ನಗರ ವಿಸ್ತರಣೆಯಿಂದ ಉದ್ಯೋಗ ಸೃಷ್ಟಿ

AAP
Published on

ಚಿತ್ರದುರ್ಗ: ಅಭಿವೃದ್ಧಿ ಯೋಜನೆಗಳೊಂದಿಗೆ ಕೋಟೆನಗರಿ ವಿಸ್ತರಣೆಗೆ ಕ್ರಮವಹಿಸಿದಾಗ ಉದ್ಯೋಗಗಳು ಸೃಷ್ಟಿಯಾಗಲಿವೆ. ಆ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಸ್ಥಳೀಯ ಶಾಸಕರು ಸರ್ಕಾರದಿಂದ ಅನುದಾನ ತರಬೇಕು ಎಂದು ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಬಿ.ಇ.ಜಗದೀಶ್ ಒತ್ತಾಯಿಸಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಗರದ ಪ್ರಮುಖ ರಸ್ತೆಗಳ ವಿಸ್ತರಣೆಗೆ ಗರಿಷ್ಠ 300 ರಿಂದ 400 ಕೋಟಿ ರೂ. ವೆಚ್ಚ ಆಗಲಿದೆ. ಆದರೆ, ಇದರಿಂದ ಜನಸಾಮಾನ್ಯರ ಸಂಕಷ್ಟ ದೂರಾಗದು ಎಂದರು.

ಹೊಸ ಜಿಲ್ಲಾಧಿಕಾರಿ ಕಚೇರಿ ನಿರ್ಮಾಣ ಆಗುತ್ತಿರುವ ಸ್ಥಳದಲ್ಲಿ ಸರ್ಕಾರಿ ಜಮೀನಿದ್ದು, ಅಲ್ಲಿ ನೂತನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ನಿರ್ಮಿಸಿದರೆ, ನಗರ ವ್ಯಾಪ್ತಿಯಲ್ಲಿನ ಸಂಚಾರ ದಟ್ಟಣೆ ಕಡಿಮೆಯಾಗಲಿದೆ. ಇಡೀ ನಗರವನ್ನು ಪ್ರಗತಿಯಲ್ಲಿ ಕೊಂಡೊಯ್ದರೆ ಉದ್ಯೋಗ ಸೃಷ್ಟಿಯಾಗಲಿವೆ ಎಂದು ಹೇಳಿದರು.

ಶಿವಮೊಗ್ಗ ನಗರ ಮಾದರಿಯಲ್ಲಿ ಖಾಸಗಿ ಬಸ್ ನಿಲ್ದಾಣ ಹೊರಭಾಗದಲ್ಲಿ ಇರಬೇಕು. ಈಗಿರುವ ಸ್ಥಳದಲ್ಲಿ ಮಾರುಕಟ್ಟೆ ನಿರ್ಮಿಸಿದರೆ ಜನರಿಗೆ ಅನುಕೂಲವಾಗಲಿದೆ. ನಗರದಲ್ಲಿ ಅವೈಜ್ಞಾನಿಕ ರಸ್ತೆ ವಿಭಜಕಗಳನ್ನು ನಿರ್ಮಿಸಿದ್ದು, ತೊಂದರೆಯೇ ಹೆಚ್ಚು ಎಂದರು.

ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಕೂಲಿ ಕಾರ್ಮಿಕರಿಗೆ ಆಮಿಷ ತೋರಿಸಿ ಸಾಲ ನೀಡಿ ಅವರನ್ನು ದಿಕ್ಕು ತಪ್ಪಿಸುವ ಕಾರ್ಯ ಮಾಡುತ್ತಿದ್ದಾರೆ. ಇದರ ಬಗ್ಗೆ ಆರ್‌ಬಿಐ ಕೂಡಲೇ ಕ್ರಮ ಕೈಗೊಳ್ಳಬೇಕು. ಇತ್ತೀಚೆಗೆ ಇವುಗಳ ಹಾವಳಿಯಿಂದ 6 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದು, ಅಂತಹ ಸಂಸ್ಥೆಗಳ ವಿರುದ್ಧ ಸರ್ಕಾರ ನಿರ್ದಾಕ್ಷಿಣ್ಯ ಕಾನೂನು ಕ್ರಮಕ್ಕೆ ಮುಂದಾಗಬೇಕು. ಸೂಕ್ತ ಪರಿಹಾರ ಘೋಷಿಸಬೇಕು ಎಂದು ಕೋರಿದರು.

ಪಕ್ಷದ ಜಿಲ್ಲಾ ಕಾರ್ಯದರ್ಶಿ ರಾಮಣ್ಣ, ತಾಲೂಕು ಅಧ್ಯಕ್ಷ ಚಂದ್ರಣ್ಣ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net