

ಮೈಸೂರು: ನಗರದ ದಸರಾ ವಸ್ತು ಪ್ರದರ್ಶನ ಆವರಣದಲ್ಲಿ ಫೆ.21 ರಂದು ಬೆಳಗ್ಗೆ 9 ರಿಂದ ಸಂಜೆ 4ರವರೆಗೆ ದೊಡ್ಡಕೆರೆ ಮೈದಾನದಲ್ಲಿ ಕೌಶಲ್ಯ ತರಬೇತಿ, ಉದ್ಯೋಗ ಮಾಹಿತಿ ಹಾಗೂ ನೇಮಕಾತಿ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಎಸ್.ಎ. ರಾಮದಾಸ್ ತಿಳಿಸಿದ್ದಾರೆ.
ಜಿಲ್ಲಾಡಳಿತ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಸಂಯುಕ್ತಾಶ್ರಯದಲ್ಲಿ ಮೇಳ ಹಮ್ಮಿಕೊಳ್ಳಲಾಗಿದೆ. ಮೇಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಚಾಲನೆ ನೀಡುವರು. ಸಂಸದ ಪ್ರತಾಪ್ ಸಿಂಹ, ಮೇಯರ್ ಶಿವಕುಮಾರ್, ಉಪ ಮೇಯರ್ ಡಾ.ಜಿ. ರೂಪಾ ಹಾಗೂ ಇತರರು ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಮೇಳದಲ್ಲಿ 150ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗವಹಿಸಲಿವೆ. ಕನಿಷ್ಠ ವಿದ್ಯಾರ್ಹತೆ ಎಸ್‌ಎಸ್‌ಎಲ್‌ಸಿಯಿಂದ ಪ್ರಾರಂಭವಾಗಿ ಡಿಪ್ಲೊಮಾ, ಬಿಇ, ಎಂಬಿಎ, ಎಂಟೆಕ್ ಸೇರಿದಂತೆ ಎಲ್ಲ ಬಗೆಯ ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದವರು ಮೇಳದಲ್ಲಿ ಪಾಲ್ಗೊಳ್ಳಬಹುದು. ಅಂಗವಿಕಲರೂ ಮೇಳದಲ್ಲಿ ಪಾಲ್ಗೊಳ್ಳಬಹುದು. ಮಾಹಿತಿಗೆ ದೂ: 0821-2970815 ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.