

ಮೈಸೂರು: ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷಿ ಗೃಹಲಕ್ಷ್ಮೀ ಯೋಜನೆಯ ಉದ್ಘಾಟನೆ ಕಾರ್ಯಕ್ರಮವನ್ನು ದೇಶವೇ ತಿರುಗಿ ನೋಡುವಂತೆ ಯಶಸ್ವಿಗೊಳಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರ್ಯಕರ್ತರಿಗೆ ಸಲಹೆ ನೀಡಿದರು.
ನಗರದ ಕಾಂಗ್ರೆಸ್ ಕಚೇರಿ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿ, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದ ಪಕ್ಷವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಮಹತ್ವದ ಹೆಜ್ಜೆ ಇಟ್ಟಿದೆ. ಕೊಟ್ಟ ಮಾತಿನಂತೆ 5 ಗ್ಯಾರಂಟಿಗಳನ್ನು ಜಾರಿಗೊಳಿಸುತ್ತಿದ್ದು, ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಗೊಳಿಸಬೇಕು ಎಂದು ಹೇಳಿದರು.
ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರದಲ್ಲಿ ಮಹಿಳೆಯರಿಗೆ ಆರ್ಥಿಕ ಸ್ವಾತಂತ್ರ್ಯ ಬಂದಿದ್ದು, ಆ.30 ರಂದು ಗೃಹಲಕ್ಷ್ಮೀ ಯೋಜನೆ ಅಡಿ ಖಾತೆಗೆ ನೇರ ಹಣ ಹಾಕಲಾಗುವುದು. ಇದು ದೇಶದಲ್ಲಿಯೇ ಮಹತ್ವದ ಕಾರ್ಯಕ್ರಮವಾಗಿದೆ. ಆದ್ದರಿಂದ ಪಕ್ಷ ಅಧಿಕಾರಕ್ಕೆ ಬರಲು ಶ್ರಮಿಸಿರುವ ಕಾರ್ಯಕರ್ತರು, ಈ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.
ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಮಾತನಾಡಿ, ಇದು ಸಂಪೂರ್ಣ ಸರ್ಕಾರಿ ಕಾರ್ಯಕ್ರಮವಾಗಿದ್ದು, ಇದರ ಜವಾಬ್ದಾರಿಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ವಹಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಒಂದು ಲಕ್ಷಕ್ಕೂ ಅಧಿಕ ಜನ ಸೇರಲಿದ್ದು, ಪ್ರತಿ ಗ್ರಾಮ ಪಂಚಾಯಿತಿಗೆ 3 ಬಸ್‌ಗಳಂತೆ ಸರ್ಕಾರ 2 ಸಾವಿರ ಬಸ್‌ಗಳನ್ನು ನೀಡುತ್ತಿದೆ ಎಂದರು.
ಅಂಗನವಾಡಿ ಕಾರ್ಯಕರ್ತರ ಜತೆ ಪಕ್ಷದ ಕಾರ್ಯಕರ್ತರು ಸೇರಿಕೊಂಡು ಮಹಿಳೆಯರನ್ನು ಕಾರ್ಯಕ್ರಮಕ್ಕೆ ಕರೆದುಕೊಂಡು ಬರಬೇಕು. ಸಮಾರಂಭಕ್ಕೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಮಂತ್ರಿಗಳು, ಶಾಸಕರು ಭಾಗವಹಿಸಲಿದ್ದಾರೆ. ಆದ್ದರಿಂದ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.
ಕೆಪಿಸಿಸಿ ಸದಸ್ಯ ಕೆ. ಮರೀಗೌಡ ಮಾತನಾಡಿ, ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ಆಧಾರ ಸ್ಥಂಭವಾಗಿದ್ದು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರಾಜ್ಯದ ಆರೂವರೆ ಕೋಟಿ ಜನರು ನೆಮ್ಮದಿಯಾಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಜನತೆಗೆ ಮಾತು ಕೊಟ್ಟಂತೆ 5 ಗ್ಯಾರಂಟಿಗಳನ್ನು ಜಾರಿಗೊಳಿಸುತ್ತಿದ್ದಾರೆ. ಇದರಿಂದ ರಾಜ್ಯದ ಬಡವರು ನೆಮ್ಮದಿಯಿಂದ ಬದುಕುತ್ತಿದ್ದಾರೆ ಎಂದರು.
ಕಾಂಗ್ರೆಸ್ ರಾಜ್ಯ ಮಹಿಳಾ ಅಧ್ಯಕ್ಷೆ ಪುಷ್ಪಾಅಮರನಾಥ್, ಶಾಸಕ ಹರೀಶ್‌ಗೌಡ, ಮಾಜಿ ಶಾಸಕ ಎಂ.ಕೆ. ಸೋಮಶೇಖರ್, ನಗರಾಧ್ಯಕ್ಷ ಆರ್. ಮೂರ್ತಿ, ಜಿಲ್ಲಾಧ್ಯಕ್ಷ ಡಾ. ಬಿ.ಜೆ. ವಿಜಯಕುಮಾರ್, ಮುಖಂಡರಾದ ಎಚ್.ಎ. ವೆಂಕಟೇಶ್, ರೋಜಿಖಾನ್, ಶಿವಣ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ. ಗುರುಸ್ವಾಮಿ, ಜೆ. ಸತೀಶ್‌ಕುಮಾರ್, ಕೋಟೆಹುಂಡಿ ಮಹಾದೇವ, ಕೃಷ್ಣಕುಮಾರ್ ಸಾಗರ್, ಹಂಚ್ಯಾ ಸಣ್ಣಸ್ವಾಮಿ, ಕರೀಗೌಡ, ಮಾರ್ಬಳ್ಳಿ ಕುಮಾರ್, ಉದ್ಬೂರು ಕೃಷ್ಣ, ಪುಷ್ಪಲತಾ ಚಿಕ್ಕಣ್ಣ, ಲತಾ ಸಿದ್ದಶೆಟ್ಟಿ, ಮೋದಾಮಣಿ, ನಾಡನಹಳ್ಳಿ ರವಿ, ಹೊಸಹುಂಡಿ ರಘು, ಹುಣಸೂರು ಬಸವಣ್ಣ, ಮಂಜುಳಾ ಮಂಜುನಾಥ್, ಹೊನ್ನಪ್ಪ, ಮಂಜುಳಾ, ಛಾಯಾ, ಕಮಲಾ ಇತರರು ಇದ್ದರು.