

ಮೈಸೂರು: ಜಿಲ್ಲೆಯಲ್ಲಿ ಮಾರ್ಚ್ 1ರಿಂದ 20ರ ವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಸುಸೂತ್ರವಾಗಿ ಹಾಗೂ ವ್ಯವಸ್ಥಿತವಾಗಿ ಜರುಗಿಸುವಂತೆ ನೋಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಅವರು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಆಯೋಜಿಸಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಸಂಬಂಧ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಜಿಲ್ಲೆಯಲ್ಲಿ 50 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲ್ಲಿದ್ದು, ಮೈಸೂರು ನಗರದಲ್ಲಿ 27 ಪರೀಕ್ಷಾ ಕೇಂದ್ರಗಳು ಹಾಗೂ ಗ್ರಾಮಾಂತರ ವ್ಯಾಪ್ತಿಯಲ್ಲಿ 23 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳನ್ನು ತೆರೆಯಲಾಗಿದೆ ಎಂದು ತಿಳಿಸಿದರು.
ಪರೀಕ್ಷೆ ಕೇಂದ್ರಗಳಿಗೆ ಪ್ರಶ್ನೆ ಪತ್ರಿಕೆಗಳನ್ನು ತಲುಪಿಸಲು ಮಾರ್ಗಾಧಿಕಾರಿಗಳು ನೇಮಕ ಮಾಡಲಾಗಿದ್ದು, ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳಿಗೆ ನಿರಂತರ ವಿದ್ಯುತ್ ಸರಬರಾಜು ಮಾಡಲು ಸೆಸ್ಕ್ ಅಗತ್ಯ ಕ್ರಮ ವಹಿಸಬೇಕು ಎಂದರು.
ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಲಾಗಿದ್ದು, ಪರೀಕ್ಷೆ ಕೇಂದ್ರಗಳ ಸುತ್ತ ಸ್ವಚ್ಛತೆಯನ್ನು ಕಾಪಾಡಲು ಸಂಬಂಧಪಟ್ಟ ಪರೀಕ್ಷಾ ಕೇಂದ್ರದ ಮುಖ್ಯಸ್ಥರಿಗೆ ಹಾಗೂ ಸ್ಥಳೀಯ ಸಂಸ್ಥೆಗಳಿಗೆ ನಿರ್ದೇಶನವನ್ನು ನೀಡಿದರು. ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮರಿಸ್ವಾಮಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.