

ಮಡಿಕೇರಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ಗ್ರಾಮೀಣ ಸ್ವಸಹಾಯ ಸಂಘದ ಮಹಿಳೆಯರು ಸದುಪಯೋಗ ಪಡಿಸಿಕೊಳ್ಳುವಂತೆ ಜಿ.ಪಂ. ಉಪ ಕಾರ್ಯದರ್ಶಿ ಜಿ.ಧನರಾಜು ಕರೆ ನೀಡಿದರು.
ನಗರದ ಜಿ.ಪಂ. ಕಚೇರಿಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿ ಆಯೋಜಿಸಿದ್ದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ನರೇಗಾ ಯೋಜನೆ ಪ್ರಮುಖವಾಗಿದೆ. ಗ್ರಾಮೀಣ ಭಾಗದಲ್ಲಿ ವಲಸೆಯನ್ನು ತಪ್ಪಿಸಿ, ನಿಮ್ಮೂರಿನಲ್ಲಿಯೇ 100 ದಿನಗಳ ಉದ್ಯೋಗವನ್ನು ಕುಟುಂಬಕ್ಕೆ ನೀಡಲಾಗುತ್ತಿದೆ. ಜಿಲ್ಲೆಯಲ್ಲಿಯೂ ನರೇಗಾ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗುತ್ತದೆ. ವೈಯಕ್ತಿಕ ಮತ್ತು ಸಮುದಾಯ ಕಾಮಗಾರಿಗಳ ಮೂಲಕ ಗ್ರಾಮದ ಅಭಿವೃದ್ಧಿಯ ಜತೆಗೆ ದುರ್ಬಲ ವರ್ಗಗಳ ಸಬಲೀಕರಣವೂ ನಡೆಯುತ್ತಿದೆ ಎಂದು ತಿಳಿಸಿದರು.
ಜಿ.ಪಂ. ಯೋಜನಾ ನಿರ್ದೇಶಕ ಜಗದೀಶ್ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಮಹಿಳೆಯರ ಸಬಲೀಕರಣಕ್ಕಾಗಿ ಸಂಜೀವಿನಿ ಒಕ್ಕೂಟಗಳ ಮೂಲಕ ಸರ್ಕಾರ ಹಲವು ಕಾರ್ಯಕ್ರಮ ಹಮ್ಮಿಕೊಂಡಿದೆ. ಈ ಮೂಲಕ ಎನ್‌ಆರ್‌ಎಲ್‌ಎಂ ಹಾಗೂ ಉದ್ಯೋಗ ಖಾತ್ರಿ ಯೋಜನೆಯ ಸಂಯೋಜನೆಯೊಂದಿಗೆ ಅಣಬೆ ಶೆಡ್, ಸಂಜೀವಿನ್ ಶೆಡ್‌ಗಳನ್ನು ನಿರ್ಮಿಸಿಕೊಳ್ಳಬಹುದು ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ವತಿಯಿಂದ ನಡೆದ ಮಾಹಿತಿ ಕಾರ್ಯಾಗಾರದಲ್ಲಿ ಅನುಷ್ಠಾನ ಇಲಾಖೆ ಅಧಿಕಾರಿಗಳೇ ಖುದ್ದು ಯೋಜನೆಯ ಮಾಹಿತಿ ನೀಡಿದರು. ತೋಟಗಾರಿಕಾ ಇಲಾಖೆ ಮತ್ತು ನರೇಗಾ ಸಹಯೋಗದೊಂದಿಗೆ ಕೈಗೊಳ್ಳಬಹುದಾದ ಕಾಮಗಾರಿಗಳ ಬಗ್ಗೆ ತೋಟಗಾರಿಕಾ ಇಲಾಖೆ ಉಪನಿರ್ದೇಶಕ ಪ್ರಮೋದ್, ಅಣಬೆ ಬೇಸಾಯದ ಕುರಿತು ಎಎಚ್‌ಒ ಕಾವ್ಯಾ ಮಾಹಿತಿ ನೀಡಿದರು.
ಇಂಡಿಯಾ ಪೋಸ್ಟಲ್ ಪೇಮೆಂಟ್ ಸಂಬಂಧಿಸಿದಂತೆ ನಾಗರಾಜ್, ಇ-ಶ್ರಮ ಯೋಜನೆ ಕುರಿತು ಹಿರಿಯ ಕಾರ್ಮಿಕ ನಿರೀಕ್ಷಕ ಎಂ.ಎಂ.ಯತ್ನಟ್ಟಿ ಮಾಹಿತಿ ನೀಡಿದರು. ಮುಖ್ಯ ಯೋಜನಾಧಿಕಾರಿ ರಾಜ್‌ಗೋಪಾಲ್, ಮುಖ್ಯಲೆಕ್ಕಾಧಿಕಾರಿ ಝೀವಲ್ ಖಾನ್, ಗ್ರಾಮೀಣ ಉದ್ಯೋಗ ಸಹಾಯಕ ನಿರ್ದೇಶಕರಾದ ರವೀಶ್ ಇತರರು ಇದ್ದರು.