

ಬೀದರ್: ನಗರದ ತಾಲೂಕು ಪಂಚಾಯಿತಿ ಕಚೇರಿ ಪಕ್ಕದ ಸಹಕಾರ ಸಂಘಗಳ ಉಪ ನಿಬಂಧಕರ ಕಚೇರಿ ಆವರಣದಲ್ಲಿ ನಿರ್ಮಿಸಿದ ನಂದಿನಿ ಹಾಲು ಮಳಿಗೆಗೆ ಬುಧವಾರ ಚಾಲನೆ ನೀಡಲಾಯಿತು.
ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಉದ್ಘಾಟಿಸಿ ಮಾತನಾಡಿ, ಸ್ವಯಂ ಉದ್ಯೋಗಕ್ಕೆ ಹಾಲು ಮಳಿಗೆ ಸಹಕಾರಿಯಾಗಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಗುಣಮಟ್ಟ ಹೊಂದಿದ ನಂದಿನಿ ಹಾಲು ಉಪಯೋಗಿಸಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಸಹ ಮನೆ, ಮನೆಗೆ ಹಾಲು ವಿತರಣೆಗೆ ಕ್ರಮ ಕೈಗೊಳ್ಳಬೇಕು ಎಂದರು.
ಡಿಸಿಸಿ ಬ್ಯಾಂಕ್ ಅಧ್ಯಕ್ಷ ಉಮಾಕಾಂತ ನಾಗಮಾರಪಳ್ಳಿ, ಕರ್ನಾಟಕ ಹಾಲು ಮಹಾಮಂಡಳದ ನಿರ್ದೇಶಕ ಮಾರುತಿ ಖಾಶೆಂಪುರ, ಡಾ.ಗುರುಪಾದಪ್ಪ ನಾಗಮಾರಪಳ್ಳಿ ಸಹಕಾರ ಆಸ್ಪತ್ರೆ ಅಧ್ಯಕ್ಷ ಸೂರ್ಯಕಾಂತ ನಾಗಮಾರಪಳ್ಳಿ, ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ, ಕಲಬುರಗಿ, ಬೀದರ್ ಹಾಗೂ ಯಾದಗಿರಿ ಹಾಲು ಒಕ್ಕೂಟದ ಅಧ್ಯಕ್ಷ ಆರ್.ಕೆ. ಪಾಟೀಲ್, ನಿರ್ದೇಶಕರಾದ ಮಲ್ಲಿಕಾರ್ಜುನ ಬಿರಾದಾರ, ವೀರಣ್ಣ ಝಳಕಿ, ಭೀಮರಾವ ಬಳತೆ, ಜಾಗೀರದಾರ್, ದೀಪಕ್ ವಾಲಿ, ಶಾಲಿವಾನ್ ವಾಡೆ, ಸೂರ್ಯಕಾಂತ ಇತರರಿದ್ದರು.
ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಕಲಬುರಗಿ ಹಾಲು ಒಕ್ಕೂಟದಿಂದ ಹಾಲು ಮಳಿಗೆ ಸ್ಥಾಪಿಸಲಾಗುತ್ತಿದೆ. ಈಗಾಗಲೇ 44 ಪಾರ್ಲರ್ ಆರಂಭಿಸಿದ್ದು, ಇದೀಗ 45ನೇ ಮಳಿಗೆಗೆ ಚಾಲನೆ ನೀಡಲಾಗಿದೆ.