ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ದೊಡ್ಡದು

22
Published on

ಮೈಸೂರು: ದೇಶದ ಅಭಿವೃದ್ಧಿಗೆ ಶಿಕ್ಷಕರ ಪಾತ್ರ ಮಹತ್ವವಾಗಿದ್ದು, ಶಿಕ್ಷಕರು ಮಕ್ಕಳಿಗೆ ತಮ್ಮಲ್ಲಿರುವ ವಿದ್ಯೆಯನ್ನು ಧಾರೆ ಎರೆಯಬೇಕು ಎಂದು ಪರಿಶಿಷ್ಟ ವರ್ಗಗಳ ಕಲ್ಯಾಣಿ ಇಲಾಖೆಯ ತಾಲೂಕು ಕಲ್ಯಾಣಾಧಿಕಾರಿ ಎಚ್.ಸಿ. ಬಸವರಾಜು ಸಲಹೆ ನೀಡಿದರು.
ಹುಣಸೂರು ತಾಲೂಕಿನ ನೆಲ್ಲೂರುಪಾಲ ಆಶ್ರಮ ಶಾಲೆಯಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.
ನನಗೆ ಶಿಕ್ಷಕನಾಗಬೇಕೆಂಬ ಆಸೆ ಇತ್ತು. ಆದರೆ ಶಿಕ್ಷಕನಾಗದಿದ್ದರೂ ಶಿಕ್ಷಕರೊಡನೆ ಕೆಲಸ ಮಾಡುವ ಭಾಗ್ಯ ಸಿಕ್ಕಿದೆ. ಮಾಡುವ ಕೆಲಸದಲ್ಲಿ ತೃಪ್ತಿ ಇದೆ. ಬುಡಕಟ್ಟು ಜನರ ಮಕ್ಕಳಿಗೆ ಶಿಕ್ಷಣ ನೀಡಿ ಅವರನ್ನು ವಿದ್ಯಾವಂತರನ್ನಾಗಿ ಮಾಡಿ ಮುಖ್ಯವಾಹಿನಿಗೆ ತರುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬ ಶಿಕ್ಷಕರು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಿ ಉತ್ತಮ ನಾಗರಿಕರನ್ನಾಗಿ ಮಾಡಿ ಸ್ವಾವಲಂಬಿಗಳಾಗಲು ಶ್ರಮಿಸಬೇಕು ಎಂದರು.
ಆಶ್ರಮ ಶಾಲೆಗಳಲ್ಲಿ ಕೆಲಸ ಮಾಡುವವರಲ್ಲಿ ಸಮಸ್ಯೆಗಳಲ್ಲಿದ್ದು, ಈ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರದ ಗಮನಕ್ಕೆ ತರಲಾಗುವುದು. ಪ್ರತಿಯೊಬ್ಬರಿಗೂ ಒಂದಲ್ಲಾ ಒಂದು ದಿನ ಒಳ್ಳೆ ದಿನಗಳು ಬರುತ್ತವೆ. ಅಲ್ಲಿಯವರೆಗೆ ಸಹನೆಯಿಂದ ಇದ್ದು ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಪ್ರತಿಯೊಬ್ಬರು ಸೇವಾಮನೋಭಾವನೆಯಿಂದ ಕೆಲಸ ಮಾಡಬೇಕು ಎಂದರು.
ಮುಖ್ಯಶಿಕ್ಷಕ ಎಚ್.ಎಸ್.ಚೇತನ್‌ಕುಮಾರ್, ಶಿಕ್ಷಕರಾದ ಮೋಹನ್, ಸಿ.ಲಕ್ಷ್ಮಣ್, ಶಿವಕುಮಾರ್, ಸಣ್ಣಯ್ಯ, ರಾಧಿಕಾ, ಕಚೇರಿ ಅಧೀಕ್ಷಕಿ ಪುಷ್ಪಾ ಚಂದ್ರಕಲಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net