ಧರ್ಮಸ್ಥಳ ಚಲೋ ರ‌್ಯಾಲಿಗೆ ಸಾವಿರ ಕಾರ್ಯಕರ್ತರು ಭಾಗಿ

30rajesh1
Published on

ಚಾಮರಾಜನಗರ: ಶ್ರೀಕ್ಷೇತ್ರ ಧರ್ಮಸ್ಥಳದ ಮೇಲೆ ನಡೆದಿರುವ ಅಪಪ್ರಚಾರ, ಪಿತೂರಿ ಖಂಡಿಸಿ ಸೆ. 1 ರಂದು ನಡೆಯಲಿರುವ ಧರ್ಮಸ್ಥಳ ಚಲೋ ಕಾರ್ಯಕ್ರಮಕ್ಕೆ ಜಿಲ್ಲೆಯಿಂದ ಒಂದು ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಹಾಗೂ ಮುಖಂಡರು ತೆರಳಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಎಸ್.ನಿರಂಜನ್‌ಕುಮಾರ್ ತಿಳಿಸಿದರು.

ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಆಯೋಜಿಸಿದ್ದ ಪಕ್ಷದ ಪ್ರಮುಖ ಪದಾಧಿಕಾರಿಗಳ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಹಿಂದುಗಳ ಪವಿತ್ರ ಕ್ಷೇತ್ರವಾಗಿರುವ ಶ್ರೀಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ಅವರ ಮೇಲೆ ಇಲ್ಲಸಲ್ಲದ ಸುಳ್ಳು ಸುದ್ದಿಗಳನ್ನು ಹರಡಿಸಿ, ಕ್ಷೇತ್ರದ ಬಗ್ಗೆ ಜನರಲ್ಲಿ ಅಪಕೀರ್ತಿ ಬರುವಂತಹ ಪಿತೂರಿಯನ್ನು ಮಾಡಲಾಗುತ್ತಿದೆ. ಹಿಂದುಗಳ ಭಾವನೆಗೆ ಧಕ್ಕೆ ಮಾಡಿರುವವರ ವಿರುದ್ದ ಕಾನೂನು ಕ್ರಮವಾಗಬೇಕೆಂದು ಒತ್ತಾಯಿಸಿ, ಸೆ.1 ರಂದು ಮಧ್ಯಾಹ್ನ 2.30ಕ್ಕೆ ಧರ್ಮಸ್ಥಳದಲ್ಲಿ ಬಿಜೆಪಿಯಿಂದ ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಈಗಾಗಲೇ ರಾಜ್ಯಾಧ್ಯಕ್ಷರು ಎಲ್ಲಾ ಜಿಲ್ಲೆಗಳಿಗೆ ಸೂಚನೆ ನೀಡಿದ್ದು. ಪ್ರತಿ ಜಿಲ್ಲೆಯಿಂದ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು, ಪಕ್ಷದ ಪ್ರಮುಖರು ಆಗಮಿಸುವಂತೆ ತಿಳಿಸಿದ್ದಾರೆ. ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಿಂದ ಬಸ್ ಹಾಗು ಸ್ವಂತ ವಾಹನಗಳಿಂದ ಪ್ರಮುಖ ಪದಾಧಿಕಾರಿಗಳು ಸಂಘಟನೆ ಮಾಡಿ ಸಮಾವೇಶದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಲು ಶ್ರಮಿಸಬೇಕು ಎಂದರು.

ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್ ಮಾತನಾಡಿ, ಮುಸ್ಲಿಂ ಮಹಿಳೆಯನ್ನು ದಸರಾ ಉದ್ಘಾಟನೆ ಆಹ್ವಾನಿಸಿರುವುದು ಹಿಂದು ಧಾರ್ಮಿಕ ಆಚರಣೆಗೆ ವಿರುದ್ದವಾಗಿದೆ. ಹಿಂದೂಗಳ ಭಾವನೆಯೊಂದಿಗೆ ಚೆಲ್ಲಾಟವಾಡುತ್ತಿರುವ ಸರ್ಕಾರ ತನ್ನ ನಿರ್ಧಾರವನ್ನು ಪುನರ್ ಪರಿಶೀಲನೆ ಮಾಡಬೇಕು ಎಂದು ಒತ್ತಾಯಿಸಿದರು.

ಸಭೆಯಲ್ಲಿ ಧರ್ಮಸ್ಥಳ ಚಲೋ ವಿಭಾಗೀಯ ಸಂಚಾಲಕ ವಿ.ಫಣೀಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ವೃಷಬೇಂದ್ರಪ್ಪ, ಹೊನ್ನೂರು ಮಹದೇವಸ್ವಾಮಿ, ಮಾಜಿ ಜಿಲ್ಲಾಧ್ಯಕ್ಷ ನಾರಾಯಣ ಪ್ರಸಾದ್, ರಾಷ್ಟ್ರೀಯ ಕಾರ್ಯಕಾರಣಿ ಸದಸ್ಯ ನೂರೊಂದುಶೆಟ್ಟಿ, ರಾಜ್ಯ ಎಸ್ಟಿ ಮೋರ್ಚಾ ಕಾರ್ಯದರ್ಶಿ ಜಯಸುಂದರ್, ಜಿಲ್ಲಾ ವಕ್ತಾರ ಕಾಡಹಳ್ಳಿ ಕುಮಾರ್, ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಮಲೆಯೂರು ಕಮಲಮ್ಮ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸೂರ್ಯ ಬಾಲರಾಜ್ ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net