ದೇವನಹಳ್ಳಿಯಲ್ಲಿ ತಾಯಿ, ಮಕ್ಕಳ ಆಸ್ಪತ್ರೆ ಉದ್ಘಾಟನೆ, ಪಿ.ಎಂ.ಕೇರ್ ಯೋಜನೆಯಡಿ ನಿರ್ಮಾಣ, ಸಚಿವ ಎಟಿಬಿ ನಾಗರಾಜು ಭಾಗಿ

mtb
Published on

ಬೆಂಗಳೂರು ಗ್ರಾಮಾಂತರ: ಕರೊನಾ ಸೋಂಕು ನಿಯಂತ್ರಣದಲ್ಲಿದ್ದು, ಸಾರ್ವಜನಿಕರು ನಿರ್ಲಕ್ಷ್ಯ ವಹಿಸದೆ, ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಮೂಲಕ ಸಮರ್ಪಕ ನಿರ್ವಹಣೆಗೆ ಸರ್ಕಾರದೊಂದಿಗೆ ಸಹಕರಿಸಬೇಕು ಎಂದು ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆ ಸಚಿವ ಎಂಟಿಬಿ ನಾಗರಾಜು ತಿಳಿಸಿದರು.

ದೇವನಹಳ್ಳಿ ತಾಲೂಕಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಜಿಲ್ಲಾಡಳಿತ, ಜಿಪಂ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ಪಿ.ಎಂ.ಕೇರ್ ಯೋಜನೆಯಡಿ ನಿರ್ಮಿಸಿರುವ ಪಿಎಸ್‌ಎ (ಆಕ್ಸಿಜನ್) ಘಟಕ ಹಾಗೂ ತಾಯಿ ಮತ್ತು ಮಕ್ಕಳ 100 ಹಾಸಿಗೆಗಳ ಆಸ್ಪತ್ರೆಯನ್ನು ಗುರುವಾರ ಉದ್ಘಾಟಿಸಿ ಮಾತನಾಡಿದರು.

ಕೋವಿಡ್ ಎರಡನೇ ಅಲೆಯಲ್ಲಿ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಮತ್ತು ಹಾಸಿಗೆಗಳ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಎಲ್ಲ ಜಿಲ್ಲೆಗಳಲ್ಲಿಯೂ ಆಕ್ಸಿಜನ್ ಘಟಕ ನಿರ್ಮಿಸುವ ಉದ್ದೇಶದಿಂದ ಪಿಎಂ ಕೇರ್ ಯೋಜನೆಯಡಿ ಹಣ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.

ಇದುವರೆಗೂ ದೇಶದಲ್ಲಿ 80 ಕೋಟಿ ಲಸಿಕೆ ವಿತರಣೆಯಾಗಿದ್ದು, ಜಿಲ್ಲೆಯಲ್ಲಿ ಪ್ರತಿನಿತ್ಯ 6 ರಿಂದ 7 ಸಾವಿರ ಲಸಿಕೆ ನೀಡಲಾಗುತ್ತಿದೆ ಎಂದರು.

ಕೋವಿಡ್-19ನಿಂದ ಮೃತಪಟ್ಟ ಬಿಪಿಎಲ್ ಕುಟುಂಬಗಳ ಸದಸ್ಯರಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 1 ಲಕ್ಷ ಹಾಗೂ ಕೇಂದ್ರ ಸರ್ಕಾರದಿಂದ 50 ಸಾವಿರ ರೂ. ಪರಿಹಾರ ನೀಡಲಾಗುವುದು. ಜಿಲ್ಲಾ ಮತ್ತು ತಾಲೂಕು ಆರೋಗ್ಯಾಧಿಕಾರಿ ಕೋವಿಡ್‌ನಿಂದ ಮರಣ ಹೊಂದಿದವರ ಮಾಹಿತಿ ಸಂಗ್ರಹಿಸಬೇಕು ಎಂದು ತಿಳಿಸಿದರು.

ಶಾಸಕ ನಿಸರ್ಗ ನಾರಾಯಣಸ್ವಾಮಿ ಮಾತನಾಡಿ, ದೇವನಹಳ್ಳಿ ಮತ್ತು ವಿಜಯಪುರ ರಸ್ತೆಗಳು ಹದಗೆಟ್ಟಿದ್ದು, ಅವುಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕು. ತಾಲೂಕು ಆಸ್ಪತ್ರೆ ಶಿಥಿಲಗೊಂಡಿದ್ದು, 500 ಹಾಸಿಗೆಗಳ ಸುಸಜ್ಜಿತ ಆಸ್ಪತ್ರೆ ನಿರ್ಮಿಸಲು ಅನುವು ಮಾಡಿಕೊಡಬೇಕು ಎಂದರು.

ದೇವನಹಳ್ಳಿ ಪುರಸಭೆ ಅಧ್ಯಕ್ಷೆ ರೇಖಾ ವೇಣುಗೋಪಾಲ್, ಉಪಾಧ್ಯಕ್ಷೆ ಪುಷ್ಪಲತಾ, ಉಪವಿಭಾಗಾಧಿಕಾರಿ ಅರುಳ್ ಕುಮಾರ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ತಿಪ್ಪೇಸ್ವಾಮಿ, ಜಿಲ್ಲಾ ಕುಟುಂಬ ಕಲ್ಯಾಣ್ಯಾಧಿಕಾರಿ ಡಾ.ಎ.ಶ್ರೀನಿವಾಸ್, ದೇವನಹಳ್ಳಿ ತಾಲೂಕು ಆರೋಗ್ಯಾಧಿಕಾರಿ ಡಾ.ಸಂಜಯ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಜಯಲಕ್ಷ್ಮೀ, ಡಿವೈಎಸ್‌ಪಿ ಉಮಾಶಂಕರ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net