

ಹಾಸನ: ಆರೋಗ್ಯಕರ ಸಮಾಜ ನಿರ್ಮಾಣಕ್ಕಾಗಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘಗಳು ಹಮಿಕೊಳ್ಳುವ ಯೋಜನೆಗಳು ಇತರರಿಗೆ ಮಾದರಿಯಾಗಿದೆ ಎಂದು ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಜಿಲ್ಲಾ ಕಾರ್ಯದರ್ಶಿ ಸುರೇಶ್ ಗುರೂಜಿ ಅವರು ಅಭಿಪ್ರಾಯಪಟ್ಟರು.
ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವತಿಯಿಂದ ನಗರದ ಖಾಸಗಿ ಕಲ್ಯಾಣ ಮಂಟಪದಲ್ಲಿ ಬುಧವಾರ ಆಯೋಜಿಸಿದ್ದ ತಾಲೂಕು ಮಟ್ಟದ ಒಕ್ಕೂಟ ಪದಾಧಿಕಾರಿಗಳ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಸಾಮಾಜಿಕ ಕಳಕಳಿ ಜೊತೆಗೆ ಆರ್ಥಿಕವಾಗಿ ಗ್ರಾಮೀಣ ಜನರನ್ನು ಸದೃಢರನ್ನಾಗಿಸಬೇಕೆಂಬ ನಿಟ್ಟಿನಲ್ಲಿ ಕೈಗೊಳ್ಳುವ ಕಾರ್ಯಗಳು ಸ್ತುತ್ಯಾರ್ಹ. ಇದು ದೇಶಕ್ಕೆ ಮಾದರಿಯಾಗಿದೆ ಎಂದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಯೋಜನಾ ನಿರ್ದೇಶಕಿ ಮಮತಾ ಹರೀಶ್ ರಾವ್ ಅವರು ಮಾತನಾಡಿ, ಸ್ವ ಸಹಾಯ ಗುಂಪುಗಳನ್ನು ರಚಿಸಿ ಸಾರ್ವಜನಿಕರಿಗೆ ಆರ್ಥಿಕವಾಗಿ ನೆರವಾಗುವ ಕೆಲಸ ಮಾಡಲಾಗುತ್ತಿದೆ. ಕಡು ಬಡವರನ್ನು ಗುರುತಿಸಿ ಅವರಿಗೆ ನೆಮದಿಯ ಜೀವನ ಸಾಗಿಸಲು ಅಗತ್ಯ ಇರುವ ಎಲ್ಲಾ ರೀತಿಯ ಸೌಲಭ್ಯ ನೀಡಲು ಮುಂದಾಗಿದೆ. ಆರಂಭದಲ್ಲಿ ದಕ್ಷಿಣ ಕನ್ನಡ ಹಾಗು ಉಡುಪಿ ಜಿಲ್ಲೆಗೆ ಸೀಮಿತವಾಗಿದ್ದ ಯೋಜನೆ ರಾಜ್ಯಾದ್ಯಂತ ವಿಸ್ತರಿಸಿದೆ ಎಂದರು.
ವಕೀಲರ ಸಂಘದ ಮಾಜಿ ಅಧ್ಯಕ್ಷ ಜೆ.ಪಿ.ಶೇಖರ್ ಅವರು ಮಾತನಾಡಿ, ರಾಜಕೀಯ ಹೊರತುಪಡಿಸಿ ಎಲ್ಲಾ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿರುವ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ರಾಜ್ಯದ ಕೋಟ್ಯಂತರ ಜನರ ಬಾಳಿಗೆ ಬೆಳಕಾಗಿದೆ. ಯಾವ ಪ್ರತಿಫಲಾಪೇಕ್ಷೆ ಇಲ್ಲದೆ ಪ್ರತಿಯೊಬ್ಬರಿಗು ಸ್ವಾವಲಂಬಿ ಬದುಕು ಕಟ್ಟಿಕೊಡಬೇಕೆಂದು ಧರ್ಮಾಧಿಕಾರಿ ಡಾ. ವಿರೇಂದ್ರ ಹೆಗ್ಗಡೆ ಅವರ ದೂರದೃಷ್ಟಿಗೆ ಮೆಚ್ಚುಗೆ ಸೂಚಿಸಲೇಬೇಕೆಂದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಪದಾಧಿಕಾರಿಗಳಾದ ದಿನೇಶ್, ಧರಣೇಂದ್ರ ಕುಮಾರ್, ಜನಜಾಗೃತಿ ವೇದಿಕೆಯ ಶ್ರೇಯಸ್ ಜೈನ್, ಯೋಜನಾಧಿಕಾರಿ ಶಾರಿಕಾ, ರಾಮಣ್ಣ ಗೌಡ, ಕೃಷಿ ಅಧಿಕಾರಿ ಚಂದ್ರಪ್ರಭ, ಬಬಿತಾ ಇತರರು ಇದ್ದರು.