ದೇವಾಡಿಗ ಸಮಾಜವನ್ನು ಮುಖ್ಯವಾಹಿನಿಗೆ ತರುವ ಸಂಕಲ್ಪಕ್ಕೆ ಕೈಜೋಡಿಸಿ

SGGGGGGR WEBB
Published on

ಸಾಗರ: ಆರ್ಥಿಕವಾಗಿ, ಶೈಕ್ಷಣಿಕವಾಗಿ ಸಮಾಜವನ್ನು ಮುಖ್ಯವಾಹಿನಿಗೆ ತೆಗೆದುಕೊಂಡು ಹೋಗುವ ಸಂಕಲ್ಪಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಜಿಲ್ಲಾ ದೇವಾಡಿಗರ ಸಂಘದ ಗೌರವಾಧ್ಯಕ್ಷ ರಘುರಾಮ ದೇವಾಡಿಗ ಹೇಳಿದರು.

ತಾಲೂಕಿನ ಶಿರವಂತೆಯ ತ್ರಿಪುರಾಂತಕೇಶ್ವರ ಸಭಾಭವನದಲ್ಲಿ ಸೋಮವಾರ ಶಿವಮೊಗ್ಗ ಜಿಲ್ಲಾ ದೇವಾಡಿಗರ ಸಂಘದ ವಾರ್ಷಿಕ ಮಹಾಸಭೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸಮಾಜ ನಮಗೇನು ಕೊಟ್ಟಿದೆ ಎನ್ನ್ನುವುದಕ್ಕಿಂತ ಸಮಾಜಕ್ಕೆ ನಮ್ಮ ಕೊಡುಗೆ ಏನು ಎನ್ನುವುದನ್ನು ನಾವು ಪ್ರಶ್ನಿಸಿಕೊಳ್ಳಬೇಕು. ದೇವಾಡಿಗ ಸಮಾಜ ಜಿಲ್ಲೆಯಲ್ಲಿ ಸಂಘಟನಾತ್ಮಕವಾಗಿ ಗಟ್ಟಿಗೊಳ್ಳುತ್ತಿದ್ದು, ಎಲ್ಲರೂ ಸಹಕಾರ ನೀಡುತ್ತಿದ್ದಾರೆ. ಜನಾಂಗದ ಪ್ರತಿಭಾವಂತ ಮಕ್ಕಳನ್ನು ಪುರಸ್ಕರಿಸುವ ಮೂಲಕ ಇನ್ನಷ್ಟು ಮಕ್ಕಳು ಸಾಧನೆ ಪಥದಲ್ಲಿ ಸಾಗಲು ಅವಕಾಶ ಕಲ್ಪಿಸಲಾಗುತ್ತಿದೆ ಎಂದರು.

ಸಂಘದ ಹಿರಿಯ ಉಪಾಧ್ಯಕ್ಷ ರಾಜು ದೇವಾಡಿಗ ಮಾತನಾಡಿ, ಜಿಲ್ಲೆಯ ಎಲ್ಲ ತಾಲೂಕುಗಳಲ್ಲೂ ದೇವಾಡಿಗ ಸಮಾಜ ಬಾಂಧವರಿದ್ದಾರೆ. ಶ್ರಮಿಕ ವರ್ಗಕ್ಕೆ ಸೇರಿರುವ ದೇವಾಡಿಗ ಬಂಧುಗಳನ್ನು ಸಂಘಟಿಸುವ ನಿಟ್ಟಿನಲ್ಲಿ ಪ್ರಯತ್ನ ನಡೆಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಗ್ರಾಮಾಂತರ ಪ್ರದೇಶಗಳಲ್ಲಿರುವ ಸಮಾಜ ಬಾಂಧವರನ್ನು ಸೇರಿಸಿ ಬೃಹತ್ ಕಾರ್ಯಕ್ರಮ ಮಾಡುವ ಉದ್ದೇಶ ಹೊಂದಲಾಗಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net