

ಮೈಸೂರು: ಮುಂದಿನ ನ.1ರಂದು ಅರ್ಥಪೂರ್ಣವಾಗಿ ಹಾಗೂ ಅದ್ದೂರಿಯಾಗಿ ಜಿಲ್ಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಹೇಳಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಆಚರಣೆ ಕುರಿತ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ನ.1ರಂದು ಬೆಳಗ್ಗೆ 9 ಗಂಟೆಗೆ ನಗರದ ಓವೆಲ್ ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಧ್ವಜಾರೋಹಣ ನೆರವೇರಿಸುವರು. ಅದಕ್ಕೂ ಮುಂಚೆ ಬೆಳಗ್ಗೆ 8 ಗಂಟೆಗೆ ಅರಮನೆ ಆವರಣದಲ್ಲಿ ಇರುವ ಭುವನೇಶ್ವರಿ ದೇವಿಗೆ ಪೂಜೆ ಸಲ್ಲಿಸಿ ಸಚಿವರು ಚಾಲನೆ ನೀಡುವರು.
ಮೆರವಣಿಗೆಯು ಕಾರ್ಯಕ್ರಮ ಸ್ಥಳದಿಂದ ಹೊರಟು ಕೆ.ಆರ್. ವೃತ್ತದ ಮೂಲಕ ಕಾರ್ಯಕ್ರಮದ ಸ್ಥಳವನ್ನು ತಲುಪುವುದು. ಮೆರವಣಿಗೆಯಲ್ಲಿ ಕಲಾತಂಡಗಳು, ಪೊಲೀಸ್ ಬ್ಯಾಂಡ್, ಸ್ತಬ್ಧಚಿತ್ರಗಳು ಪಾಲ್ಗೊಳ್ಳಲಿವೆ ಎಂದು ತಿಳಿಸಿದರು.
ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಕಾರ್ಯಕ್ರಮದ ವೇದಿಕೆ, ಶಾಮಿಯಾನ ಹಾಗೂ ಆಸನ ವ್ಯವಸ್ಥೆ, ಅಲಂಕಾರ ಮತ್ತು ಆಹ್ವಾನ ಪತ್ರಿಕೆಗಳ ಮುದ್ರಣ, ಶಿಷ್ಟಾಚಾರದ ಪ್ರಕಾರ ಗಣ್ಯರ ಆಹ್ವಾನವನ್ನು ಮಾಡಲಾಗುವುದು. ಮೆರವಣಿಗೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಮೆರವಣಿಗೆಗೆ ಕಲಾ ತಂಡಗಳನ್ನು ನೀಡಲಾಗುವುದು ಎಂದು ತಿಳಿಸಿದರು.
ಮೆರವಣಿಗೆಯಲ್ಲಿ ಭಾಗವಹಿಸುವ ಸ್ತಬ್ಧಚಿತ್ರಗಳು ಕನ್ನಡ ಭಾಷೆಯ ಹಿರಿಮೆ ಗರಿಮೆಯನ್ನು ಸಾರುವಂತೆ ಇರಬೇಕು. ನಾಡಗೀತೆಗೆ 100 ವರ್ಷ ತುಂಬಿರುವ ಕುರಿತು ಸ್ತಬ್ಧ ಚಿತ್ರ ನಿರ್ಮಿಸಬಹುದು. ಎಲ್ಲ ಸರ್ಕಾರಿ ನೌಕರರು ಕಡ್ಡಾಯವಾಗಿ ರಾಜ್ಯೋತ್ಸವದಲ್ಲಿ ಭಾಗವಹಿಸಬೇಕು. ನೌಕರರ ಹಾಜರಾತಿ ಪಡೆಯಲಾಗುವುದು ಎಂದು ತಿಳಿಸಿದರು.
ಕಳೆದ ಬಾರಿಯ ಶೈಕ್ಷಣಿಕ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಕನ್ನಡ ಭಾಷೆಯಲ್ಲಿ ಅಧಿಕ ಅಂಕ ಗಳಿಸಿದ ಮಕ್ಕಳಿಗೆ ಬಹುಮಾನ ವಿತರಿಸಲಾಗುವುದು. ಕನ್ನಡ ರಾಜ್ಯೋತ್ಸವ ದಿನದಂದು ಪರೇಡ್‌ನಲ್ಲಿ ಭಾಗವಹಿಸುವ ಶಾಲೆ, ಕಾಲೇಜು ಮಕ್ಕಳಿಗೆ ಲಘು ಉಪಾಹಾರ ವ್ಯವಸ್ಥೆಯನ್ನು ಚಾಮುಂಡೇಶ್ವರಿ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಮಾಡಲಾಗುವುದು. ಕನ್ನಡ ರಾಜ್ಯೋತ್ಸವದ ಅಂಗವಾಗಿ ಜಿಲ್ಲಾ ಮಟ್ಟದಲ್ಲಿ ಸಾಧನೆ ಮಾಡಿದ ಗಣ್ಯರಿಗೆ ಸನ್ಮಾನ ಮಾಡಲಾಗುವುದು ಎಂದು ತಿಳಿಸಿದರು.
ವಿವಿಧ ಸಮುದಾಯದ ಮುಖಂಡರು ಮಾತನಾಡಿ, ಸ್ಟಾರ್ ಹೋಟೆಲ್‌ಗಳು ಹಾಗೂ ಮಾಲ್‌ಗಳಲ್ಲಿ ಕನ್ನಡ ನಾಮಫಲಕಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಅಳವಡಿಸಬೇಕು. ಚಲನಚಿತ್ರ ಮಂದಿರಗಳಲ್ಲಿ ಕನ್ನಡ ಭಾಷೆಯ ಚಿತ್ರಗಳನ್ನು ಹೆಚ್ಚು ಪ್ರದರ್ಶನ ಮಾಡಬೇಕು. ಎಲ್ಲ ಕಡೆ ಕನ್ನಡ ಭಾಷೆಯ ಬಳಕೆ ಹೆಚ್ಚಾಗಿ ಆಗಬೇಕು. ಎಲ್ಲ ಅಂಗಡಿ, ಮಾಲ್‌ಗಳಲ್ಲಿ ಶೇ. 60ರಷ್ಟು ಕನ್ನಡದಲ್ಲಿ ನಾಮಫಲಕಗಳು ಇರಬೇಕು. ಮಹಾನಗರ ಪಾಲಿಕೆಯ ವತಿಯಿಂದ ಅನುಮತಿ ನೀಡುವಾಗ ಈ ಷರತ್ತು ವಿಧಿಸಿ ಅನುಮತಿ ನೀಡಬೇಕು ಎಂದು ಆಗ್ರಹಿಸಿದರು
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಎಂ.ಡಿ ಸುದರ್ಶನ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಕನ್ನಡ ಪರ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.