

ಹನೂರು: ಪ್ರತಿಯೊಬ್ಬರೂ ಸ್ವಾವಲಂಬಿ ಬದುಕು ರೂಪಿಸಿಕೊಳ್ಳುವುದರ ಜತೆಗೆ ಆರ್ಥಿಕವಾಗಿ ಸಬಲರಾಗಲು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಸಹಕಾರಿಯಾಗಿದೆ ಎಂದು ಸಾಲೂರು ಬೃಹನ್ಮಠದ ಪೀಠಾಧಿಪತಿ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ತಿಳಿಸಿದರು.
ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಶುಕ್ರವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ವಲಯ ಕಚೇರಿಯ ಸೇವಾ ಕೇಂದ್ರ ಉದ್ಘಾಟಿಸಿ ಮಾತನಾಡಿದರು. ವೀರೇಂದ್ರ ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ ಹಳ್ಳಿಯಿಂದ ಪ್ರಾರಂಭವಾದ ಸಂಸ್ಥೆ ಇಂದು ರಾಜ್ಯಾದ್ಯಂತ ವಿಸ್ತರಿಸಿದ್ದು, 6 ಲಕ್ಷಕ್ಕೂ ಹೆಚ್ಚು ಸದಸ್ಯರನ್ನು ಒಳಗೊಂಡಿರುವುದರ ಮೂಲಕ ಪ್ರಸಿದ್ಧಿ ಪಡೆದಿದೆ. ಸಂಸ್ಥೆಯು ಕೃಷಿಕರು, ಮಹಿಳೆಯರು ಹಾಗೂ ಹಿಂದುಳಿದ ವರ್ಗಕ್ಕೆ ನೆರವು ನೀಡುವ ಮೂಲಕ ಗ್ರಾಮೀಣಾಭಿವೃದ್ಧಿಯ ಸಂಕಲ್ಪ ತೊಟ್ಟಿದೆ. ಕೃಷಿ, ಶಿಕ್ಷಣ, ಸ್ವಉದ್ಯೋಗ, ಆರೋಗ್ಯ ಸೇರಿದಂತೆ ಇನ್ನಿತರ ಕ್ಷೇತ್ರಗಳಿಗೆ ಉತ್ತೇಜನ ನೀಡುತ್ತಿದೆ ಎಂದು ಹೇಳಿದರು.
ಇದೇ ವೇಳೆ ರಚನೆಯಾದ ನೂತನ ಸ್ವಸಹಾಯ ಸಂಘಗಳಿಗೆ ದಾಖಲಾತಿ ಹಸ್ತಾಂತರಿಸಲಾಯಿತು. ಯೋಜನೆಯ ಪ್ರಾದೇಶಿಕ ನಿರ್ದೇಶಕ ಜಯರಾಮು ನೆಲ್ಲಿತ್ತಾಯ, ಜಿಲ್ಲಾ ನಿರ್ದೇಶಕಿ ಲತಾ ಬಂಗೇರಾ, ತಾಲೂಕು ಯೋಜನಾಧಿಕಾರಿ ಪ್ರವೀಣ್‌ಕುಮಾರ್, ಮೇಲ್ವಿಚಾರಕ ಮಂಜುನಾಥ್, ಗ್ರಾಪಂ ಅಧ್ಯಕ್ಷೆ ಅರ್ಚನಾ, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರಾದ ರಾಜಣ್ಣ, ರಾಚಪ್ಪ ಹಾಗೂ ಯೋಜನೆಯ ಸೇವಾ ಪ್ರತಿನಿಧಿಗಳು ಇದ್ದರು.