲ್ಲ. ಇನ್ನೂ ಸಾಮಾಜಿಕ ಸಾಂಸ್ಥಿಕ ಹೊಣೆಗಾರಿಕೆ ನಿಧಿ ತರುವಲ್ಲೂ ಸಚಿವರು ವಿಫಲರಾಗಿದ್ದಾರೆ ಎಂದು ದೂರಿದರು.
ದಾವಣಗೆರೆ-ಚಿತ್ರದುರ್ಗ-ತುಮಕೂರು ನೇರ ರೈಲು ಮಾರ್ಗ ಇನ್ನೂ ಕಾರ್ಯರೂಪಕ್ಕೆ ಬಂದಿಲ್ಲ. ಹಿರಿಯೂರು, ಚಿತ್ರದುರ್ಗ ಮಧ್ಯೆ ಕೆಲ ಭಾಗದ ಭೂಸ್ವಾಧೀನ ಪ್ರಕ್ರಿಯೆ ಮಾತ್ರ ಬಾಕಿ ಇದೆ. ಆದರೆ, ಬಿಜೆಪಿ ನಾಯಕರು ಆಸಕ್ತಿ ತೋರುತ್ತಿಲ್ಲ. ಅನುಷ್ಠಾನಗೊಂಡರೆ ಮೂರು ಜಿಲ್ಲೆಯ ಜನರಿಗೆ ಅನುಕೂಲವಾಗಲಿದೆ ಎಂದರು.
ರಾಜ್ಯದಲ್ಲಿ ವಿದ್ಯುತ್ ಅಭಾವ ತಪ್ಪಿಸಲು ಪಾವಗಡ ತಾಲೂಕು ವ್ಯಾಪ್ತಿಯಲ್ಲಿ 2 ಸಾವಿರ ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದೆ. ಇಂಧನ ಸಚಿವರು ಕಲ್ಲಿದ್ದಲು ತರಲು ದೆಹಲಿಯತ್ತ ಹೆಚ್ಚು ಗಮನ ಹರಿಸಿದ್ದಾರೆ. ಇನ್ನೂ ಅಧಿಕ ಕಡೆಗಳಲ್ಲಿ ಸೌರ ವಿದ್ಯುತ್ ಉತ್ಪಾದನೆಗೂ ರಾಜ್ಯ ಸರ್ಕಾರ ಮುಂದಾಗಿದೆ ಎಂದು ತಿಳಿಸಿದರು.
ಪಕ್ಷದ ಜಿಲ್ಲಾಧ್ಯಕ್ಷ ಎಂ.ಕೆ.ತಾಜ್‌ಪೀರ್, ಮುಖಂಡರಾದ ಕೆ.ಪಿ.ಸಂಪತ್‌ಕುಮಾರ್, ಡಿ.ಎನ್.ಮೈಲಾರಪ್ಪ, ತಿಪ್ಪೇಸ್ವಾಮಿ, ಮುದಸಿರ್ ನವಾಜ್, ಸುಧಾ ಇದ್ದರು.