ನದಿ ಪರಿಸರ ಸಂರಕ್ಷಣೆಗೆ ಪಣ ತೊಡಿ

04Kush001
ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ನೇತೃತ್ವದಲ್ಲಿ ಕಾವೇರಿ ನದಿಗೆ ನಡೆದ 148ನೆಯ ಮಹಾ ಆರತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ರೋಹಿತ್, ಚಂದ್ರಮೋಹನ್, ಬೋಸ್ ಮೊಣ್ಣಪ್ಪ, ಪೂರ್ಣಿಮಾ ಇತರರಿದ್ದರು.
Published on

ಕುಶಾಲನಗರ: ನದಿ ಪರಿಸರ ಉಳಿಸಿ ಸಂರಕ್ಷಣೆ ಮಾಡಲು ಪ್ರತಿಯೊಬ್ಬರು ಪಣತೊಡಬೇಕಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೋಮವಾರಪೇಟೆ ತಾಲೂಕು ಯೋಜನಾಧಿಕಾರಿ ರೋಹಿತ್ ತಿಳಿಸಿದರು.

ಹುಣ್ಣಿಮೆ ಅಂಗವಾಗಿ ಭಾನುವಾರ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ನೇತೃತ್ವದಲ್ಲಿ ಕಾವೇರಿ ನದಿಗೆ ನಡೆದ 148ನೇ ಮಹಾ ಆರತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಕೃತಿಯನ್ನು ಆರಾಧನೆಯೊಂದಿಗೆ ಉಳಿಸುವ ಪ್ರಯತ್ನ ಹಾಗೂ ಜನರಿಗೆ ಅರಿವು ಜಾಗೃತಿ ಮೂಡಿಸುವ ಕೆಲಸ ನಿರಂತರವಾಗಿ ನಡೆಯಬೇಕಾಗಿದೆ ಎಂದರು.

ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ಸಂಚಾಲಕ ಚಂದ್ರಮೋಹನ್ ಮಾತನಾಡಿ, ದಕ್ಷಿಣ ಭಾರತದ ಜೀವನದಿ ಎನಿಸಿರುವ ಕಾವೇರಿ ನದಿಯ ನೀರಿಗಾಗಿ ರಾಜ್ಯಗಳ ನಡುವೆ ಹೋರಾಟ ನಡೆಯುತ್ತಿದೆ. ಆದರೆ ನದಿ ಜಲಮೂಲಗಳ ಸಂರಕ್ಷಣೆಗೆ ಯಾವುದೇ ಶಾಶ್ವತ ಯೋಜನೆಗಳು ರೂಪುಗೊಂಡಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.

ಈ ಸಂಬಂಧ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಾವೇರಿ ನದಿ ಸ್ವಚ್ಛತೆ ಹಾಗೂ ಸಂರಕ್ಷಣೆ ನಿಟ್ಟಿನಲ್ಲಿ ಯೋಜನೆಗಳನ್ನು ರೂಪಿಸುವಂತಾಗಬೇಕು ಎಂದರು.

ಅರ್ಚಕ ಕೃಷ್ಣಮೂರ್ತಿ ಭಟ್ ಅವರು ಕುಂಕುಮಾರ್ಚನೆ, ಅಷ್ಟೋತ್ತರ ನಂತರ ನದಿಗೆ ಮಹಾ ಆರತಿ ಬೆಳಗಿ, ನಾಡಿನಲ್ಲಿ ಬರಗಾಲ ಆವರಿಸದೆ ಉತ್ತಮ ಮಳೆ ಬೆಳೆ ಬರುವ ಮೂಲಕ ಸುಭಿಕ್ಷವಾಗಿರಲಿ ಎಂದು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.

ಕುಶಾಲನಗರ ಕೊಡವ ಸಮಾಜದ ಅಧ್ಯಕ್ಷ ಮಂಡೆಪಂಡ ಬೋಸ್ ಮೊಣ್ಣಪ್ಪ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕುಶಾಲನಗರ ವಲಯ ಮೇಲ್ವಿಚಾರಕಿ ಪೂರ್ಣಿಮಾ, ಸಂಘದ ಸೇವಾ ಪ್ರತಿನಿಧಿಗಳು, ಮಹಾ ಆರತಿ ಬಳಗದ ಸಂಚಾಲಕಿ ವನಿತಾ ಚಂದ್ರಮೋಹನ್ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net